ಶುಕ್ರವಾರ, ಸೆಪ್ಟೆಂಬರ್ 24, 2021
21 °C
ನಂಜನಗೂಡು ನಗರಸಭೆ, ಬನ್ನೂರು, ಕೆ.ಆರ್‌.ನಗರ ಪುರಸಭೆಗೆ ಚುನಾವಣೆ

ಮೇ 29ರಂದು ಮತದಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ರಾಜ್ಯದ ವಿವಿಧೆಡೆ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮುಹೂರ್ತ ನಿಗದಿಯಾಗಿದ್ದು, ಮೈಸೂರು ಜಿಲ್ಲೆಯ ಮೂರು ಸ್ಥಳೀಯ ಸಂಸ್ಥೆಗಳಿಗೆ ಮೇ 29 ರಂದು ಮತದಾನ ನಡೆಯಲಿದೆ. 31 ರಂದು ಫಲಿತಾಂಶ ಪ್ರಕಟವಾಗಲಿದೆ.

ನಂಜನಗೂಡು ನಗರಸಭೆ ಮತ್ತು ಬನ್ನೂರು ಹಾಗೂ ಕೆ.ಆರ್‌.ನಗರ ಪುರಸಭೆಗಳಿಗೆ ಚುನಾವಣೆ ನಡೆಯಲಿದೆ. ಚುನಾವಣಾ ನೀತಿಸಂಹಿತೆ ತಕ್ಷಣದಿಂದ ಜಾರಿಗೆ ಬಂದಿದ್ದು, ಮೇ 31ರ ವರೆಗೆ ಮುಂದುವರಿಯಲಿದೆ.

ಲೋಕಸಭೆ ಚುನಾವಣೆಯ ಕಾವು ಆರುವುದಕ್ಕೆ ಮುನ್ನವೇ ಈ ಮೂರು ಸ್ಥಳೀಯ ಸಂಸ್ಥೆಗಳಲ್ಲಿ ಮತ್ತೆ ಚುನಾವಣೆಯ ‘ಜ್ವರ’ ಕಾಣಿಸಿಕೊಳ್ಳಲಿದೆ.

ಮೇ 9 ರಂದು ಚುನಾವಣೆಯ ಅಧಿಸೂಚನೆ ಹೊರಡಿಸಲಿದ್ದು, 16 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. 17 ರಂದು ಪರಿಶೀಲನೆ ನಡೆಯಲಿದ್ದು, ನಾಮಪತ್ರ ವಾಪಸ್‌ ಪಡೆಯಲು ಮೇ 20 ಕೊನೆಯ ದಿನ. ಮೈಸೂರಿನ ಮೂರು ಸ್ಥಳೀಯ ಸಂಸ್ಥೆಗಳಲ್ಲಿ ಒಟ್ಟು 93,266 ಮತದಾರರು ಇದ್ದಾರೆ.

ನಂಜನಗೂಡಿನ 31 ವಾರ್ಡ್‌ಗಳು ಮತ್ತು ಕೆ.ಆರ್.ನಗರ ಹಾಗೂ ಬನ್ನೂರಿನ 23 ವಾರ್ಡ್‌ಗಳಿಗೆ ಚುನಾವಣೆ ನಡೆಯಲಿವೆ. ಒಟ್ಟು 95 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತದೆ.

ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಯ ರೀತಿಯಲ್ಲಿ ಇಲ್ಲೂ ‘ನೋಟಾ’ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮತಪತ್ರದಲ್ಲಿ ಎಲ್ಲ ಅಭ್ಯರ್ಥಿಗಳ ಹೆಸರಿನ ಮುಂದೆ ಅವರ ಭಾವಚಿತ್ರ ಮುದ್ರಿಸಲಾಗುತ್ತದೆ ಎಂದ ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.

ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದ ಜೆಡಿಎಸ್‌–ಕಾಂಗ್ರೆಸ್‌ ಪಕ್ಷಗಳು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪ್ರತ್ಯೇಕವಾಗಿ ಸ್ಪರ್ಧಿಸಲು ನಿರ್ಧರಿಸಿವೆ. ಆದ್ದರಿಂದ ಹೆಚ್ಚಿನ ವಾರ್ಡ್‌ಗಳಲ್ಲಿ ಕಾಂಗ್ರೆಸ್‌, ಜೆಡಿಎಸ್‌ ಮತ್ತು ಬಿಜೆಪಿ ನಡುವೆ ತ್ರಿಕೋನ ಸ್ಪರ್ಧೆ ನಡೆಯಲಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.