ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರ ಸಂಕಷ್ಟಕ್ಕೆ ಸ್ಪಂದಿಸಲು ಒತ್ತಾಯ

ಜಿಲ್ಲಾಧಿಕಾರಿ ಕಚೇರಿ ಮುಂದೆ ರಾಜ್ಯ ರೈತ ಸಂಘ ಪ್ರತಿಭಟನೆ
Last Updated 18 ಜೂನ್ 2021, 4:50 IST
ಅಕ್ಷರ ಗಾತ್ರ

ಮೈಸೂರು: ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ‘ಲಾಕ್‌ಡೌನ್‌ನಿಂದ ರೈತರು ಅನುಭವಿಸಿರುವ ನಷ್ಟದ ಬಗ್ಗೆ ಅಂದಾಜಿಸಲು ಸಮಿತಿ ರಚಿಸಬೇಕು’ ಎಂದು ಒತ್ತಾಯಿಸಿದರು.

ಕೃಷಿ ಪರಿಕರಗಳ ಮೇಲೆ ವಿಧಿಸುವ ಜಿಎಸ್‌ಟಿ ಕೈಬಿಡಬೇಕು, ಬಿತ್ತನೆ ಬೀಜಗಳನ್ನು ಉಚಿತವಾಗಿ ವಿತರಿಸಬೇಕು, ರಸಗೊಬ್ಬರ, ಕೀಟನಾಶಕಗಳನ್ನು ರಿಯಾಯಿತಿ ದರದಲ್ಲಿ ನೀಡಬೇಕು ಎಂದು ಆಗ್ರಹಿಸಿದರು.

ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ಎಲ್ಲಾ ಕೃಷಿ ಚಟುವಟಿಕೆಗಳಿಗೂ ವಿಸ್ತರಿಸಬೇಕು. ರೈತ ಕುಟುಂಬದ ಇಬ್ಬರನ್ನು ಈ ವ್ಯಾಪ್ತಿಗೆ ಸೇರಿಸಬೇಕು ಎಂದು ಮನವಿ ಮಾಡಿದರು.

ಭತ್ತ ಮತ್ತು ರಾಗಿಯ ಬೆಂಬಲ ಬೆಲೆ ಬಾಕಿಯನ್ನು ಕೂಡಲೇ ಪಾವತಿಸಬೇಕು, ಭತ್ತ ಖರೀದಿ ಕೇಂದ್ರಗಳನ್ನು ಕೂಡಲೇ ತೆರೆಯಬೇಕು ಎಂದು ಒತ್ತಾಯಿಸಿದ ಅವರು, ಇಂಧನ ದರ ಇಳಿಕೆ ಮಾಡಬೇಕು, ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಪರೀಕ್ಷೆಯನ್ನು ಹೆಚ್ಚಿಸಬೇಕು, ಬಂಡವಾಳಶಾಹಿಗಳಿಂದ ವಂಚಿತರಾಗಿರುವ ಮೈಸೂರು ತಾಲ್ಲೂಕಿನ ಕೋಚನಹಳ್ಳಿ ರೈತರಿಗೆ ಸರ್ಕಾರ ನ್ಯಾಯ ದೊರಕಿಸಿಕೊಡಬೇಕು ಎಂದು ಹೇಳಿದರು.

ಮೈಸೂರು – ಮಡಿಕೇರಿಗೆ ಮತ್ತೊಂದು ರಾಷ್ಟ್ರೀಯ ಹೆದ್ದಾರಿ 275 ನಿರ್ಮಿಸುವುದು ಸರಿಯಲ್ಲ. ಇದಕ್ಕಾಗಿ 950 ಎಕರೆ ಫಲವತ್ತಾದ ಭೂಮಿಯಲ್ಲಿ ಫಲ ಬಿಡುವ ತೆಂಗು, ಅಡಿಕೆ ಮೊದಲಾದ ಮರಗಳನ್ನು ಕತ್ತರಿಸಬೇಕಾಗುತ್ತದೆ. ಈಗಾಗಲೇ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದೆ. ಅನಗತ್ಯವಾಗಿರುವ ಈ ಯೋಜನೆಯನ್ನು ಕೈಬಿಡಬೇಕು. ಹಾಲಿ ಇರುವ ಮೈಸೂರು–ಬಂಟ್ವಾಳ ರಾಷ್ಟ್ರೀಯ ಹೆದ್ದಾರಿಯನ್ನು ಅಭಿವೃದ್ಧಿಪಡಿಸಬೇಕು ಎಂದು ಅವರು ಒತ್ತಾಯಿಸಿದರು.

ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜ್, ತಾಲ್ಲೂಕು ಘಟಕದ ಅಧ್ಯಕ್ಷ ಪಿ.ಮರಂಕಯ್ಯ, ಮಾಧ್ಯಮ ಕಾರ್ಯದರ್ಶಿ ಎನ್.ಪುನೀತ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT