ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂಬ ಜಮೀರ್‌ ಹೇಳಿಕೆ ಸರಿಯಲ್ಲ– ಧ್ರುವನಾರಾಯಣ

Last Updated 20 ಜೂನ್ 2021, 11:13 IST
ಅಕ್ಷರ ಗಾತ್ರ

ಮೈಸೂರು: ‘ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ’ ಎಂದು ಚಾಮರಾಜಪೇಟೆ ಶಾಸಕ ಜಮೀರ್‌ ಅಹ್ಮದ್‌ ಖಾನ್‌ ಪದೇ ಪದೇ ಹೇಳುತ್ತಿರುವುದು ಸರಿಯಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಅಸಮಾಧಾನ ವ್ಯಕ್ತಪಡಿಸಿದರು.

ಚುನಾವಣೆಗೆ ಇನ್ನೂ ಸಾಕಷ್ಟು ಸಮಯ ಇದೆ. ಈಗಲೇ ಮುಖ್ಯಮಂತ್ರಿಗಳ ಆಯ್ಕೆ ಮಾಡುವುದು ಅಪ್ರಸ್ತುತ. ಚುನಾವಣೆಯ ನಂತರ ಶಾಸಕರ ಅಭಿಪ್ರಾಯ ಪಡೆದು ಹೈಕಮಾಂಡ್ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುತ್ತದೆ ಎಂದು ಅವರು ಇಲ್ಲಿ ಭಾನುವಾರ ಸುದ್ದಿಗಾರರಿಗೆ ತಿಳಿಸಿದರು.

ಕಾಂಗ್ರೆಸ್‌ನಲ್ಲಿ ಈಗ ಯಾವುದೇ ಬಣ ಇಲ್ಲ. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದಾರೆ. ರಾಜ್ಯದಲ್ಲೂ ಕಾಂಗ್ರೆಸ್‌ ಪರವಾದ ಅಲೆ ಇದೆ. ಇಂತಹ ಸಂದರ್ಭದಲ್ಲಿ ಜಮೀರ್ ಅವರ ಹೇಳಿಕೆಗಳು ಗೊಂದಲಕ್ಕೆ ಕಾರಣವಾಗುತ್ತದೆ ಎಂದರು.

ಜಮೀರ್ ಅಹಮ್ಮದ್ ಅವರು ಜೆಡಿಎಸ್‌ನಲ್ಲಿದ್ದಾಗ ಕುಮಾರಣ್ಣ ಕುಮಾರಣ್ಣ ಎಂದು ಎಚ್.ಡಿ.ಕುಮಾರಸ್ವಾಮಿ ಅವರನ್ನು ಕರೆಯುತ್ತಿದ್ದರು. ಈಗ ಕಾಂಗ್ರೆಸ್‌ಗೆ ಬಂದು ಸಿದ್ದರಾಮಯ್ಯ ಅವರ ಗುಣಗಾನ ಮಾಡುತ್ತಿದ್ದಾರೆ. ಗುಣಗಾನ ಮಾಡುವುದಕ್ಕೆ ಯಾವುದೇ ಅಡ್ಡಿ ಇಲ್ಲ. ಆದರೆ, ಮುಂದಿನ ಮುಖ್ಯಮಂತ್ರಿಯಾಗುತ್ತಾರೆ ಎಂಬಂತಹ ಹೇಳಿಕೆಗಳನ್ನು ನೀಡಬಾರದು ಎಂದು ಅವರು ಅಭಿಪ್ರಾಯಪಟ್ಟರು.

ಬಿಜೆಪಿಗೆ ಕಾಂಗ್ರೆಸ್ ಪಕ್ಷದ ಕುರಿತು ಮಾತನಾಡುವ ನೈತಿಕತೆ ಇಲ್ಲ. ಆಡಳಿತ ಪಕ್ಷದಲ್ಲಿ ಇರುವವರೇ ಮುಖ್ಯಮಂತ್ರಿ ವಿರುದ್ಧ ಆಪಾದನೆ ಮಾಡುತ್ತಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಇಂತಹ ಘಟನೆಗಳು ನಡೆದಿರಲಿಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ವಿಧಾನ ಪರಿಷತ್ ಸದಸ್ಯ ಆರ್.ಧರ್ಮಸೇನಾ ಮಾತನಾಡಿ, ‘ಸಿದ್ದರಾಮಯ್ಯ ಭಾವಿ ಮುಖ್ಯಮಂತ್ರಿ ಎಂದು ಜಮೀರ್ ಅಹಮ್ಮದ್‌ಖಾನ್ ಹೇಳಿರುವುದರಲ್ಲಿ ತಪ್ಪಿಲ್ಲ. ಅವರು ಶಾಸಕರಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದರಲ್ಲಿ ತಪ್ಪನ್ನು ಹುಡುಕಬಾರದು. ನಾನು ಯಾರ ಪರವೂ ಅಲ್ಲ. ಪಕ್ಷದ ಪರವಾಗಿದ್ದು ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧನಾಗಿದ್ದೇನೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT