ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಾಯತ್ತತೆಗಾಗಿ ಒಂದುಗೂಡಲು ಕನ್ನಡ ಕ್ರಿಯಾ ಸಮಿತಿ ಆಗ್ರಹ

ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರ
Last Updated 13 ಏಪ್ರಿಲ್ 2021, 5:54 IST
ಅಕ್ಷರ ಗಾತ್ರ

ಮೈಸೂರು: ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರದ ಸ್ವಾಯತ್ತತೆಯ ಹೋರಾಟಕ್ಕೆ ಸಾಹಿತಿಗಳು, ಸಿನಿಮಾ ಕಲಾವಿದರು ಸೇರಿದಂತೆ ಸಾರ್ವಜನಿಕರೆಲ್ಲರೂ ಬೆಂಬಲ ನೀಡಬೇಕು ಎಂದು ಕನ್ನಡ ಕ್ರಿಯಾ ಸಮಿತಿ ಒತ್ತಾಯಿಸಿದೆ.

‘ಕನ್ನಡಕ್ಕೆ ಕುತ್ತು ಬಂದಾಗಲೆಲ್ಲ ಸಾಹಿತಿಗಳು ಹಾಗೂ ಸಿನಿಮಾ ಕಲಾವಿದರು ದನಿ ಎತ್ತುತ್ತಿದ್ದರು. ಆದರೆ, ಈಗ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರಕ್ಕೆ ಕುತ್ತು ಉಂಟಾಗಿದ್ದು, ಯಾರೂ ದನಿ ಎತ್ತುತ್ತಿಲ್ಲ’ ಎಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ಸ.ರ.ಸುದರ್ಶನ ಸೋಮವಾರ ಸುದ್ದಿಗೋಷ್ಠಿಯಲ್ಲಿ ಬೇಸರ ವ್ಯಕ್ತಪಡಿಸಿದರು.

ಭಾರತೀಯ ಭಾಷಾ ವಿಶ್ವವಿದ್ಯಾಲಯವು ಏಪ್ರಿಲ್‌ 1ರಿಂದ ತಾತ್ವಿಕವಾಗಿ ಆರಂಭವಾಗಲಿದೆ ಎಂದು ಹೇಳಲಾಗಿತ್ತು. ಇದರೊಂದಿಗೆ ಕನ್ನಡ ಶಾಸ್ತ್ರೀಯ ಅತ್ಯುನ್ನತ ಅಧ್ಯಯನ ಕೇಂದ್ರವನ್ನು ವಿಲೀನಗೊಳಿಸಲಾಗುತ್ತಿದೆ ಎಂಬ ಮಾಹಿತಿಯೂ ಇದೆ. ಇದಕ್ಕೆ ಪೂರಕವಾಗಿ ಏಪ್ರಿಲ್ 1ರಿಂದ 4 ದಿನಗಳ ಕಾಲ ಕೇಂದ್ರದ ಚಟುವಟಿಕೆಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಿ, ಮತ್ತೆ ಪುನರ್ ಆರಂಭಿಸಲಾಗಿದೆ. ಇದು ಇಲ್ಲಿ ಕೆಲಸ ಮಾಡುತ್ತಿರುವವರನ್ನು ಅನಿಶ್ಚಿತತೆಗೆ ದೂಡಿದೆ ಎಂದರು.

ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರದ ಸ್ವಾಯತ್ತತೆಗಾಗಿನ ಹೋರಾಟ ಸಮಿತಿ ಸಂಚಾಲಕ ನಾ. ದಿವಾಕರ ಮಾತನಾಡಿ, ‘ಈ ಕುರಿತು ಈಗಾಗಲೇ ಎಲ್ಲ ಜನಪ್ರತಿನಿಧಿಗಳಿಗೂ ಲಿಖಿತವಾಗಿ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಭಾರತೀಯ ಭಾಷಾ ವಿಶ್ವವಿದ್ಯಾಲಯವನ್ನು ಶಿವಮೊಗ್ಗದಲ್ಲಿ ಸ್ಥಾಪಿಸುವ ಹುನ್ನಾರವೂ ನಡೆಯುತ್ತಿದೆ. ಇನ್ನಾದರೂ ಎಲ್ಲ ಸಾಹಿತಿಗಳು, ಸಂಘ, ಸಂಸ್ಥೆಗಳು, ಕನ್ನಡ ಸಾಹಿತ್ಯ ಪರಿಷತ್ತು, ರಾಜಕಾರಣಿಗಳು, ಕಲಾವಿದರು ಒಂದಾಗಿ ಮೈಸೂರಿನಲ್ಲೇ ಅಧ್ಯಯನ ಕೇಂದ್ರವನ್ನು ಉಳಿಸಿಕೊಳ್ಳಲು ಹೋರಾಟ ನಡೆಸಬೇಕಿದೆ’ ಎಂದು ಅಭಿಪ್ರಾಯಪಟ್ಟರು.

‘ಕೇಂದ್ರಕ್ಕೆ ಸ್ವಾಯತ್ತತೆ ನೀಡಿ, ಮೈಸೂರಿನಲ್ಲೇ ಉಳಿಸಿಕೊಳ್ಳಬೇಕು’ ಎಂದು ಕನ್ನಡ ಕ್ರಿಯಾ ಸಮಿತಿ ಅಧ್ಯಕ್ಷ ಮ.ಗು.ಸದಾನಂದಯ್ಯ ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT