ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

400 ಮುಡಾ ನಿವೇಶನಗಳ ಹರಾಜು ಶೀಘ್ರ

ಪ್ರಗತಿ ಪರಿಶೀಲನಾ ಸಭೆ: ನಗರಾಭಿವೃದ್ಧಿ ಇಲಾಖೆ ಸಚಿವ ಭೈರತಿ ಬಸವರಾಜ್‌ ಅಭಿಮತ
Last Updated 28 ಆಗಸ್ಟ್ 2020, 17:01 IST
ಅಕ್ಷರ ಗಾತ್ರ

ಮಂಡ್ಯ: ‘ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರ ಅಭಿವೃದ್ಧಿಗೊಳಿಸಿರುವ 400 ನಿವೇಶನಗಳ ಹರಾಜು ಪ್ರಕ್ರಿಯೆಗೆ ಶೀಘ್ರ ಚಾಲನೆ ನೀಡಲಾಗುವುದು. ನಿವೇಶನ ಮಾರಾಟದಿಂದ ಬಂದ ಹಣವನ್ನು ನಗರದ ಸಮಗ್ರ ಅಭಿವೃದ್ಧಿಗೆ ಬಳಕೆ ಮಾಡಲಾಗುವುದು’ ಎಂದು ನಗರಾಭಿವೃದ್ಧಿ ಇಲಾಖೆ ಸಚಿವ ಭೈರತಿ ಬಸವರಾಜ್‌ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ನಗರಾಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ವಿವೇಕಾನಂದ ಬಡಾವಣೆಯನ್ನು ಈಗಾಗಲೇ ಅಭಿವೃದ್ಧಿಗೊಳಿಸಲಾಗಿದೆ. 207 ನಿವೇಶನಗಳ ಹಂಚಿಕೆಯಲ್ಲಿ ಉಂಟಾಗಿರುವ ಗೊಂದಲ ಸಂಬಂಧ ಸಿಬಿಐ ತನಿಖೆ ನಡೆಯುತ್ತಿದೆ. ತನಿಖೆಯ ಪ್ರಕ್ರಿಯೆ ಒಂದು ಹಂತಕ್ಕೆ ಬಂದಿದ್ದು ಆ ನಿವೇಶನಗಳೂ ಮುಡಾ ವ್ಯಾಪ್ತಿಗೆ ಸಿಗುವ ನಿರೀಕ್ಷೆ ಇದೆ. ಅವುಗಳನ್ನು ಹರಾಜು ಪ್ರಕ್ರಿಯೆಯ ಮೂಲಕ ಮಾರಾಟ ಮಾಡಲಾಗುವುದು. ಸಾತನೂರು ಬಳಿಯ ನಿವೇಶನಗಳ ಹಂಚಿಕೆಗೂ ಕ್ರಮ ಕೈಗೊಳ್ಳಲಾಗುವುದು’ ಎಂದು.

‘ಪ್ರಾಧಿಕಾರದ ವತಿಯಿಂದ ಬಡಜನರಿಗೆ ನಿವೇಶನ ಹಂಚಿಕೆ ಮಾಡಲಾಗುವುದು. ನಗರದ ಸುತ್ತಮುತ್ತಲೂ ಕೃಷಿ ಭೂಮಿಯಿದ್ದು ನಗರದ ಅಭಿವೃದ್ಧಿಗೆ ತೊಡಕಾಗಿದೆ ಎಂಬ ವಿಚಾರ ತಿಳಿದಿದೆ. ಈ ವಿಚಾರವನ್ನು ಸರ್ಕಾರದ ಮುಂದಿಟ್ಟು ಯಾವ ರೀತಿ ನಗರವನ್ನು ಅಭಿವೃದ್ಧಿಗೊಳಿಸಬೇಕು ಎಂಬ ಬಗ್ಗೆ ಶೀಘ್ರ ತೀರ್ಮಾನ ಕೈಗೊಳ್ಳಲಾಗುವುದು. ಸದ್ಯ ಸಂಪನ್ಮೂಲ ಕ್ರೋಢೀಕರಣಕ್ಕೆ ಆದ್ಯತೆ ನೀಡಲಾಗುವುದು’ ಎಂದು ಹೇಳಿದರು.

‘ನಗರಕ್ಕೆ 24X7 ಕುಡಿಯುವ ನೀರು ಪೂರೈಕೆ ಮಾಡಲು ₹ 113 ಕೋಟಿ ವೆಚ್ಚದಲ್ಲಿ ನಡೆಯುತ್ತಿರುವ ಕಾಮಗಾರಿಗೆ ಹಿನ್ನಡೆಯಾಗಿದೆ. ಬೆಂಗಳೂರು–ಮೈಸೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕಾಮಗಾರಿಗೆ ತಡೆಯಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಶೀಘ್ರ ಕಾಮಗಾರಿ ಪೂರ್ಣಗೊಳಿಸಲಾಗುವುದು. ಕುಡಿಯುವ ನೀರು ಪೂರೈಕೆ ತಡಮಾಡದೇ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದರು.

‘ತಾಲ್ಲೂಕುಗಳಲ್ಲೂ ವಿವಿಧೆಡೆ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಬಗ್ಗೆ ದೂರುಗಳು ಬಂದಿದ್ದು ತಾಲ್ಲೂಕು ಕಾರ್ಯ ನಿರ್ವಾಹಕ ಅಧಿಕಾರಿಗಳು ಶೀಘ್ರ ಈ ಬಗ್ಗೆ ಎಚ್ಚರವಹಿಸಬೇಕು. ಸ್ಥಳೀಯ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ಪಡೆದು ಕುಡಿಯುವ ನೀರಿನ ಯೋಜನೆಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಬೇಕು. ಜೊತೆಗೆ ಒಳಚರಂಡಿ ವ್ಯವಸ್ಥೆಯನ್ನೂ ಬಲಪಡಿಸಬೇಕು’ ಎಂದರು.

‘ಅಭಿವೃದ್ಧಿ ವಿಚಾರದಲ್ಲಿ ಯಾವುದೇ ಕಾರಣಕ್ಕೂ ನಾವು ರಾಜಕಾರಣ ಮಾಡುವುದಿಲ್ಲ. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಕೂಡ ಸಚಿವರಿಗೆ ಈ ಕುರಿತು ಸೂಚನೆ ನೀಡಿದ್ದಾರೆ. ಯಾವುದೇ ಪಕ್ಷದ ಶಾಸಕರು ಇದ್ದರೂ ಆ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ನೆರವು ನೀಡಲಾಗುವುದು’ ಎಂದು ಹೇಳಿದರು.

ಸಭೆಯಲ್ಲಿ ಶಾಸಕ ಸಿ.ಎಸ್‌.ಪುಟ್ಟರಾಜು, ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್, ಜಿಲ್ಲಾ ಪಂಚಾಯಿತಿ ಸಿಇಒ ಜುಲ್ಫಿಕರ್‌ ಉಲ್ಲಾ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀನಿವಾಸ್‌ ಇದ್ದರು.

ಅಧಿಕಾರಿಗಳಿಗೆ ತರಾಟೆ

ನಿವೇಶನ ಖರೀದಿ ಮಾಡಿದವರಿಗೆ ಖಾತೆ ಮಾಡಿಕೊಡದ ಅಧಿಕಾರಿಗಳ ವಿರುದ್ಧ ಸಚಿವ ಭೈರತಿ ಬಸವರಾಜ್‌ ಕಿಡಿಕಾರಿದರು. ವಿವಿಧ ಕಾಮಗಾರಿ ಮುಗಿಸಲು ಮೀನಾಮೇಷ ಎಣಿಸುತ್ತಿರುವ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

‘ನಿಗದಿತ ಅವಧಿಯಲ್ಲಿ ಕುಡಿಯುವ ನೀರಿನ ಕಾಮಗಾರಿ ಮುಗಿಸಲು ಸಾಧ್ಯವಾಗದಿದ್ದರೆ ಟೆಂಡರ್‌ ರದ್ದು ಮಾಡಿ. ಎಂಜಿನಿಯರ್‌ಗಳು ನಿದ್ದೆ ಮಾಡುತ್ತಿದ್ದಾರೆ. ಮುಂದಿನ ಸಭೆಯ ವೇಳೆಗೆ ಸಮಗ್ರ ವರದಿ ನೀಡಬೇಕು. ಇಲ್ಲದಿದ್ದರೆ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಸಿದರು.

ಸ್ಮಾರ್ಟ್‌ ಸಿಟಿಯಾಗಿ ಮಂಡ್ಯ: ಕೆಸಿಎನ್‌

ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಮಾತನಾಡಿ ‘ಮಂಡ್ಯ ನಗರವನ್ನು ಸ್ಮಾರ್ಟ್‌ ಸಿಟಿಯನ್ನಾಗಿ ಅಭಿವೃದ್ಧಿಗೊಳಿಸಲು ಚಿಂತನೆ ನಡೆಸಲಾಗುತ್ತಿದೆ. ಮುಖ್ಯಮಂತ್ರಿಗಳ ಜೊತೆಯಲ್ಲೂ ಈ ವಿಚಾರ ಚರ್ಚೆ ನಡೆಸಲಾಗಿದ್ದು ಅದಕ್ಕೆ ಅವರು ಸಂಪೂರ್ಣ ಸಹಕಾರ ನೀಡಲು ಒಪ್ಪಿದ್ದಾರೆ’ ಎಂದರು.

‘ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಬಡಾವಣೆಗಳನ್ನು ಒಂದುಗೂಡಿಸಿ ನಗರದ ಸುತ್ತಲೂ ರಿಂಗ್‌ ರಸ್ತೆ, ಬೈಪಾಸ್‌ ಮಾಡಲಾಗುವುದು. ಹೈಟೆಕ್‌ ಕಟ್ಟಡ ನಿರ್ಮಾಣ ಮಾಡಿ ಮೈಸೂರು, ಬೆಂಗಳೂರಿಗೆ ಸಮಾನಾಂತರವಾಗಿ ಅಭಿವೃದ್ಧಿಗೊಳಿಸಲಾಗುವುದು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT