ಸೋಮವಾರ, ಅಕ್ಟೋಬರ್ 18, 2021
22 °C
ಮಕ್ಕಳ ಆರೋಗ್ಯ ವೃದ್ಧಿಗೆ ಕ್ರಮ

ಅಪೌಷ್ಟಿಕತೆಯಿಂದ ಬಳಲುತ್ತಿರುವ 156 ಮಕ್ಕಳ ದತ್ತು ಸ್ವೀಕಾರ: ಎಸ್‌.ಎ.ರಾಮದಾಸ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ‘ಕೆ.ಆರ್‌.ಕ್ಷೇತ್ರದಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ 156 ಮಕ್ಕಳ ಆರೋಗ್ಯ ವೃದ್ಧಿಸುವ ಉದ್ದೇಶದಿಂದ ಒಂದು ವರ್ಷ ದತ್ತು ಪಡೆಯುವ ಕಾರ್ಯಕ್ರಮಕ್ಕೆ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಶನಿವಾರ ಚಾಲನೆ ನೀಡಿದ್ದಾರೆ’ ಎಂದು ಶಾಸಕ ಎಸ್‌.ಎ.ರಾಮದಾಸ್‌ ತಿಳಿಸಿದರು.

‘ಜಿಲ್ಲೆಯಲ್ಲಿ 3,100 ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಕೆ.ಆರ್‌.ಕ್ಷೇತ್ರದಲ್ಲಿ ಗುರುತಿಸಿರುವ ಮಕ್ಕಳ ಆರೋಗ್ಯ ತಪಾಸಣಾ ಕಾರ್ಯ ಸಿದ್ಧಾರ್ಥನಗರದ ಜೆಎಸ್‌ಎಸ್‌ ಪಬ್ಲಿಕ್‌ ಶಾಲೆಯಲ್ಲಿ ನಡೆದಿದೆ. ಆ ಮಕ್ಕಳನ್ನು ಅಪೌಷ್ಟಿಕತೆಯಿಂದ ಹಾಗೂ ರೋಗಮುಕ್ತರನ್ನಾಗಿ ಮಾಡಲು ದತ್ತು ಸ್ವೀಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಕ್ಕಳಿಗೆ ಆರೋಗ್ಯ ಕಾರ್ಡ್‌ ನೀಡುತ್ತಿದ್ದೇವೆ. ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೇಂದ್ರ ಸರ್ಕಾರದ ಪೋಷಣ ಅಭಿಯಾನ ಯೋಜನೆಗಳಡಿ ಮಕ್ಕಳ ಮಾನಸಿಕ, ದೈಹಿಕ ಬೆಳವಣಿಗೆಗೆ ಕ್ರಮ ಕೈಗೊಳ್ಳಲಾಗುತ್ತದೆ. 2022ರ ಸೆ.17ರಂದು ಮೋದಿ ಅವರ ಜನ್ಮದಿನದಂದು 156 ಮಕ್ಕಳನ್ನು ಮುಖ್ಯವಾಹಿನಿಗೆ ತಂದು, ಅವರ ಆರೋಗ್ಯ ಕಾರ್ಡ್‌ಗಳನ್ನು ಬಿಡುಗಡೆ ಮಾಡಲಾಗುವುದು’ ಎಂದು ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಸರ್ಕಾರದ ವಿವಿಧ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಉದ್ದೇಶದಿಂದ ಸೆ.19ರಿಂದ 24ರವರೆಗೆ ಬೆಳಿಗ್ಗೆ 9.30ರಿಂದ ಎಲ್ಲ ಇಲಾಖೆಯ ಅಧಿಕಾರಿಗಳು, ಸ್ವಯಂ ಸೇವಕರು 81 ಸಾವಿರ ಮನೆಗಳಿಗೆ ಭೇಟಿ ನೀಡಲಿದ್ದಾರೆ. ಇದಕ್ಕಾಗಿ 19 ತಂಡಗಳನ್ನು ರಚಿಸಲಾಗಿದೆ. ಅರ್ಹರಿಂದ ಅರ್ಜಿ ಪಡೆದು 20 ದಿನಗಳೊಳಗೆ ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ’ ಎಂದು ವಿವರಿಸಿದರು.

‘ಮೋದಿ ಯುಗ ಉತ್ಸವದ ಅಂಗವಾಗಿ ವಿದ್ಯಾರಣ್ಯಪುರಂನ ಶಾಸಕರ ಗೃಹ ಕಚೇರಿ ಎದುರಿನ ಉದ್ಯಾನದಲ್ಲಿ ಅ.6ರವರೆಗೆ ಪ್ರತಿದಿನ ಸಂಜೆ ಕಲಾ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಕೊನೆಯ 5 ದಿನ ಗುಜರಾತ್‌, ರಾಜಸ್ಥಾನ, ಒಡಿಶಾ, ತಮಿಳುನಾಡು, ಆಂಧ್ರಪ್ರದೇಶ, ಕೇರಳದ ಕಲಾ ತಂಡಗಳು ತಮ್ಮ ಕಲೆಗಳನ್ನು ಪ್ರದರ್ಶಿಸಲಿವೆ. ಅಲ್ಲಿನ ತಿಂಡಿ ತಿನಿಸುಗಳ ಮಾರಾಟವೂ ಇರುತ್ತದೆ’ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಮುಡಾ ಅಧ್ಯಕ್ಷ ಎಚ್‌.ವಿ.ರಾಜೀವ್‌, ಬಿಜೆಪಿ ಕೆ.ಆರ್‌.ಕ್ಷೇತ್ರದ ಅಧ್ಯಕ್ಷ ವಡಿವೇಲು, ಬಿಜೆಪಿ ನಗರ ಘಟಕದ ಪ್ರಧಾನ ಕಾರ್ಯದರ್ಶಿ ಮನೀಶ್‌, ಸಂಸ್ಕಾರ ಭಾರತಿಯ ಯಶಸ್‌ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು