ಬುಧವಾರ, ಸೆಪ್ಟೆಂಬರ್ 22, 2021
22 °C

ರೈತರ ಪ್ರತಿಭಟನೆ ರಾಜಕೀಯ ಪ್ರೇರಿತ: ರಾಜ್‌ಕುಮಾರ್ ಚಾಹರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ‘ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ರಾಜಕೀಯ ಪ್ರೇರಿತ’ ಎಂದು ಬಿಜೆಪಿ ರೈತ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ, ಸಂಸದ ರಾಜ್‌ಕುಮಾರ್‌ ಚಾಹರ್ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ರೈತ ಮೋರ್ಚಾ ಕಾರ್ಯಕಾರಿಣಿಯಲ್ಲಿ ಪಾಲ್ಗೊಳ್ಳಲು ಬಂದಿದ್ದ ಅವರು ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ನವದೆಹಲಿಯ ಹೊರವಲಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ಸ್ಥಳದಲ್ಲಿ ಈಗ ಇರುವುದು ರೈತರಲ್ಲ. ಕಾಂಗ್ರೆಸ್‌ ಹಾಗೂ ವಿರೋಧ ಪಕ್ಷಗಳ ಕಾರ್ಯಕರ್ತರು ರೈತರ ಸೋಗಿನಲ್ಲಿ ಅಲ್ಲಿ ಕುಳಿತಿದ್ದಾರೆ’ ಎಂದು ಆರೋಪಿಸಿದರು.

‘ಪ್ರತಿಭಟನೆಯ ಆರಂಭದ ದಿನಗಳಲ್ಲಿ ರೈತರು ಇದ್ದರು. ಕೃಷಿ ಕಾಯ್ದೆಗಳ ಬಗ್ಗೆ ಇದ್ದಂತಹ ಅನುಮಾನ, ಆತಂಕ ದೂರವಾದ ಬಳಿಕ ಅವರು ಅಲ್ಲಿಂದ ತೆರಳಿದ್ದಾರೆ. ಆದರೆ ಬಿಜೆಪಿಯ ಸಿದ್ಧಾಂತವನ್ನು ವಿರೋಧಿಸುವವರು ಅಲ್ಲೇ ಉಳಿದುಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಜನಪ್ರಿಯತೆಯನ್ನು ಅವರಿಗೆ ಸಹಿಸಲು ಆಗುತ್ತಿಲ್ಲ’ ಎಂದು ಕಿಡಿಕಾರಿದರು.

‘ಕಾಂಗ್ರೆಸ್ ಪಕ್ಷ ತನ್ನ ಆಡಳಿತದ ಅವಧಿಯಲ್ಲಿ ರೈತರಿಗೆ ಏನನ್ನೂ ನೀಡಿಲ್ಲ. ದೇಶದಲ್ಲಿ ಈಗಾಗಲೇ ನೆಲೆ ಕಳೆದುಕೊಂಡಿರುವ ಕಾಂಗ್ರೆಸ್‌, ರೈತರ ಹೆಸರಿನಲ್ಲಿ ರಾಜಕೀಯ ಮಾಡಿ ಅಸ್ತಿತ್ವ ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದೆ’ ಎಂದು ಟೀಕಿಸಿದರು.

‘ಪ್ರಧಾನಿ ನರೇಂದ್ರ ಮೋದಿ ಅವರು ರೈತರ ಏಳಿಗೆಗಾಗಿ ಸಾಕಷ್ಟು ಕೆಲಸ ಮಾಡುತ್ತಿದ್ದಾರೆ. ಕಿಸಾನ್‌ ಸಮ್ಮಾನ್‌ ನಿಧಿ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಕೃಷಿ ಕ್ಷೇತ್ರದ ಸಮಗ್ರ ಸುಧಾರಣೆ ಗಮನದಲ್ಲಿಟ್ಟುಕೊಂಡೇ ನೂತನ ಕೃಷಿ ಕಾಯ್ದೆಗಳನ್ನು ಜಾರಿಗೆ ತರಲಾಗಿದೆ’ ಎಂದರು.

‘ಬಿಜೆಪಿಯನ್ನು ಇನ್ನಷ್ಟು ಬಲಗೊಳಿಸುವುದು ಕಿಸಾನ್‌ ಮೋರ್ಚಾದ ಗುರಿಗಳಲ್ಲಿ ಒಂದಾಗಿದೆ. ಕೇಂದ್ರ ಸರ್ಕಾರದ ಕೃಷಿ ಸಂಬಂಧಿತ ಮತ್ತು ಗ್ರಾಮೀಣ ಪ್ರದೇಶಗಳಿಗೆ ಮೀಸಲಾಗಿರುವ ಯೋಜನೆಗಳನ್ನು ರೈತರು ಮತ್ತು ಗ್ರಾಮಗಳಿಗೆ ತಲುಪಿಸುವ ಕೆಲಸವನ್ನು ರೈತ ಮೋರ್ಚಾದ ಕಾರ್ಯಕರ್ತರು ಮಾಡಬೇಕು’ ಎಂದು ಕರೆ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು