ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂದುವರಿದ ಆಶಾ ಕಾರ್ಯಕರ್ತರ ಮುಷ್ಕರ

ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸರಣಿ ಟ್ವೀಟ್‌ ಮಾಡಿದ ಟ್ರೈನಿ ಸ್ಟಾಫ್ ನರ್ಸ್‌ಗಳು
Last Updated 13 ಜುಲೈ 2020, 9:52 IST
ಅಕ್ಷರ ಗಾತ್ರ

ಮೈಸೂರು: ಜಿಲ್ಲೆಯ ಆಶಾ ಕಾರ್ಯಕರ್ತರು ಹಾಗೂ ಕೆ.ಆರ್.ಆಸ್ಪತ್ರೆಯ ಟ್ರೈನಿ ಸ್ಟಾಫ್ ನರ್ಸ್‌ಗಳು ತಮ್ಮ ಪ್ರತಿಭಟನೆಯನ್ನು ಸೋಮವಾರ ಇನ್ನಷ್ಟು ತೀವ್ರಗೊಳಿಸಿದ್ದಾರೆ. ಇದೀಗ ಅಂಗನವಾಡಿ ಕಾರ್ಯಕರ್ತೆಯರೂ ಪ್ರತಿಭಟನೆಯ ಹಾದಿ ತುಳಿದಿದ್ದಾರೆ.

ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ನೂರಾರು ಮಂದಿ ಆಶಾ ಕಾರ್ಯಕರ್ತೆಯರು ತಮ್ಮ ಸೇವೆಯನ್ನು ಸ್ಥಗಿತಗೊಳಿಸಿ, ಹಲವು ಗ್ರಾಮ ಪಂಚಾಯಿತಿಗಳ ಕಚೇರಿ ಮುಂದೆ ಧರಣಿ ನಡೆಸಿದರು.

ಮಾಸಿಕ ಗೌರವಧನವನ್ನು ₹ 12 ಸಾವಿರಕ್ಕೆ ಹೆಚ್ಚಿಸಬೇಕು, ಕೋವಿಡ್‌ ವಿರುದ್ಧ ಅಗತ್ಯ ಸುರಕ್ಷತಾ ಸಾಮಗ್ರಿಗಳನ್ನು ವಿತರಿಸಬೇಕು, ಕೊರೊನಾ ಸೋಂಕಿಗೆ ಒಳಗಾದ ಕಾರ್ಯಕರ್ತೆಯರಿಗೆ ಉಚಿತ ಚಿಕಿತ್ಸೆ ನೀಡಬೇಕು ಎಂದು ಆಗ್ರಹಿಸಿದರು.

ಟ್ರೈನಿ ಸ್ಟಾಫ್ ನರ್ಸ್‌ಗಳಿಂದ ತೀವ್ರಗೊಂಡ ಪ್ರತಿಭಟನೆ

ಕೆ.ಆರ್.ಆಸ್ಪತ್ರೆಯಲ್ಲಿ ಶಂಕಿತ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡುವ ಟ್ರೈನಿ ಸ್ಟಾಫ್ ನರ್ಸ್‌ಗಳು 5ನೇ ದಿನವಾದ ಸೋಮವಾರ ಎಂದಿನಂತೆ ಆಸ್ಪತ್ರೆಯ ಮುಂಭಾಗ ಪ್ರತಿಭಟನೆ ನಡೆಸಿದರು. ನಂತರ, ಕಪ್ಪುಪಟ್ಟಿ ಧರಿಸಿ ಕರ್ತವ್ಯಕ್ಕೆ ತೆರಳಿದರು. ಈ ವೇಳೆ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬೇಡಿಕೆಗಳುಳ್ಳ ಮನವಿಪತ್ರವನ್ನು ಸರಣಿ ಟ್ವೀಟ್ ಮಾಡುವ ಮೂಲಕ ಸರ್ಕಾರದ ಗಮನ ಸೆಳೆಯುವ ಯತ್ನ ನಡೆಸಿದರು.

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ನೇತೃತ್ವದಲ್ಲಿ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.

ನಿವೃತ್ತಿ ಹೊಂದಿದ ಕಾರ್ಯಕರ್ತೆಯರಿಗೆ ನಿವೃತ್ತಿ ಹಣ ಬಿಡುಗಡೆ ಮಾಡಬೇಕು, ಕೊರೊನಾ ಸಮಯದಲ್ಲಿ ಮೃತಪಟ್ಟ ಕಾರ್ಯಕರ್ತೆಯರಿಗೆ ಹೆಚ್ಚಿನ ಪರಿಹಾರದ ಹಣ ನೀಡಬೇಕು, ತಿಂಗಳಿಗೆ ಸರಿಯಾಗಿ ಗೌರವ ಧನ ಬಿಡುಗಡೆ ಮಾಡಬೇಕು, ಹಲ್ಲೆ ನಡೆಸಿದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎನ್ನುವುದು ಸೇರಿದಂತೆ ಹಲವು ಬೇಡಿಕೆಗಳುಳ್ಳ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿಗೆ ನೀಡಿದರು.

ಸಂಘನೆಯ ಅಧ್ಯಕ್ಷರಾದ ಎಚ್.ಎಸ್.ಸುನಂದಾ, ಪ್ರಧಾನ ಕಾರ್ಯದರ್ಶಿ ಕಾವೇರಮ್ಮ, ಖಜಾಂಚಿ ಧರ್ಮಾಪತಿ ಹಾಗೂ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT