ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಲೆ ಏರಿಕೆ ವಿರುದ್ಧ ರೈತರ ಪ್ರತಿಭಟನೆ

ತಿ.ನರಸೀಪುರ: ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿದ ರೈತರು, ಮನವಿ ಸಲ್ಲಿಕೆ
Last Updated 18 ಜೂನ್ 2021, 5:19 IST
ಅಕ್ಷರ ಗಾತ್ರ

ತಿ.ನರಸೀಪುರ: ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ರಸಗೊಬ್ಬರ ಬೆಲೆ ಜತೆಗೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವ ಸರ್ಕಾರದ ಕ್ರಮ ಖಂಡಿಸಿ‌ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘದ ಮುಖಂಡರು ತಾಲ್ಲೂಕು ಕಚೇರಿಯ ಮುಂಭಾಗ ಗುರುವಾರ ಪ್ರತಿಭಟನೆ ನಡೆಸಿದರು.

ಭತ್ತ ಖರೀದಿ ಕೇಂದ್ರ ಸ್ಥಾಪನೆ, ಉಚಿತ ಬಿತ್ತನೆ ಬೀಜ ವಿತರಣೆ, ಕಬ್ಬಿಗೆ ದರ ನಿಗದಿ ಮಾಡಿ, ಕಾರ್ಖಾನೆಗಳಿಂದ ರೈತರಿಗೆ ಬಾಕಿ ಹಣ ಕೊಡಿಸಿ, ಕೃಷಿ ಪರಿಕರಗಳ ಮೇಲೆ ಜಿಎಸ್‌ಟಿ ಬೇಡ ಹಾಗೂ ಬೆಳೆ ನಷ್ಟದ ಅಂದಾಜಿಗೆ ಸಮಿತಿ ರಚನೆ ಎಂಬ ಘೋಷಣಾ ಫಲಕ ಹಿಡಿದು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ರೈತ ಸಂಘ ಅಧ್ಯಕ್ಷ ಕರೋಹಟ್ಟಿ ಕುಮಾರಸ್ವಾಮಿ ಮಾತನಾಡಿ, ರೈತ ನಾಯಕರಂತೆ ಬಿಂಬಿಸಿಕೊಳ್ಳುವ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರೈತರನ್ನು ನಿರ್ಲಕ್ಷ್ಯ ಮಾಡಿದ್ದಾರೆ. ಕೊರೊನಾ ಸಂಕಷ್ಟದ ವೇಳೆ ಅಗತ್ಯ ವಸ್ತುಗಳ ಬೆಲೆ ಏರಿಸಿ ತೊಂದರೆ ನೀಡಿದೆ. ರೈತರ ಬೆಳೆಗಳಿಗೆ ಸೂಕ್ತ ಬೆಲೆ ನೀಡುತ್ತಿಲ್ಲ.‌ ಈ ಮೂಲಕ ಸರ್ಕಾರಗಳು ಆರ್ಥಿಕವಾಗಿ ಜನರನ್ನು ಶೋಷಿಸುತ್ತಿದೆ ಎಂದು ಆರೋಪಿಸಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರ ಅಗತ್ಯ ವಸ್ತುಗಳ ಬೆಲೆ ನಿಯಂತ್ರಿಸಿ, ರೈತರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.‌

ನಂತರ ಗ್ರೇಡ್ 2 ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಅತ್ತಹಳ್ಳಿ ಶಿವನಂಜು ಗೌರವಾಧ್ಯಕ್ಷ ಮಹದೇವ ಸ್ವಾಮಿ, ಟೌನ್ ಅಧ್ಯಕ್ಷ ಈ.ರಾಜು, ಮುಖಂಡರಾದ ಮೂಗೂರು ಶಾಂತನಾಗರಾಜು, ಮಹದೇವಸ್ವಾಮಿ, ಆಲಗೂಡು ಮಹದೇವ, ಮಂಟಯ್ಯ, ಎನ್.ಮಾದೇಶ, ಮಹೇಶ, ಎನ್.ಶಂಕರ, ಕುಮಾರ ಮೊದಲಾದವರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT