ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರದ ವಿರುದ್ಧ ಯಡಿಯೂರಪ್ಪ ವಾಗ್ದಾಳಿ

ದಕ್ಷಿಣ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ಪ್ರಚಾರಸಭೆಯಲ್ಲಿ ಭಾಗಿ
Last Updated 31 ಮೇ 2016, 5:26 IST
ಅಕ್ಷರ ಗಾತ್ರ

ಮಂಡ್ಯ:  ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ. ಉತ್ತಮ ಆಡಳಿತ ನೀಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

ನಗರದ ಕಲಾ ಮಂದಿರದಲ್ಲಿ ದಕ್ಷಿಣ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮೈ.ವಿ. ರವಿಶಂಕರ ಅವರ ಪ್ರಚಾರಸಭೆಯಲ್ಲಿ ಅವರು ಮಾತನಾಡಿದರು.
ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ, ಪಂಗಡದವರ ಪರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೊಳ್ಳುತ್ತಾರೆ. ಆದರೆ, ಅಂಬೇಡ್ಕರ್‌ ಅವರನ್ನು ಕಾಂಗ್ರೆಸ್‌ ಪಕ್ಷ ಚುನಾವಣೆಯಲ್ಲಿ ಸೋಲಿಸಿತ್ತು. ಅವರಿಗೆ ಕಾಂಗ್ರೆಸ್‌ ಸಾಕಷ್ಟು ತೊಂದರೆ ನೀಡಿತ್ತು ಎಂದು ಹೇಳಿದರು.

ಬಿಜೆಪಿಯು ಸಾಮಾನ್ಯ ಕಾರ್ಯಕರ್ತರಿಗೆ ಅವಕಾಶ ನೀಡುತ್ತದೆ ಎಂಬ ಕಾರಣಕ್ಕಾಗಿಯೇ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಮುಖಂಡರು ಬಿಜೆಪಿ ಸೇರುತ್ತಿದ್ದಾರೆ. ರಾಜ್ಯದ ಜನರು ಕೇಂದ್ರದ ಬಿ.ಜೆ.ಪಿ ಪಕ್ಷದ ಆಡಳಿತ ಒಪ್ಪಿಕೊಂಡಿದ್ದು, ರಾಜ್ಯದಲ್ಲಿಯೂ ಪಕ್ಷವನ್ನು ಅಧಿಕಾರ ತರಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಜೆಡಿಎಸ್ ಪಕ್ಷದ ವಿ.ಕೆ.ಜಗದೀಶ್‌, ಕಾಂಗ್ರೆಸ್‌ ಪಕ್ಷದ ಯಮದೂರು ಸಿದ್ದರಾಜು ಪಕ್ಷಕ್ಕೆ ಸೇರ್ಪಡೆಗೊಂಡಿರುವುದು ಆನೆ ಬಲ ಬಂದಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು ಕಣಕ್ಕೆ ಇಳಿಸಲಾಗುವುದು ಎಂದರು.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಮಾತನಾಡಿ, ಬಿಜೆಪಿ ಆಡಳಿತದಲ್ಲಿದ್ದಾಗ ಉತ್ತಮ ಆಡಳಿತ ನೀಡಿತ್ತು. ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿತ್ತು. ಪಕ್ಷದಲ್ಲಿರುವ ವ್ಯಕ್ತಿಯ ಯೋಗ್ಯತೆ ಆಧರಿಸಿ ಆದ್ಯತೆ ನೀಡಲಾಗುತ್ತದೆ ಎಂದು ಹೇಳಿದರು.

ಮೈಷುಗರ್‌, ಪಾಂಡವಪುರ ಸಕ್ಕರೆ ಕಾರ್ಖಾನೆಗೆ ಬಿಜೆಪಿ ಸರ್ಕಾರ ಸಾಕಷ್ಟು ಅನುದಾನ ನೀಡುವ ಮೂಲಕ ರೈತರ ಪರ ನಿಲುವು ತೆಗೆದುಕೊಳ್ಳಲಾಗಿತ್ತು. ಬಿಜೆಪಿ ಪಕ್ಷದ ಜನಪ್ರತಿನಿಧಿಯನ್ನು ಜಿಲ್ಲೆಯಲ್ಲಿ ಆಯ್ಕೆ ಮಾಡುವ ನಿಟ್ಟಿನಲ್ಲಿ ಕಾರ್ಯಕರ್ತರು ಕೆಲಸ ಮಾಡಬೇಕು ಎಂದರು.

ವಿಧಾನ ಪರಿಷತ್‌ ಸದಸ್ಯ ಗೋ ಮಧುಸೂದನ್‌ ಮಾತನಾಡಿ, ಯಡಿಯೂರಪ್ಪ ಅವರು ಗುಡುಗಿದರೆ ಜೆಡಿಎಸ್‌ ಹಾಗೂ ಕಾಂಗ್ರೆಸ್‌್ ಪಕ್ಷಗಳು ನಡುಗುತ್ತವೆ ಎಂದು ಹೇಳಿದರು.

ಅಭ್ಯರ್ಥಿ ಮೈ.ವಿ. ರವಿಶಂಕರ ಮಾತನಾಡಿ, ಜನಪರವಾಗಿ ಕೆಲಸ ಮಾಡುತ್ತೇನೆ. ಕೆಟ್ಟ ಹೆಸರು ತರುವಂತಹ ಕೆಲಸ ಮಾಡುವುದಿಲ್ಲ ಎಂದು ಭರವಸೆ ನೀಡಿದರು.
ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ. ಸೋಮಶೇಖರ್‌ ಮಾತನಾಡಿ, ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಪಕ್ಷಗಳು ಜನರಿಗೆ ಮೋಸ ಮಾಡುತ್ತಿವೆ. ಮುಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಆಗುತ್ತಾರೆ ಎಂದು ಕಾಂಗ್ರೆಸ್‌ ಪಕ್ಷಕ್ಕೆ ನಡುಕ ಉಂಟಾಗಿದೆ ಎಂದು ಟೀಕಿಸಿದರು.

ಮುಖಂಡರಾದ ರಾಮಲಿಂಗಯ್ಯ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವರಾದ ಎ.ರಾಮದಾಸ, ವಿ.ಜಯಶಂಕರ, ಬಿ.ಜೆ.ಪುಟ್ಟಸ್ವಾಮಿ, ಶಾಸಕ ಡಿ.ಎಸ್‌.ವೀರಯ್ಯ, ವಿ.ಅಶ್ವಥ್‌ ನಾರಾಯಣ, ಅಬ್ದುಲ್‌ ಅಜೀಂ, ಬಿ.ಶಿವಲಿಂಗಯ್ಯ, ರವೀಂದ್ರ, ಕಾಡೇನಹಳ್ಳಿ ನಾಗನಗೌಡ, ಮಲ್ಲಿಕಾರ್ಜುನ ಮತ್ತಿತರರು ಉಪಸ್ಥಿತರಿದ್ದರು.

ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಟಿಕೆಟ್‌ ನೀಡುವಲ್ಲಿ ಕಾಂಗ್ರೆಸ್‌ ಸಂಪೂರ್ಣ ವಿಫಲವಾಗಿದೆ.  ಜೆಡಿಎಸ್‌ ಪಕ್ಷ ಕೂಡ ಅದೇ ದಾರಿಯಲ್ಲಿ ಸಾಗಿದ್ದು, ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಅಲ್ಲಿ ಅವಮಾನ ಮಾಡಲಾಗುತ್ತಿದೆ
-ಬಿ.ಎಸ್‌. ಯಡಿಯೂರಪ್ಪ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT