ಸೋಮವಾರ, ಸೆಪ್ಟೆಂಬರ್ 26, 2022
24 °C

ಹೊಸ ಕಾರ್ಯಕ್ರಮ, ಅರ್ಥಪೂರ್ಣ ದಸರೆಗೆ ಸಚಿವ ಎಸ್.ಟಿ.ಸೋಮಶೇಖರ್‌ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ‘ನಾಡಹಬ್ಬ ದಸರಾ ಮಹೋತ್ಸವವನ್ನು ಅರ್ಥಪೂರ್ಣವಾಗಿ ನಡೆಸಲು ಅಧಿಕಾರಿಗಳು ಶ್ರಮಿಸಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್‌ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ದಸರಾ ಉಪಸಮಿತಿಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಈ ಬಾರಿ ಸಾಂಪ್ರದಾಯಿಕ ಹಾಗೂ ಅದ್ದೂರಿಯಾಗಿ ದಸರಾ ಆಚರಣೆ ಮಾಡುತ್ತಿದ್ದು, ಈ ಸಂಬಂಧ ಉಪ ಸಮಿತಿಗಳನ್ನು ರಚಿಸಲಾಗಿದೆ. ಯಾವುದೇ ಲೋಪ ಉಂಟಾಗದಂತೆ ವ್ಯವಸ್ಧಿತವಾಗಿ ಕಾರ್ಯನಿರ್ವಹಿಸಿ ಉತ್ಸವ ಯಶಸ್ವಿಗೊಳಿಸಬೇಕು’ ಎಂದರು.

‘ಈ ಬಾರಿ ಹೊಸ ರೀತಿಯ ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ದಸರಾಗೆ ಮೆರುಗು ತರಬೇಕು. ವಿದ್ಯುತ್ ದೀಪಾಲಂಕಾರ ಆಕರ್ಷಕವಾಗಿರಬೇಕು. ಶಿಷ್ಟಾಚಾರದಲ್ಲಿ ಯಾವುದೇ ರೀತಿಯ ಉಲ್ಲಂಘನೆ ಆಗದಂತೆ ಎಚ್ಚರ ವಹಿಸಬೇಕು’ ಎಂದು ನಿರ್ದೇಶನ ನೀಡಿದರು.

‘ದಸರಾ ಉಪ ಸಮಿತಿಗಳು ಆಯೋಜಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಕಲಾವಿದರು ಪುನರಾವರ್ತನೆ ಆಗದಂತೆ ಎಚ್ಚರ ವಹಿಸಬೇಕು. ಹೊಸ ಪ್ರತಿಭೆಗಳಿಗೆ ಅವಕಾಶ ಕಲ್ಪಿಸಬೇಕು. ಈ ಬಾರಿಯು ರೈತ ದಸರಾ, ಯೋಗ ದಸರಾ, ಚಲನಚಿತ್ರೋತ್ಸವ, ದಸರಾ ಕುಸ್ತಿ, ಯುವ ದಸರಾ, ಯುವ ಸಂಭ್ರಮ, ಮಹಿಳಾ ದಸರಾ, ಮತ್ಸ್ಯ ಪ್ರದರ್ಶನ ಮತ್ತು ಮಾರಾಟ, ಆಹಾರ ಮೇಳ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವಿಜೃಂಭಣೆಯಿಂದ ನಡೆಸಬೇಕು’ ಎಂದು ಸೂಚಿಸಿದರು.

ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ, ಜಿ.ಪಂ. ಸಿಇಒ ಬಿ.ಆರ್.ಪೂರ್ಣಿಮಾ, ಎಸ್ಪಿ ಆರ್.ಚೇತನ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಬಿ.ಎಸ್. ಮಂಜುನಾಥಸ್ವಾಮಿ, ವಿವಿಧ ಸಮಿತಿಗಳ ಕಾರ್ಯಾದ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು