ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆರೆ ಸಂರಕ್ಷಣೆ: ಜಿಲ್ಲಾಮಟ್ಟದಲ್ಲಿ ಸಮಿತಿ ರಚನೆಗೆ ಕ್ರಮ–ಹಂಚಾಟೆ

Last Updated 31 ಮೇ 2019, 10:15 IST
ಅಕ್ಷರ ಗಾತ್ರ

ಮೈಸೂರು: ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಮಿತಿ ರಚನೆಯಾಗಿದೆಯೇ ಎಂಬುದನ್ನು ಪರಿಶೀಲಿಸಲಾಗುವುದು ಎಂದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ (ಕೆಎಸ್‌ಎಲ್‌ಎಸ್‌ಎ) ಸದಸ್ಯ ಕಾರ್ಯದರ್ಶಿ ಸಂಜೀವ್‌ ಕುಮಾರ್‌ ಹಂಚಾಟೆ ತಿಳಿಸಿದರು.

ಗುರುವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲಾಮಟ್ಟದ ಸಮಿತಿ ರಚನೆಯಾಗದಿದ್ದರೆ, ಅವುಗಳ ರಚನೆಗೆ ಕ್ರಮವಹಿಸಲು ಸರ್ಕಾರಕ್ಕೆ ಸೂಚಿಸುವಂತೆ ಕೋರಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಸಲಾಗುವುದು ಎಂದು ಹೇಳಿದರು.

ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ ಅಧಿನಿಯಮ 2014ರ ಬಗ್ಗೆ ಸಾರ್ವಜನಿಕರು ಮತ್ತು ಅಧಿಕಾರಿಗಳಲ್ಲಿ ಸರಿಯಾದ ಮಾಹಿತಿ ಇಲ್ಲ. ಈ ಕಾಯ್ದೆ ಬಗ್ಗೆ ಅಧಿಕಾರಿ ವರ್ಗದವರಲ್ಲೂ ಜಾಗೃತಿ ಮೂಡಿಸಬೇಕು. ಹಾಗಾದಲ್ಲಿ ಒತ್ತುವರಿ ಮಾಡಿಕೊಂಡವರ ವಿರುದ್ಧ ಕ್ರಮ ಜರುಗಿಸಲು ಆಗುತ್ತದೆ ಎಂದರು.

ಕೆರೆ ಒತ್ತುವರಿ ಮಾಡಿಕೊಂಡಿರುವ ಖಾಸಗಿ ವ್ಯಕ್ತಿ, ಸಂಘ ಸಂಸ್ಥೆಗಳ ವಿರುದ್ಧ ಮಾತ್ರವಲ್ಲ, ಒತ್ತುವರಿ ಮಾಡಿಕೊಂಡವರ ವಿರುದ್ಧ ಕ್ರಮ ಜರುಗಿಸದ ಸರ್ಕಾರಿ ಅಧಿಕಾರಿಗಳ ಮೇಲೂ ಕ್ರಮ ಕೈಗೊಳ್ಳಲಾಗುತ್ತದೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು ಅವರಿಗೆ ಕಾನೂನಿನ ಭಯ ಮೂಡಿಸಿದರೆ ಒತ್ತುವರಿ ಮೇಲೆ ನಿಯಂತ್ರಣ ಹೇರಬಹುದು ಎಂದು ತಿಳಿಸಿದರು.

ಕೆರೆಗೆ ವಿವಿಧ ತೊರೆ, ಕಾಲುವೆಗಳಿಂದ ಮಳೆ ನೀರು ಹರಿದುಬರುತ್ತದೆ. ಆ ಕಾಲುವೆಗಳು ಕೂಡ ಕೆರೆಯ ವ್ಯಾಪ್ತಿಯಲ್ಲಿ ಬರುತ್ತದೆ. ಆದ್ದರಿಂದ ಕಾಲುವೆಗಳನ್ನು ಒತ್ತುವರಿ ಮಾಡಿದವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲು ಕಾಯ್ದೆಯಲ್ಲಿ ಅವಕಾಶವಿದೆ ಎಂದು ತಿಳಿಸಿದರು.

ರಕ್ಷಣೆ ಒದಗಿಸಲು ಕ್ರಮ: ಕೆರೆ ಒತ್ತುವರಿ ಕುರಿತು ದೂರು ನೀಡುವವರಿಗೆ ಕೆಲವರು ಜೀವ ಬೆದರಿಕೆ ಒಡ್ಡುವರು. ಇದರಿಂದ ಎಷ್ಟೋ ಮಂದಿ ದೂರು ನೀಡಲು ಹಿಂಜರಿಯುವರು. ದೂರು ನೀಡುವವರಿಗೆ ರಕ್ಷಣೆ ಒದಗಿಸಲು ಪ್ರಾಧಿಕಾರವು ಸೂಕ್ತ ಕ್ರಮ ತೆಗೆದುಕೊಳ್ಳಲಿದೆ ಎಂದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಪಿ.ದೇವಮಾನೆ ಮಾತನಾಡಿ, ಕೆರೆ ಒತ್ತುವರಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳಿಗೆ ದೂರು ನೀಡಬೇಕು. ಆದರೆ ಆ ದೂರುಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT