ಶನಿವಾರ, ಸೆಪ್ಟೆಂಬರ್ 18, 2021
21 °C
ವಿನೂತನ ಮಾರ್ಗದಲ್ಲಿ ವಿರೋಧ ವ್ಯಕ್ತಪಡಿಸಿದ ಆಶಾ ಕಾರ್ಯಕರ್ತೆಯರು

ಪಾಸ್‌ಬುಕ್‌ ತೋರಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ಆಶಾ ಕಾರ್ಯಕರ್ತೆಯರ ಮುಷ್ಕರ ಸೋಮವಾರ ಇನ್ನಷ್ಟು ತೀವ್ರಗೊಂಡಿದೆ. ಪಾಸ್‌ಬುಕ್‌ನ್ನು ತೋರಿಸುವ ಮೂಲಕ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎದುರು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರೆ, ವಿವಿಧ ಸಂಘಟನೆಗಳ ಪ್ರತಿನಿಧಿಗಳು ಇವರಿಗೆ ಬೆಂಬಲ ವ್ಯಕ್ತಪಡಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ನೂರಾರು ಸಂಖ್ಯೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎದುರು ಸೇರಿದ ಆಶಾ ಕಾರ್ಯಕರ್ತೆಯರು ತಮ್ಮತಮ್ಮ ಪಾಸ್‌ ಬುಕ್‌ಗಳನ್ನು ಕೈಯಲ್ಲಿಡಿದು ಘೋಷಣೆಗಳನ್ನು ಕೂಗಿದರು. ಕೂಡಲೇ ಗೌರವಧನ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಜೇಷನ್ (ಎಐಡಿಎಸ್‌ಓ), ಆಲ್ ಇಂಡಿಯಾ ಡೆಮಾಕ್ರಟಿಕ್ ಯೂತ್ ಆರ್ಗನೈಜೇಷನ್ (ಎಐಡಿವೈಒ), ಆಲ್ ಇಂಡಿಯಾ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್‌ಎಸ್‌) ನೇತೃತ್ವದಲ್ಲಿ ಸೇರಿದ ಹಲವು ಸಂಘಟನೆಗಳ ಪ್ರತಿನಿಧಿಗಳು ಆಶಾ ಕಾರ್ಯಕರ್ತೆಯರ ಪ್ರತಿಭಟನೆಗೆ ಸರ್ಕಾರ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.

ಇವರಿಗೆ ಸಮತಾ ಅಧ್ಯಯನ ಕೇಂದ್ರ, ಸ್ವರಾಜ್ ಇಂಡಿಯಾ, ರಾಜ್ಯ ರೈತ ಸಂಘ, ದಲಿತ ಸಂಘಟನೆಗಳ ಒಕ್ಕೂಟ, ಎಐಪಿಡಬ್ಲೂಎ ಸಂಘಟನೆಗಳ ಪ್ರತಿನಿಧಿಗಳೂ ಸಾಥ್ ನೀಡಿದರು.

ಆಶಾ ಕಾರ್ಯಕರ್ತೆಯರಿಗೆ ನೀಡಲಾಗುತ್ತಿರುವ ಗೌರವ ಧನವನ್ನು ₹ 12 ಸಾವಿರಕ್ಕೆ ಹೆಚ್ಚಿಸಬೇಕು, ಕೊರೊನಾ ವಿರುದ್ಧ ರಕ್ಷಣೆಗಾಗಿ ಎಲ್ಲರಿಗೂ ಪಿಪಿಇ ಕಿಟ್ ಕೊಡಬೇಕು, ವಿಮಾ ಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿದರು.

ಎಐಡಿಎಸ್‌ಒನ ಚಂದ್ರಕಲಾ, ಎಐಡಿವೈಒನ ಹರೀಶ್, ಎಐಪಿಡಬ್ಲೂಎನ ಡಾ.ರತಿರಾವ್, ಸಮತಾ ಅಧ್ಯಯನ ಕೇಂದ್ರದ ಸುಮನಾ, ಸ್ವರಾಜ್ ಇಂಡಿಯಾದ ಅಭಿರುಚಿ ಗಣೇಶ್, ಉಗ್ರನರಸಿಂಹೇಗೌಡ, ರಾಜ್ಯ ರೈತ ಸಂಘದ ಬಡಗಲಪುರ ನಾಗೇಂದ್ರ ಪ್ರತಿಭಟನೆಯನ್ನು ಬೆಂಬಲಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು