ಮಂಗಳವಾರ, ಜೂನ್ 2, 2020
27 °C

ಎಪಿಎಂಸಿ ಕಾಯ್ದೆ ತಿದ್ದುಪಡಿ: ರಾಜ್ಯದಾದ್ಯಂತ 27ರಂದು ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಹಾಗೂ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಈಡಾಗಿರುವ ರೈತರು, ಕೃಷಿ ಕೂಲಿಕಾರ್ಮಿಕರು ಹಾಗೂ ಗ್ರಾಮೀಣ ಕಸುಬುದಾರರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಒತ್ತಾಯಿಸಿ, ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ವತಿಯಿಂದ ಮೇ 27ರಂದು ಚಳವಳಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯ ಘಟಕದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದರು.

ರಾಜ್ಯದ ಎಲ್ಲ ಜಿಲ್ಲಾ, ತಾಲ್ಲೂಕು ಕಚೇರಿಗಳ ಎದುರು ಅಂದು ಬೆಳಿಗ್ಗೆ ಧರಣಿ ನಡೆಸಿ, ಪ್ರಧಾನಿ ಹಾಗೂ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಗುವುದು ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಎಪಿಎಂಸಿ ಕಾಯ್ದೆ ಹಾಗೂ ಕೃಷಿ ಭೂಮಿ ಗುತ್ತಿಗೆ ಕಾಯ್ದೆ ತಿದ್ದುಪಡಿಯನ್ನು ಮೇ 31ರೊಳಗೆ ಮಾಡುವಂತೆ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳ ಮೇಲೆ ಒತ್ತಡ ಹೇರಿದೆ. ಈ ತಿದ್ದುಪಡಿ ಮಾಡುವುದಿಲ್ಲ ಎಂದು ಪಶ್ಚಿಮ ಬಂಗಾಳ, ಆಂಧ್ರಪ್ರದೇಶ ಸೇರಿದಂತೆ ಕೆಲ ರಾಜ್ಯಗಳು ಹೇಳಿವೆ. ಆದರೆ, ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ತಿದ್ದುಪಡಿ ತರಲಾಗುತ್ತಿದೆ’ ಎಂದು ದೂರಿದರು.

‌‘ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಲು ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಕಾನೂನು ಸಚಿವ ಮಾಧುಸ್ವಾಮಿ ಅವರಿಗೂ ಇಷ್ಟವಿಲ್ಲ ಎಂಬ ಸುದ್ದಿ ಅವರ ಆಪ್ತ ವಲಯದಲ್ಲಿ ಕೇಳಿಬರುತ್ತಿದೆ. ಅದು ಎಷ್ಟು ಸತ್ಯವೋ ಗೊತ್ತಿಲ್ಲ’ ಎಂದರು.

ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ರೈತರಿಗಷ್ಟೇ ಅಲ್ಲದೆ, ಮಾರುಕಟ್ಟೆಯಲ್ಲಿ ಕೆಲಸ ಮಾಡುವ ಕಾರ್ಮಿಕರು, ದಿನಗೂಲಿ ನೌಕರರು, ಬೀದಿಬದಿ ವ್ಯಾಪಾರಿಗಳು, ಸಣ್ಣ ವ್ಯಾಪಾರಿಗಳ ಬದುಕನ್ನು ಕಿತ್ತುಕೊಳ್ಳುತ್ತದೆ. ಬಂಡವಾಳಶಾಹಿಗಳ ಏಕಸ್ವಾಮ್ಯದಿಂದ ಗ್ರಾಹಕರಿಗೂ ತೊಂದರೆಯಾಗಲಿದೆ. ಆಹಾರ ಸಾರ್ವಭೌಮತ್ವ ಮತ್ತು ಆಹಾರ ಸಂಸ್ಕೃತಿಗೂ ಧಕ್ಕೆ ಉಂಟಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಜೂನ್‌ 10ರ ನಂತರ ಬೃಹತ್‌ ಚಳವಳಿ: ಎಪಿಎಂಸಿ ಕಾಯ್ದೆ, ಕಾರ್ಮಿಕ ಕಾಯ್ದೆ, ಭೂಸುಧಾರಣಾ ಮತ್ತು ಭೂ–ಸ್ವಾಧೀನ ಕಾಯ್ದೆಯ ತಿದ್ದುಪಡಿಗಳ ವಿರುದ್ಧ ರೈತ ಸಂಘಟನೆ ಮತ್ತು ಇತರೆ ಜನಪರ ಚಳವಳಿಗಳ ಸಮನ್ವಯತೆಯಲ್ಲಿ ರಾಜ್ಯದಾದ್ಯಂತ ನಿರಂತರ ಬೃಹತ್‌ ಚಳವಳಿಗಳನ್ನು ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ. ಈ ಸಂಬಂಧ ಜೂನ್‌ 10ರಂದು ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‌ನ ಸಿಪಿಎಂ ಪಕ್ಷದ ಕಚೇರಿಯಲ್ಲಿ ಸಭೆ ಸೇರಿ ಹೋರಾಟದ ರೂಪುರೇಷೆಗಳನ್ನು ಸಿದ್ಧಪಡಿಸಲಾಗುತ್ತದೆ ಎಂದರು.

ಮಾನವ ದಿನ ಹೆಚ್ಚಿಸಿ: ಲಾಕ್‌ಡೌನ್‌ನಿಂದಾಗಿ ನಗರ ಪ್ರದೇಶದಲ್ಲಿರುವ ಕೂಲಿಕಾರ್ಮಿಕರು ಗ್ರಾಮಗಳಿಗೆ ಹೋಗಿದ್ದಾರೆ. ಈ ಪೈಕಿ ಶೇ 50ರಷ್ಟು ಜನರು ನಗರಗಳಿಗೆ ಬರುವುದಿಲ್ಲ. ಹೀಗಾಗಿ, ನರೇಗಾ ಯೋಜನೆಯಡಿ ಈಗಿರುವ 100 ಮಾನವ ದಿನಗಳನ್ನು 250ಕ್ಕೆ ಹೆಚ್ಚಿಸಬೇಕು. ಎಲ್ಲ ರೀತಿಯ ಕೃಷಿ ಚಟುವಟಿಕೆಗಳಿಗೂ ಈ ಯೋಜನೆಯನ್ನು ವಿಸ್ತರಿಸಬೇಕು ಎಂದು ಆಗ್ರಹಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು