ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

ಕಾಂಗ್ರೆಸ್‌ ವತಿಯಿಂದ ಗಾಂಧಿ ಜಯಂತಿ ಸರಳ ಆಚರಣೆ
Last Updated 3 ಅಕ್ಟೋಬರ್ 2020, 3:37 IST
ಅಕ್ಷರ ಗಾತ್ರ

ಮೈಸೂರು: ಕಾಂಗ್ರೆಸ್ ಪಕ್ಷದ ವತಿಯಿಂದ ಕಾಂಗ್ರೆಸ್‌ ಭವನದ ಮುಂಭಾಗ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಸರಳವಾಗಿ ಆಚರಿಸಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಯಿತು.

ಗಾಂಧಿ ಜಯಂತಿ ದಿನದಂದೇ ‘ಕಿಸಾನ್‌–ಮಜ್ದೂರ್‌ ಬಚಾವೊ ದಿವಸ್’ ಆಚರಿಸಿ ಕೇಂದ್ರದ ರೈತ ಹಾಗೂ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಪಕ್ಷದ ಮುಖಂಡರು, ಕಾರ್ಯಕರ್ತರು ಧರಣಿ ನಡೆಸಿದರು.

ಮುಖಂಡ ಎಚ್‌.ಸಿ.ಮಹದೇವಪ್ಪ ಮಾತನಾಡಿ, ಒಬ್ಬ ಹೆಣ್ಣುಮಗಳು ಮಧ್ಯರಾತ್ರಿಯಲ್ಲಿ ಒಬ್ಬಳೇ ಹೋದರೂ ಅವಳಿಗೆ ಯಾವುದೇ ತೊಂದರೆ ಆಗಬಾರದು ಎಂದು ಗಾಂಧೀಜಿ ಬಯಸಿದ್ದರು. ಆದರೆ ಇಂದು ಉತ್ತರ ಪ್ರದೇಶದಲ್ಲಿ ಹೆಣ್ಣು ಮಕ್ಕಳು ಓಡಾಡಲು ಭಯಪಡುವ ವಾತಾವರಣ ಸೃಷ್ಠಿಯಾಗಿದೆ. ಈ ಮೂಲಕ ಗಾಂಧಿ ಆದರ್ಶಗಳನ್ನು ಬಿಜೆಪಿ ಸರ್ಕಾರ ಗಾಳಿಗೆ ತೂರಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅತ್ಯಾಚಾರ, ಭ್ರಷ್ಟಾಚಾರ, ಕೊಲೆ ಪ್ರಕರಣಗಳು ಹೆಚ್ಚುತ್ತಿವೆ. ರೈತರು ಮತ್ತು ಕಾರ್ಮಿಕ ವಿರೋಧಿ ನೀತಿಗಳು ಜಾರಿಯಾಗಿವೆ. ಗಾಂಧೀಜಿ ಅವರ ತತ್ವಗಳು ಕಣ್ಮರೆಯಾಗುತ್ತಿವೆ ಎಂದು ದೂರಿದರು.

ಸರ್ಕಾರದ ವಿರುದ್ಧ ಪ್ರತಿಭಟಿಸುವವರ ಧ್ವನಿ ಹತ್ತಿಕ್ಕುವ ಕೆಲಸ ಮಾಡಲಾಗುತ್ತಿದೆ. ಅತ್ಯಾಚಾರ ಸಂತ್ರಸ್ತೆಯ ಕುಟುಂಬದ ಸದಸ್ಯರ ಭೇಟಿಗೆ ಮುಂದಾದ ರಾಹುಲ್‌ ಗಾಂಧಿ ಅವರನ್ನು ಪೊಲೀಸರು ತಡೆದು ತಳ್ಳಿದ್ದಾರೆ. ನಾವು ಪ್ರಜಾಪ್ರಭುತ್ವ ದೇಶದಲ್ಲಿದ್ದೇವೆಯೋ ಅಥವಾ ಗೂಂಡಾ ರಾಜ್ಯದಲ್ಲಿದ್ದೇವೆಯೇ ಎಂದು ಪ್ರಶ್ನಿಸಿದರು.

ರಾಜ್ಯದಲ್ಲಿರುವ ಯಡಿಯೂರಪ್ಪ ಸರ್ಕಾರ ಕೂಡಾ ಜನವಿರೋಧಿ ಧೋರಣೆ ಅನುಸರಿಸುತ್ತಿದೆ. ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳ ಜಾರಿಗೆ ಸುಗ್ರೀವಾಜ್ಞೆ ತಂದಿದ್ದಾರೆ. ಶ್ರೀಮಂತರ ಉದ್ದಾರವೇ ಸರ್ಕಾರದ ಗುರಿ ಎಂದರು.

ಪುಷ್ಪಾರ್ಚನೆ: ಗಾಂಧೀಜಿ ಮತ್ತು ಶಾಸ್ತ್ರಿ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಲಾಯಿತು. ಇದೇ ವೇಳೆ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಪಕ್ಷದ ಹಕ್ಕೊತ್ತಾಯ ಸಲ್ಲಿಸಲಾಯಿತು.

ಶಾಸಕರಾದ ತನ್ವೀರ್ ಸೇಠ್, ಅನಿಲ್ ಕುಮಾರ್, ಮುಖಂಡರಾದ ಆರ್‌.ಧ್ರುವನಾರಾಯಣ, ವಾಸು, ಎಂ.ಕೆ.ಸೋಮಶೇಖರ್, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಬಿ.ಜೆ.ವಿಜಯ್ ಕುಮಾರ್, ನಗರಾಧ್ಯಕ್ಷ ಆರ್. ಮೂರ್ತಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT