ನಂಜನಗೂಡು: ತಾಲ್ಲೂಕಿನ ಹುರಾ ಭಾಗದ 26 ಕೆರೆಗಳಿಗೆ ಏತ ನೀರಾವರಿ ಮೂಲಕ ನೀರು ತುಂಬಿಸುವ ಕಾಮಗಾರಿಯನ್ನು ಪೂರ್ಣಗೊಳಿಸು ವಂತೆ ಒತ್ತಾಯಿಸಿ ಭಾರತೀಯ ಕಿಸಾನ್ ಸಂಘಟನೆ ಕಾರ್ಯಕರ್ತರು ನೀರಾವರಿ ಇಲಾಖೆ ಕಚೇರಿ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಿದರು.
ನಗರದ ಚಿಂತಾಮಣಿ ಗಣಪತಿ ದೇವಾಲಯ ಮುಂಭಾಗದಿಂದ ನೀರಾವರಿ ಇಲಾಖೆ ಕಚೇರಿಯವರೆಗೆ ಪಾದಯಾತ್ರೆ ನಡೆಸಿದ ಕಾರ್ಯಕರ್ತರು, ಅಧಿಕಾರಿಗಳವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ರೈತ ಸಂಘಟನೆಯ ಚೆನ್ನಪ್ಪ ಮಾತನಾಡಿ, ‘ಹುರಾ ಭಾಗದ 26 ಕೆರೆಗಳಿಗೆ ಏತನೀರಾವರಿ ಮೂಲಕ ನೀರು ತುಂಬಿಸುವ ಕಾಮಗಾರಿಗೆ 2017ರಲ್ಲಿ ಕೋಟ್ಯಂತರ ರೂಪಾಯಿ ಬಿಡುಗಡೆಗೊಂಡಿದೆ. ಅಧಿಕಾರಿಗಳು ಗುತ್ತಿಗೆದಾರ
ರೊಂದಿಗೆ ಒಳ ಒಪ್ಪಂದ ಮಾಡಿ ಕೊಂಡು ಕಾಮಗಾರಿ ಪೂರ್ಣ ಗೊಳಿಸಿಲ್ಲ. ಕಾಮಗಾರಿ ಪೂರ್ಣಗೊಳ್ಳ ದಿರುವುದರಿಂದ ಈ ಭಾಗದಲ್ಲಿ ಅಂತರ್ಜಲ ಮಟ್ಟ ಕಡಿಮೆಯಾಗಿದೆ. ಜನ ಜಾನುವಾರುಗಳಿಗೆ ಕುಡಿಯುವ ನೀರಿಲ್ಲದೆ ಪರಿತಪಿಸುವಂತಾಗಿದೆ. ನೀರಾವರಿ ಇಲಾಖೆ ಅಧಿಕಾರಿಗಳನ್ನು ಪ್ರಶ್ನಿಸಿದರೆ ಶೇ 90ರಷ್ಟು ಕಾಮಗಾರಿ ಪೂರ್ಣಗೊಳಿಸಿರುವುದಾಗಿ ಸುಳ್ಳು ಹೇಳುತ್ತಾರೆ. ಕಣೇನೂರು ಗ್ರಾಮದ ಏತ ನೀರಾವರಿ ಯೋಜನೆಯ ಕಾಮಗಾರಿ ಇನ್ನೂ ಪಿಲ್ಲರ್ ಹಂತದಲ್ಲೇ ಇದೆ. ಚಾವಣಿಯನ್ನೂ ಹಾಕಿಸದೆ ಗುತ್ತಿಗೆದಾರರಿಗೆ ಅಧಿಕಾರಿಗಳು ಬಿಲ್ ಮಾಡಿಕೊಟ್ಟಿದ್ದಾರೆ’ ಎಂದು ಆರೋಪಿಸಿದರು.
‘ಈ ಕೂಡಲೇ ನೀರಾವರಿ ಇಲಾಖೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರನ್ನು ಕರೆಸಿ ಕಾಮಗಾರಿ ಪೂರ್ಣಗೊಳಿಸಲು ಕ್ರಮವಹಿಸಬೇಕು. ಕಾಮಗಾರಿ ನಡೆಸದ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಿ, ನೀಡಲಾಗಿರುವ ಬಿಲ್‍ನ ಮೊತ್ತವನ್ನು ವಸೂಲಿ ಮಾಡಬೇಕು. ಕ್ರಮವಹಿಸದಿದ್ದರೆ ಮುಂದಿನ ದಿನಗಳಲ್ಲಿ ಸಂಘಟನೆಯ ವತಿಯಿಂದ ಉಗ್ರ ಪ್ರತಿಭಟನೆ ಹಮ್ಮಿ ಕೊಳ್ಳುತ್ತೇವೆ’ ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಭಾರತೀಯ ಕಿಸಾನ್ ಸಂಘಟನೆಯ ಮುಖಂಡರಾದ ನಾರಾಯಣಸ್ವಾಮಿ, ಗುರುಪ್ರಸಾದ್, ರವಿ, ಗಿರೀಶ್, ಪ್ರಭು, ಬಸವರಾಜಪ್ಪ ಉಪಸ್ಥಿತರಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.