ಶುಕ್ರವಾರ, ನವೆಂಬರ್ 27, 2020
19 °C
ಕರ್ನಾಟಕ ಸೇನಾ ಪಡೆ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಆಕ್ರೋಶ

ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರುದ್ಧ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವ ಸರ್ಕಾರದ ನಿರ್ಧಾರ ಖಂಡಿಸಿ ಕರ್ನಾಟಕ ಸೇನಾಪಡೆಯ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಬುಧವಾರ ಪ್ರತಿಭಟನೆ ನಡೆಸಿದರು.

ಗಡಿ ಜಿಲ್ಲೆಗಳಲ್ಲಿ ಎಂಇಎಸ್‌ ಕಾರ್ಯಕರ್ತರು ಕನ್ನಡಿಗರಿಗೆ ತೊಂದರೆ ಕೊಡುತ್ತಿದ್ದಾರೆ. ಬೆಳಗಾವಿಯ ಸಂಗೊಳ್ಳಿರಾಯಣ್ಣ ಪ್ರತಿಮೆ ವಿಚಾರದಲ್ಲೂ ಮರಾಠಿಗರು ಕನ್ನಡಿಗರನ್ನು ಕೆರಳಿಸಿದ್ದರು. ಹೀಗಿದ್ದರೂ, ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುತ್ತಿರುವುದಾದರೂ ಏಕೆ ಎಂದು ಅವರು ಪ್ರಶ್ನಿಸಿದರು.

ನಿತ್ಯ ಕಿರುಕುಳ ನೀಡುತ್ತಿರುವ ಮರಾಠಿಗರಿಗೆ ಪ್ರಾಧಿಕಾರ ರಚಿಸುವ ಮೂಲಕ ಇನ್ನಷ್ಟು ಶಕ್ತಿ ತುಂಬಿ ಕನ್ನಡಿಗರ ಮೇಲೆ ಮತ್ತಷ್ಟು ದೌರ್ಜನ್ಯ ಎಸಗಲಿ ಎಂಬುದು ಸರ್ಕಾರದ ಉದ್ದೇಶವಾಗಿರಬೇಕು ಎಂದು ಅವರು ಕಿಡಿಕಾರಿದರು.‌

ಕನ್ನಡ ರಾಜ್ಯೋತ್ಸವದ ದಿನ ಎಂಇಎಸ್‌ ಕಾರ್ಯಕರ್ತರು ಕರಾಳ ದಿನ ಆಚರಿಸುತ್ತಾರೆ. ಇಂತಹವರ ಅಭಿವೃದ್ಧಿಗಾಗಿ ಪ್ರಾಧಿಕಾರ ರಚಿಸಲು ಸರ್ಕಾರ ನಿರ್ಧಾರ ಕೈಗೊಂಡಿರುವುದು ನಾಚಿಕಗೇಡಿನ ಸಂಗತಿ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರವನ್ನು ನಿರ್ಲಕ್ಷಿಸಿ ಮರಾಠ ಭಾಷೆಯನ್ನು ಉದ್ದಾರ ಮಾಡಲು ಹೊರಟಿರುವುದು ಸರಿಯಲ್ಲ. ಸರ್ಕಾರ ತನ್ನ ನಿರ್ಧಾರದಿಂದ ಕೂಡಲೇ ಹಿಂದೆ ಸರಿಯಬೇಕು. ಇಲ್ಲದಿದ್ದರೆ, ಇನ್ನಷ್ಟು ತೀವ್ರವಾಗಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ತೇಜೇಶ್‌ಲೋಕೇಶ್‌ಗೌಡ, ಮುಖಂಡರಾದ ಶಾಂತರಾಜೇಅರಸ್, ವಿಜಯೇಂದ್ರ, ಕುಮಾರ್‌ಗೌಡ, ಬಂಗಾರಪ್ಪ, ಮೊಗಣ್ಣಾಚಾರ್ ಹಾಗೂ ಇತರರು ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.