ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈಲ್ವೆ ಬ್ಯಾರಿಕೇಡ್‌ ನಿರ್ಮಾಣಕ್ಕೆ ₹500 ಕೋಟಿ: ಅರಣ್ಯ ಸಚಿವ ಉಮೇಶ್ ಕತ್ತಿ

ಅನುದಾನ ಬಿಡುಗಡೆಗೆ ಕೇಂದ್ರ ಸರ್ಕಾರ ಒಪ್ಪಿಗೆ
Last Updated 2 ಅಕ್ಟೋಬರ್ 2021, 2:38 IST
ಅಕ್ಷರ ಗಾತ್ರ

ಎಚ್.ಡಿ.ಕೋಟೆ: ‘ಕಾಡುಪ್ರಾಣಿಗಳ ಹಾವಳಿ ತಡೆಯಲು ಕಾಡಂಚಿನಲ್ಲಿ ರೈಲ್ವೆ ಬ್ಯಾರಿಕೇಡ್ ನಿರ್ಮಿಸಲು ₹500 ಕೋಟಿ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ’ ಎಂದು ಅರಣ್ಯ ಮತ್ತು ಪರಿಸರ ಸಚಿವ ಉಮೇಶ್ ಕತ್ತಿ ತಿಳಿಸಿದರು.

ತಾಲ್ಲೂಕಿನ ಕಾಕನಕೋಟೆ (ದಮ್ಮನಕಟ್ಟೆ) ಸಫಾರಿ ಕೇಂದ್ರದ ಬಳಿ ಶುಕ್ರವಾರ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ನವೀಕೃತ ವೆಬ್‌ಸೈಟ್‌ ಅನಾವರಣ ಮತ್ತು ಸಫಾರಿ ಆನ್‌ಲೈನ್‌ ಬುಕ್ಕಿಂಗ್ ವ್ಯವಸ್ಥೆಗೆ ಚಾಲನೆ ನೀಡಿ ಮಾತನಾಡಿದರು.

ಮೈಸೂರು, ಕೊಡಗು, ಹಾಸನ ಮತ್ತು ಚಾಮರಾಜನಗರ ಜಿಲ್ಲೆಗಳ ಅರಣ್ಯ ಪ್ರದೇಶದ ರೈತರ ಜಮೀನಿಗೆ ಕಾಡು ಪ್ರಾಣಿಗಳು ದಾಳಿ ಮಾಡಿ ಫಸಲನ್ನು ನಾಶ ಮಾಡುತ್ತಿವೆ. ಇದನ್ನು ತಡೆಯಲು ರೈಲು ಕಂಬಿ ಬಳಸಿ ಬ್ಯಾರಿಕೇಡ್ ನಿರ್ಮಿಸಲು ಮೊದಲ ಹಂತದಲ್ಲಿ ₹50 ಕೋಟಿಯನ್ನು ಕೂಡಲೇ ಬಿಡುಗಡೆ ಮಾಡಲಿದೆ. ತಾಲ್ಲೂಕಿನ ನಾಗರಹೊಳೆ ಅರಣ್ಯದಲ್ಲಿ 50 ಕಿ.ಮೀ ಹಾಗೂ ಬಂಡೀಪುರ ಅರಣ್ಯದಲ್ಲಿ 70 ಕಿ.ಮೀ ರೈಲು ಕಂಬಿ ಅಳವಡಿಸಲಿದ್ದು, 6 ತಿಂಗಳೊಳಗೆ ಕಾಮಗಾರಿಗೆ ಚಾಲನೆ ನೀಡಲಾಗುವುದು’ ಎಂದು ಭರವಸೆ ನೀಡಿದರು.

ಶಾಸಕ ಅನಿಲ್ ಚಿಕ್ಕಮಾದು ಮಾತನಾಡಿ, ‘ತಾಲ್ಲೂಕಿನಲ್ಲಿ ಮಾನವ ಮತ್ತು ಪ್ರಾಣಿಗಳ ಸಂಘರ್ಷದಿಂದ ಜನ ಸಾಯುತ್ತಿದ್ದಾರೆ. ಇದನ್ನು ತಪ್ಪಿಸಲು ಅರಣ್ಯ ಇಲಾಖೆ ಶ್ರಮಿಸಬೇಕು. ವನ್ಯಜೀವಿಗಳಿಂದ ಮೃತಪಟ್ಟವರಿಗೆ ಸೂಕ್ತ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿದರು.

‘8 ದಿನಗಳವರೆಗೆ ವನ್ಯಜೀವಿ ಸಪ್ತಾಹ ಕಾರ್ಯಕ್ರಮ ಹಮ್ಮಿಕೊಳ್ಳ ಲಾಗಿದೆ. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ 74 ಶಾಲೆಗಳ 2,879 ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. 2ನೇ ಹಂತದ ರಸಪ್ರಶ್ನೆ ಸ್ಪರ್ಧೆಯನ್ನು ವಲಯ ಕಚೇರಿಗಳಲ್ಲಿ ಹಮ್ಮಿಕೊಳ್ಳಲಾಗುವುದು. ಹುಲಿಗಳು ಅವಾಸ ಸ್ಥಾನದ ಬಗ್ಗೆ ಕಾರು ರ‍್ಯಾಲಿ ಹಮ್ಮಿಕೊಂಡಿದ್ದು, ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಪ್ರದೇಶದಿಂದ ನಾಗರಹೊಳೆ ಮೂಲಕ ಮಧುಮಲೈ ಹುಲಿ ಸಂರಕ್ಷಿತ ಪ್ರದೇಶದವರೆಗೆ ರ‍್ಯಾಲಿ ಸಾಗಲಿದೆ. ಆನ್‌ಲೈನ್‌ನಲ್ಲಿ ಛಾಯಾಚಿತ್ರ ಸ್ಪರ್ಧೆ ಏರ್ಪಡಿಸಲಾಗಿದೆ’ ಎಂದು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಿ.ಮಹೇಶ್ ಕುಮಾರ್ ತಿಳಿಸಿದರು.

ಕೊಡಗು ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ತಖತ್ ಸಿಂಗ್ ರಣಾವತ್, ಮೈಸೂರು ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಟಿ.ಹೀರಾಲಾಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಚೇತನ್, ಮಡಿಕೇರಿ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷ ಣಾಧಿಕಾರಿ ಶಿವರಾಮ ಬಾಬು, ಆಹಾರ ನಾಗರಿಕ ಇಲಾಖೆ ಜಂಟಿ ನಿರ್ದೇಶಕ ಕಾ.ರಾಮೇಶ್ವರಪ್ಪ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎ.ವಿ.ಸತೀಶ್, ಎಸ್.ಪಿ.ಮಹದೇವ್, ಸಿ. ಅಂತೋನಿ ಸ್ವಾಮಿ, ಸಿದ್ದರಾಜು, ಸತೀಶ್, ಮಂಜುನಾಥ್ ಆರಾಧ್ಯ ಇದ್ದರು.

ಬೆಳೆ ಹಾನಿ: ಪರಿಹಾರ ನೀಡುವಂತೆ ಆಗ್ರಹ

ಹಂಪಾಪುರ: ವನ್ಯಜೀವಿಗಳು ಬೆಳೆ ನಾಶ ಮಾಡುತ್ತಿದ್ದು, ಸೂಕ್ತ ಪರಿಹಾರ ನೀಡಬೇಕು ಎಂದು ರೈತರು ಅರಣ್ಯ ಸಚಿವ ಉಮೇಶ್ ಕತ್ತಿ ಅವರನ್ನು ಒತ್ತಾಯಿಸಿದರು.

ಎಚ್.ಡಿ. ಕೋಟೆ ತಾಲ್ಲೂಕಿನ ಕಾಕನಕೋಟೆ ಸಫಾರಿ ಕೇಂದ್ರಕ್ಕೆ ಶುಕ್ರವಾರ ಭೇಟಿ ನೀಡಿದ ಸಚಿವರಿಗೆ ಮನವಿ ಸಲ್ಲಿಸಿದರು.

‘ಎಚ್.ಡಿ.ಕೋಟೆ ಮತ್ತು ಸರಗೂರು ತಾಲ್ಲೂಕಿನ ಬಹುತೇಕ ಕಾಡಂಚಿನ ಗ್ರಾಮಗಳಲ್ಲಿ ಆನೆ, ಜಿಂಕೆಗಳ ಹಾವಳಿ ಇದೆ. ಬೆಳೆ ಹಾನಿಗೊಳಗಾದ ಸಂದರ್ಭದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದರೆ ಸರಿಯಾಗಿ ಸ್ಪಂದಿಸುವುದಿಲ್ಲ. ನಮಗೆ ಶಾಶ್ವತ ಪರಿಹಾರ ಕಲ್ಪಿಸಬೇಕು’ ಎಂದು ಆಗ್ರಹಿಸಿದರು.

‘ಎಚ್.ಡಿ. ಕೋಟೆ ಮತ್ತು ಸರಗೂರು ತಾಲ್ಲೂಕಿನಲ್ಲಿ ಇತ್ತೀಚಿನ ದಿನಗಳಲ್ಲಿ ಕಾಡು ಪ್ರಾಣಿಗಳಿಂದ ಬೆಳೆಗಳು ನಾಶವಾಗುತ್ತಿವೆ. ಬೆಳೆಗೆ ಸೂಕ್ತ ಪರಿಹಾರ ದೊರೆಯುತ್ತಿಲ್ಲ ಎಂಬ ದೂರುಗಳಿದ್ದು, ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು’ ಎಂದು ಉಮೇಶ್‌ ಕತ್ತಿ ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT