ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೆರಿಗೆ ವಿನಾಯಿತಿ: ಮಂಡ್ಯಕ್ಕೆ ಹೋಗುವವರಿಗೂ ಅನ್ವಯಿಸಲಿ; ಎಸ್.ಟಿ.ಸೋಮಶೇಖರ್‌

Last Updated 29 ಆಗಸ್ಟ್ 2022, 13:22 IST
ಅಕ್ಷರ ಗಾತ್ರ

ಮೈಸೂರು: ‘ಹೊರ ರಾಜ್ಯಗಳಿಂದ ಆಗಮಿಸುವ ಪ್ರವಾಸಿ ವಾಹನಗಳಿಗೆ ತೆರಿಗೆ ವಿನಾಯಿತಿ ನೀಡುವ ಆದೇಶದಲ್ಲಿ ಮೈಸೂರು ಜಿಲ್ಲೆಯೊಂದಿಗೆ ಮಂಡ್ಯ ಜಿಲ್ಲೆಯ ಹೆಸರು ಸೇರ್ಪಡೆಯಾಗುವಂತೆ ನೋಡಿಕೊಳ್ಳಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್‌ ಜಿಲ್ಲಾಡಳಿತಕ್ಕೆ ಸೂಚಿಸಿದರು.

ದಸರಾ ಕಾರ್ಯಕ್ರಮಗಳ ಆಯೋಜನೆ ಸಂಬಂಧ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

‘ಮೈಸೂರಿಗೆ ಬರುವ ಪ್ರವಾಸಿಗರು ಮಂಡ್ಯ ಜಿಲ್ಲೆಯ ಕೆಆರ್‌ಎಸ್, ಶ್ರೀರಂಗಪಟ್ಟಣ, ರಂಗನತಿಟ್ಟು ಸೇರಿದಂತೆ ಹಲವು ಪ್ರವಾಸಿ ತಾಣಗಳ ವೀಕ್ಷಣೆಗೆ ತೆರಳುತ್ತಾರೆ. ಅವರಿಗೆ ತೆರಿಗೆ ಕಟ್ಟುವ ವಿಷಯದಲ್ಲಿ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಹೀಗಾಗಿ ಅಂತರರಾಜ್ಯ ವಾಹನಗಳಿಗೆ ತೆರಿಗೆ ವಿನಾಯಿತಿ ನೀಡುವಾಗ ಮಂಡ್ಯ ಜಿಲ್ಲೆಯ ಹೆಸರನ್ನೂ ಸೇರಿಸಬೇಕು’ ಎಂದರು.

‘ಇದೇ ಮೊದಲ ಬಾರಿಗೆ ಆರೋಗ್ಯ ಮತ್ತು ಕೈಗಾರಿಕಾ ದಸರಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಆರೋಗ್ಯದ ವಿಷಯದಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಸ್ತುಪ್ರದರ್ಶನ ಆಯೋಜಿಸಲು ಕ್ರಮ ವಹಿಸುವಂತೆ ಡಿಎಚ್‌ಒಗೆ ಪತ್ರ ಬರೆಯಲಾಗಿದೆ. ನಾಲ್ಕು ದಿನ ಕೈಗಾರಿಕಾ ದಸರಾ ಆಯೋಜಿಸಲು ಕೈಗಾರಿಕಾ ಸಂಘದವರು ಮನವಿ ಮಾಡಿದ್ದಾರೆ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಬಿ.ಎಸ್. ಮಂಜುನಾಥಸ್ವಾಮಿ ಮಾಹಿತಿ ನೀಡಿದರು.

‘ಅರಮನೆ, ಮೃಗಾಲಯ, ಚಾಮುಂಡಿ ಬೆಟ್ಟ, ದಸರಾ ವಸ್ತುಪ್ರದರ್ಶನ, ಫಲಪುಷ್ಪ ಪ್ರದರ್ಶನ ವೀಕ್ಷಣೆಗೆ ಒಂದೇ ಟಿಕೆಟ್ ನೀಡುವ ಬಗ್ಗೆ ಪ್ರಯತ್ನಿಸಲಾಗುತ್ತಿದೆ’ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ತಿಳಿಸಿದರು.

ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎಂ.ಶಿವಕುಮಾರ್, ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸಗೌಡ, ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ, ಜಿ.ಪಂ. ಸಿಇಒ ಬಿ.ಆರ್.ಪೂರ್ಣಿಮಾ, ನಗರಪಾಲಿಕೆ ಆಯುಕ್ತ ಲಕ್ಷ್ಮಿಕಾಂತ ರೆಡ್ಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT