ಮಂಡ್ಯ: ಕಾವೇರಿ ಮೇಲುಸ್ತುವಾರಿ ಸಮಿತಿ ನಿರ್ದೇಶನದಂತೆ ಕಾವೇರಿ ನೀರಾವರಿ ನಿಗಮವು ತಮಿಳುನಾಡಿಗೆ ನೀರು ಹರಿಸಿದ್ದು, 5 ಸಾವಿರ ಕ್ಯುಸೆಕ್‌ಗೂ ಹೆಚ್ಚು ನೀರನ್ನು ನದಿಗೆ ಬಿಡಲಾಗುತ್ತಿದೆ.
‘ಕಾವೇರಿ ನ್ಯಾಯಮಂಡಳಿ ತೀರ್ಪಿನ ಅನ್ವಯ ತಿಂಗಳ ಪಾಲು ನೀಡಬೇಕೆಂಬ ತಮಿಳುನಾಡು ಸರ್ಕಾರದ ಮನವಿಗೆ ಸ್ಪಂದಿಸಿರುವ ಮೇಲುಸ್ತುವಾರಿ ಸಮಿತಿಯು, ನೀರು ಹರಿಸಲು ಸೂಚಿಸಿದೆ’ ಎಂದು ನಿಗಮದ ಮೂಲಗಳು ತಿಳಿಸಿವೆ. ಶನಿವಾರ ಬೆಳಿಗ್ಗೆ 6 ಗಂಟೆ ವೇಳೆಗೆ 5,358 ಕ್ಯುಸೆಕ್ ಹೊರಹರಿವು ದಾಖಲಾಗಿತ್ತು. 10 ದಿನಗಳಿಂದ ನಾಲೆಗಳಿಗೆ ನೀರು ನಿಲ್ಲಿಸಲಾಗಿದೆ.
ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ರೈತಸಂಘದ ಸದಸ್ಯರು ಶನಿವಾರ ಪ್ರತಿಭಟನೆ ನಡೆಸಿದರು. ‘ಮುಂದಿನ ಹಂಗಾಮಿನಲ್ಲಿ ಭತ್ತ ನಾಟಿ ಮಾಡಲು ಅನುಮತಿ ನೀಡಬೇಕು’ ಎಂದು ಒತ್ತಾಯಿಸಿದರು.
‘ಸದ್ಯಕ್ಕೆ ಜಲಾಶಯದಲ್ಲಿ 113 ಅಡಿ ನೀರಿದ್ದು ನಮಗೇ ಕೊರತೆಯಾಗಿದೆ. ಮುಂದೇನು ಮಾಡಬೇಕೆಂಬ ಬಗ್ಗೆ ಚರ್ಚಿಸಿ ನಿರ್ಧರಿಸಲಾಗುವುದು. ಇದೇ 11ರ ನಂತರ ಮಳೆಯಾಗುವ ನಿರೀಕ್ಷೆ ಇದೆ’ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪ್ರತಿಕ್ರಿಯಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.