ಬುಧವಾರ, ಆಗಸ್ಟ್ 10, 2022
24 °C

ದ್ರೌಪದಿ ಆಯ್ಕೆ: ಬಿಜೆಪಿಯಿಂದ ಪ.ಪಂಗಡಕ್ಕೆ ದೊಡ್ಡ ಉಡುಗೊರೆ: ಶಿವಕುಮಾರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ‘ರಾಷ್ಟ್ರಪತಿ ಅಭ್ಯರ್ಥಿಯಾಗಿ ಬುಡಕಟ್ಟು ಸಮುದಾಯದ ನಾಯಕಿ ದ್ರೌಪದಿ ಮುರ್ಮು ಅವರನ್ನು ಆಯ್ಕೆ ಮಾಡುವ ಮೂಲಕ ಬಿಜೆಪಿಯು ಪರಿಶಿಷ್ಟ ಪಂಗಡಕ್ಕೆ ದೊಡ್ಡ ಉಡುಗೊರೆ ಕೊಟ್ಟಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಎಸ್‌ಟಿ ಮೋರ್ಚಾ ಕೋಶಾಧ್ಯಕ್ಷ,  ಮಹಾನಗರಪಾಲಿಕೆ ಆಡಳಿತ ಪಕ್ಷದ ನಾಯಕ ಶಿವಕುಮಾರ್ ಹೇಳಿದರು.

ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಭಾನುವಾರ ಮಾತನಾಡಿದ ಅವರು, ‘ಮುರ್ಮು ಅವರ ಆಯ್ಕೆ ಬಹುತೇಕ ಖಚಿತವಾಗಿದೆ. ವರಿಷ್ಠರ ಈ ನಡೆಯನ್ನು ಮೋರ್ಚಾ ಸ್ವಾಗತಿಸುತ್ತದೆ’ ಎಂದರು.

‘ಅಟಲ್ ಬಿಹಾರಿ ವಾಜಪೇಯಿ ಪ್ರಧಾನಿಯಾಗಿದ್ದಾಗ ಅಲ್ಪಸಂಖ್ಯಾತ ಸಮುದಾಯದ ಡಾ.ಎ.ಪಿ.ಜೆ ಅಬ್ದುಲ್ ಕಲಾಂ, ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಶೋಷಿತ ಸಮಾಜದ ರಾಮನಾಥ್ ಕೋವಿಂದ್ ಅವರನ್ನು ರಾಷ್ಟ್ರಪತಿ ಮಾಡಲಾಯಿತು. ಈಗ ಬುಡಕಟ್ಟು ಸಮುದಾಯಕ್ಕೆ ಸೇರಿದ ಮಹಿಳೆಗೆ ಅವಕಾಶ ಕೊಡಲಾಗಿದೆ. ಇದರೊಂದಿಗೆ ಪಕ್ಷವು ನಾಯಕ‌ ಸಮಾಜಕ್ಕೆ ದೊಡ್ಡ ಮನ್ನಣೆ ನೀಡಿದೆ. ಇದೊಂದು ಐತಿಹಾಸಿಕ ತೀರ್ಮಾನವಾಗಿದೆ’ ಎಂದು ಹೇಳಿದರು.

‘ಬಿಜೆಪಿಯು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಪರವಾಗಿದೆ ಎಂಬುದನ್ನು ಆಗಾಗ ನಿರೂಪಿಸುತ್ತಲೇ ಬಂದಿದೆ. ಕೇಂದ್ರ ಹಾಗೂ ರಾಜ್ಯ ಸಚಿವ ಸಂಪುಟದಲ್ಲೂ ಆದ್ಯತೆ ಕೊಟ್ಟಿದೆ. ಹೇಮಲತಾ ನಾಯಕ್ ಅವರನ್ನು ವಿಧಾನಪರಿಷತ್‌ ಸದಸ್ಯರನ್ನಾಗಿ ಮಾಡಲಾಗಿದೆ. ಬಜೆಟ್‌ನಲ್ಲಿ ಪರಿಶಿಷ್ಟ ಪಂಗಡಕ್ಕೆ ₹ 12ಸಾವಿರ ಕೋಟಿ ಅನುದಾನವನ್ನು ರಾಜ್ಯ ಸರ್ಕಾರವು ಮೀಸಲಿಟ್ಟು ಹಲವು ಯೋಜನೆಗಳನ್ನು ರೂಪಿಸಿರುವುದು ಸಮಾಜದ ಸರ್ವಾಂಗೀಣ ಅಭಿವೃದ್ಧಿ ಸಹಕಾರಿಯಾಗಲಿದೆ’ ಎಂದರು.

‘ಪರಿವಾರ ಮತ್ತು ತಳವಾರ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ಗೊಂದಲಕ್ಕೆ ತೆರೆ ಎಳೆಯಲಾಗಿದೆ. ಈ ಬೇಡಿಕೆ ಮೂರು ದಶಕಗಳಿಂದ ನನೆಗುದಿಗೆ ಬಿದ್ದಿತ್ತು’ ಎಂದು ತಿಳಿಸಿದರು.

ಬಿಜೆಪಿ ರಾಜ್ಯ ಘಟಕ ಎಸ್ಟಿ ಮೋರ್ಚಾ ಉಪಾಧ್ಯಕ್ಷ ಮಲ್ಲೇಶ್, ನಗರ ಘಟಕದ ಅಧ್ಯಕ್ಷ ಲಕ್ಷಣ, ಪ್ರಧಾನ ಕಾರ್ಯದರ್ಶಿ ಎನ್.ಮಹೇಶ್, ಮುಖಂಡ ಕೃಷ್ಣ ನಾಯಕ, ಮಾಧ್ಯಮ ವಕ್ತಾರ ಮಹೇಶ್‌ ರಾಜೇ ಅರಸ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು