ಶನಿವಾರ, ಸೆಪ್ಟೆಂಬರ್ 25, 2021
24 °C
Inefficient Chief Minister HA Venkatesh

'ತನಗೆ ಬೇಕಾದ ಸಚಿವ ಸಂಪುಟ ರಚಿಸಿಕೊಳ್ಳಲಾಗದ ಅಸಮರ್ಥ ಮುಖ್ಯಮಂತ್ರಿ': ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ‘ರಾಜ್ಯದ ಮುಖ್ಯಮಂತ್ರಿಯಾಗಿ ತಮಗೆ ಬೇಕಾದಂತೆ ಸಚಿವ ಸಂಪುಟವನ್ನು ರಚಿಸಿಕೊಳ್ಳಲು ಸಾಧ್ಯವಾಗದ ಅಸಮರ್ಥ ವ್ಯಕ್ತಿ ಬಸವರಾಜ ಬೊಮ್ಮಾಯಿ’ ಎಂದು ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್ ಟೀಕಿಸಿದರು.

‘ಸಚಿವ ಸಂಪುಟ ರಚನೆ ವೇಳೆ ಬಸವರಾಜ ಬೊಮ್ಮಾಯಿ ಅವರು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ಸಂಪುಟಕ್ಕೆ ಸೇರ್ಪಡೆಗೊಳ್ಳುವ ಹಾಗೂ ಉಪಮುಖ್ಯಮಂತ್ರಿ ಅಭ್ಯರ್ಥಿಗಳ ಮೂರು ಪಟ್ಟಿಗಳನ್ನು ಹೈಕಮಾಂಡ್‌ಗೆ ನೀಡಿದ್ದೇನೆ. ಯಾರು ಸಚಿವರು, ಉಪಮುಖ್ಯಮಂತ್ರಿ ಆಗುತ್ತಾರೆ ಎಂಬುದು ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಅವರು ತನ್ನ ಮೊದಲನೇ ಕರ್ತವ್ಯದಲ್ಲೇ ವಿಫಲರಾಗಿದ್ದಾರೆ’ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಗುರುವಾರ ದೂರಿದರು.

‘ಸಚಿವ ಸಂಪುಟದಲ್ಲಿ ಪ್ರಾದೇಶಿಕ, ಸಾಮಾಜಿಕ ನ್ಯಾಯ ಮಾಯವಾಗಿದೆ. ದಲಿತರಿಗೆ, ಹಿಂದುಳಿದವರಿಗೆ, ಅಲ್ಪಸಂಖ್ಯಾತ ಸಮುದಾಯದ ಶಾಸಕರಿಗೆ ಅವಕಾಶ ಸಿಕ್ಕಿಲ್ಲ. ಸಮುದಾಯಗಳ ಜನಸಂಖ್ಯೆಗೆ ಅನುಗುಣವಾಗಿ ಪ್ರಾಧಾನ್ಯತೆ ನೀಡಿಲ್ಲ’ ಎಂದರು.

‘ಈ ಹಿಂದೆ ಭ್ರಷ್ಟಾಚಾರದ ಹಣ ಬಿ.ಎಸ್‌.ಯಡಿಯೂರಪ್ಪ ಅವರ ಮನೆಗೆ ಮಾತ್ರ ಸೇರುತ್ತಿತ್ತು. ಇದೇ ಕಾರಣಕ್ಕೆ ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗಿಳಿಸಲಾಯಿತು. ಇಡೀ ಸಂಪುಟವನ್ನು ತನ್ನ ಹಿಡಿತದಲ್ಲಿ ಇಟ್ಟುಕೊಂಡಿರುವ ಬಿಜೆಪಿ ನಾಯಕರು, ಭ್ರಷ್ಟಾಚಾರದ ಹಣದಲ್ಲಿ ಪಾಲುದಾರಿಕೆಗೆ ಮುಂದಾಗಿದ್ದಾರೆ’ ಎಂದು ಆರೋಪಿಸಿದರು.

‘ವಿಧವಾ ವೇತನ, ಅಂಗವಿಕಲರ ವೇತನವನ್ನು ಹೆಚ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಘೋಷಿಸಿದ್ದಾರೆ. ಆದರೆ, ಸಾಮಾಜಿಕ ಭದ್ರತಾ ಯೋಜನೆಗಳ ಮಾಸಾಶನವನ್ನು ಆರು ತಿಂಗಳಿಂದ ಫಲಾನುಭವಿಗಳಿಗೆ ನೀಡಿಲ್ಲ’ ಎಂದು ದೂರಿದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್‌ ನಗರ ಘಟಕದ ಅಧ್ಯಕ್ಷ ಆರ್‌.ಮೂರ್ತಿ, ಪ್ರಧಾನ ಕಾರ್ಯದರ್ಶಿ ಶಿವಣ್ಣ, ಮಾಧ್ಯಮ ವಿಭಾಗದ ಮಹೇಶ್‌, ಗಿರೀಶ್‌ ಇದ್ದರು.

‘ಭ್ರಷ್ಟಾಚಾರಿಗೆ ಮಣೆ ಹಾಕಿದ್ದು ಎಷ್ಟು ಸರಿ?’

‘ಮೊಟ್ಟೆ ಹಗರಣದಲ್ಲಿ ಕೋಟ್ಯಂತರ ರೂಪಾಯಿ ಕಮಿಷನ್‌ ಪಡೆದ ಆರೋಪ ಎದುರಿಸುತ್ತಿರುವ ಶಶಿಕಲಾ ಜೊಲ್ಲೆ ಅವರಿಗೆ ದೆಹಲಿಯಿಂದ ಬೆಂಗಳೂರಿಗೆ ಬರಲು ವಿಶೇಷ ವಿಮಾನದ ವ್ಯವಸ್ಥೆ ಮಾಡಲಾಗಿತ್ತು. ವಿಮಾನ ನಿಲ್ದಾಣದಿಂದ ರಾಜಭವನಕ್ಕೆ ಬರಲು ಜೀರೋ ಟ್ರಾಫಿಕ್‌ ವ್ಯವಸ್ಥೆ ಕಲ್ಪಿಸಲಾಗಿತ್ತು. ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಮಹಿಳೆಗೆ ಈ ಸೌಲಭ್ಯ ಕಲ್ಪಿಸಿದ್ದು ಎಷ್ಟು ಸರಿ’ ಎಂದು ಎಚ್‌.ಎ.ವೆಂಕಟೇಶ್‌ ಪ್ರಶ್ನಿಸಿದರು.

ಮುರುಗೇಶ ನಿರಾಣಿ ಅವರು ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿ, ರೈತರ ರಕ್ತವನ್ನು ಹೀರುತ್ತಿದ್ದಾರೆ.
–ಎಚ್‌.ಎ.ವೆಂಕಟೇಶ್‌, ಕೆಪಿಸಿಸಿ ವಕ್ತಾರ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು