ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನ ಗಲಭೆ ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ

Last Updated 14 ಆಗಸ್ಟ್ 2020, 9:16 IST
ಅಕ್ಷರ ಗಾತ್ರ

ಮೈಸೂರು: ಬೆಂಗಳೂರಿನಲ್ಲಿ ಈಚೆಗೆ ನಡೆದ ಗಲಭೆ ಖಂಡಿಸಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಹಾಗೂ ಕನ್ನಡ ಸಾಹಿತ್ಯ ಕಲಾಕೂಟದ ಕಾರ್ಯಕರ್ತರು ಇಲ್ಲಿನ ಜಿಲ್ಲಾ ನ್ಯಾಯಾಲಯದ ಮುಂಭಾಗ ಶುಕ್ರವಾರ ಪ್ರತಿಭಟನೆ ನಡೆಸಿದರು.

ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ನಿವಾಸದ ಮೇಲೆ ದಾಳಿ ನಡೆಸಿ, ಸಂಪೂರ್ಣವಾಗಿ ಧ್ವಂಸಗೊಳಿಸಿದ್ದು ನಿಜಕ್ಕೂ ಆತಂಕಕಾರಿ. ಕೂಡಲೇ ಆರೋಪಿಗಳನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.‌

ಮುಖ್ಯವಾಗಿ ಸರ್ಕಾರ ಘಟನೆಯನ್ನು ರಾಜಕಾರಣಗೊಳಿಸಬಾರದು. ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು. ಮತ್ತೆ ಇಂತಹ ಘಟನೆ ನಡೆಯದಂತೆ ಎಚ್ಚರ ವಹಿಸಬೇಕು ಎಂದು ಅವರು ಒತ್ತಾಯಿಸಿದರು.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್.ಶಿವರಾಮು, ಕನ್ನಡ ಸಾಹಿತ್ಯ ಕಲಾಕೂಟದ ಅಧ್ಯಕ್ಷ ಎಂ.ಚಂದ್ರಶೇಖರ್, ದಲಿತ ಸಂಘಟನೆಗಳ ಒಕ್ಕೂಟದ ಸಂಚಾಲಕ ಪಿ.ರಾಜು, ಹೋರಾಟಗಾರ ಮೂಗೂರು ನಂಜುಂಡಸ್ವಾಮಿ ಇದ್ದರು.

ವಿವಿಧ ಬೇಡಿಕೆಗಳ ಈಡೇರಿಕಗೆ ಆರ್‌ಪಿಐ ಆಗ್ರಹ‌

ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾಗೂ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿದರು.

ಭೂ ಸುಧಾರಣ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆಗೆ ತಂದಿರುವ ತಿದ್ದುಪಡಿಗಳನ್ನು ಕೂಡಲೇ ವಾಪಸ್ ಪಡೆಯಬೇಕು, ಖಾಸಗೀಕರಣ ನೀತಿಯನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.

ಸುಳ್ಳು ಜಾತಿ ಪ್ರಮಾಣ ನೀಡಿ ಸರ್ಕಾರಿ ಸೌಲಭ್ಯ ಪಡೆದಿರುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು, ದಲಿತರ ಮೇಲೆ ದೌರ್ಜನ್ಯ ಎಸಗುವವರನ್ನು ಬಂಧಿಸಿ, ರಾಜ್ಯದಿಂದಲೇ ಗಡೀಪಾರು ಮಾಡಬೇಕು ಎಂದು ಒತ್ತಾಯಿಸಿದರು.

ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾ ಘಟಕದ ಅಧ್ಯಕ್ಷ ಎನ್.ವೀರಭದ್ರಸ್ವಾಮಿ, ಡಿಎಸ್ಎಸ್‌ನ ಜಿಲ್ಲಾ ಸಂಚಾಲಕ ಪಿ.ನಿಂಗರಾಜು ಇದ್ದರು.

ಕಾರ್ಮಿಕರನ್ನು ಮತ್ತೆ ಕೆಲಸಕ್ಕೆ ತೆಗೆದುಕೊಳ್ಳಲು ಒತ್ತಾಯ‌

ತಿ.ನರಸೀಪುರ ತಾಲ್ಲೂಕು ಜೋಡಿತುಂಬಲ ಗ್ರಾಮದಲ್ಲಿರುವ ಎನ್‌ಇಎಸ್‌ಎಸ್‌ಒ ಕಾರ್ಖಾನೆಯು ಕೈಬಿಟ್ಟಿರುವ ಕಾರ್ಮಿಕರನ್ನು ಮತ್ತೆ ಕೆಲಸಕ್ಕೆ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಕಾರ್ಖಾನೆಯಲ್ಲಿ 10 ಮಂದಿ ಕಾರ್ಮಿಕರು ಕಳೆದ 10 ವರ್ಷಗಳಿಂದಲೂ ಕಾರ್ಯನಿರ್ವಹಿಸುತ್ತಿದ್ದರು. ಈಗ ಹೊರಗುತ್ತಿಗೆ ಎಂದು ಹೇಳಿ ಏಕಾಏಕಿ ಕೆಲಸದಿಂದ ತೆಗೆದು ಹಾಕಿರುವುದು ಸರಿಯಲ್ಲ. ಕೂಡಲೇ ಜಿಲ್ಲಾಧಿಕಾರಿ ಈ ಪ್ರಕರಣದಲ್ಲಿ ಮಧ್ಯ ಪ್ರವೇಶ ಮಾಡಿ ಇವರನ್ನು ಕೆಲಸಕ್ಕೆ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಮುಖಂಡರಾದ ವಸಂತ ಹೊನ್ನೇನಹಳ್ಳಿ, ಸೋಮಣ್ಣ ಬನ್ನಹಳ್ಳೀ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT