ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು | ಮುಂದುವರಿದ ಪ್ರತಿಭಟನೆಗಳ ಸರಣಿ

ರೈತರು, ಅತಿಥಿ ಉಪನ್ಯಾಸಕರು, ಆಶಾ ಕಾರ್ಯಕರ್ತೆಯರು, ಟ್ರೈನಿ ಸ್ಟಾಫ್‌ ನರ್ಸ್‌ಗಳಿಂದ ನಿರಂತರ ಆಕ್ರೋಶ
Last Updated 21 ಜುಲೈ 2020, 13:27 IST
ಅಕ್ಷರ ಗಾತ್ರ

ಮೈಸೂರು: ನಗರದಲ್ಲಿ ಮಂಗಳವಾರವೂ ಪ್ರತಿಭಟನೆಗಳ ಸರಣಿ ಮುಂದುವರಿಯಿತು.

ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರುದ್ಧ ರೈತರು, ಸೇವಾ ಭದ್ರತೆಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರು, ಅಂಬೇಡ್ಕರ್ ನಿವಾಸದ ಮೇಲೆ ದಾಳಿ ಖಂಡಿಸಿ ನಾಗರಿಕ ಹಕ್ಕು ರಕ್ಷಣಾ ಸಮಿತಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರೆ, ವೇತನ ಹೆಚ್ಚಳಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಮತ್ತು ಟ್ರೈನಿ ಸ್ಟಾಫ್ ನರ್ಸ್‌ಗಳು ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದರು.

‘ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ’ ನೇತೃತ್ವದಲ್ಲಿ ರೈತರು ಭೂ ಸುಧಾರಣೆ ತಿದ್ದುಪಡಿ ಕಾಯ್ದೆಯ ಗೆಜೆಟ್ ಪ್ರತಿಯನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು. ಒಂದು ವೇಳೆ ಸರ್ಕಾರ ತಿದ್ದುಪಡಿಯನ್ನು ವಾಪಸ್ ಪಡೆಯದಿದ್ದರೆ ಆಗಸ್ಟ್ 15ರಂದು ಕರಾಳ ಸ್ವಾತಂತ್ರ್ಯ ದಿನ ಆಚರಿಸುವುದಾಗಿ ಎಚ್ಚರಿಕೆ ನೀಡಿದರು.

ಈ ವೇಳೆ ಮಾತನಾಡಿದ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ವಿದ್ಯಾಸಾಗರ ಟಿ.ರಾಮೇಗೌಡ, ‘ಬಂಡವಾಳಷಾಹಿಗಳ ಋಣ ತೀರಿಸಲೆಂದೇ ಈ ಕಾಯ್ದೆಗೆ ತಿದ್ದುಪಡಿ ತರಲಾಗಿದೆ ಎಂದು ಅನ್ನಿಸುವ ಮಟ್ಟಿಗೆ ತರಾತುರಿಯಲ್ಲಿ ಸುಗ್ರೀವಾಜ್ಞೆ ಹೊರಡಿಸಲಾಗಿದೆ. ಈ ಸಂಬಂಧ ಒಂದೇ ಒಂದು ಚರ್ಚೆಯಾಗಲಿ ನಡೆದಿಲ್ಲ’ ಎಂದು ಖಂಡಿಸಿದರು.

ಕಣ್ಣು, ಕಿವಿ ಇಲ್ಲದ ಸರ್ಕಾರ ಇದಾಗಿದೆ. ರೈತರ ಕೂಗು ಅಧಿಕಾರ ಹಿಡಿದವರಿಗೆ ಕೇಳುತ್ತಿಲ್ಲ. ರೈತರ ಹುತಾತ್ಮ ದಿನವಾದ ಜುಲೈ 21ರಂದು ಅದಕ್ಕೆಂದೇ ಪ್ರತಿಭಟನೆ ಹಮ್ಮಿಕೊಂಡು ಎಚ್ಚರಿಕೆ ನೀಡಲಾಗುತ್ತಿದೆ ಎಂದರು.

ಎಸ್.ರಘು ಹಿಮ್ಮಾವು, ಮಂಜುಕಿರಣ್, ಕಳ್ಳಿಪುರ ಮಹದೇವಸ್ವಾಮಿ ಸೇರಿದಂತೆ ಇನ್ನಿತರರು ಪ್ರತಿಭಟನೆಯಲ್ಲಿದ್ದರು.

ಅಂಬೇಡ್ಕರ್ ನಿವಾಸದ ಮೇಲಿನ ದಾಳಿ ಖಂಡಿಸಿ ಪ್ರತಿಭಟನೆ
ಡಾ.ಬಿ.ಆರ್.ಅಂಬೇಡ್ಕರ್ ಅವರ ನಿವಾಸದ ಮೇಲೆ ಈಚೆಗೆ ನಡೆದ ದಾಳಿ ಖಂಡಿಸಿ, ನಾಗರಿಕ ಹಕ್ಕು ರಕ್ಷಣಾ ಸಮಿತಿ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಕೂಡಲೇ ಆರೋಪಿಗಳನ್ನು ಪತ್ತೆ ಹಚ್ಚಿ, ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಒತ್ತಾಯಿಸಿದರು. ಅಯೋಧ್ಯೆಯಲ್ಲಿ ರಾಮಮಂದಿರಕ್ಕೆ ಬದಲಾಗಿ ಬುದ್ದ ಮಂದಿರ ನಿರ್ಮಿಸಬೇಕು ಎಂದೂ ಆಗ್ರಹಿಸಿದರು.

ನಾಗರಿಕ ಹಕ್ಕು ರಕ್ಷಣಾ ಸಮಿತಿ ಅಧ್ಯಕ್ಷ ಗೋವಿಂದರಾಜು ಮಾತನಾಡಿ, ‘ಅಂಬೇಡ್ಕರ್ ನಿವಾಸದ ಮೇಲಿನ ದಾಳಿಗೆ ದೇಶವೇ ತಲೆತಗ್ಗಿಸುವಂತಾಗಿದೆ. ಹಿಂದುತ್ವವಾದಿಗಳೇ ಈ ಕೃತ್ಯ ನಡೆಸಿರಬಹುದು ಎಂಬ ಅನುಮಾನ ಉಂಟಾಗಿರುವುದರಿಂದ ನಿಷ್ಪಕ್ಷಪಾತ ತನಿಖೆ ನಡೆಯಬೇಕು’ ಎಂದು ಒತ್ತಾಯಿಸಿದರು.

ಮುಖಂಡರಾದ ತಾರಾ, ಕೃಷ್ಣಮೂರ್ತಿ, ಕೆ.ಎಲ್.ಕೃಷ್ಣಕುಮಾರ್, ವಿ.ಮಣಿಯಮ್ಮ, ರವಿಕುಮಾರ್, ಪುಟ್ಟಮಾದು, ಪಾರ್ವತಮ್ಮ, ಇಂದ್ರಮ್ಮ, ಮಹಮ್ಮದ್ ಮುನಾವರ್, ಭೀಮರಾಜ್ ಸೇರಿದಂತೆ ಇತರರು ಪ್ರತಿಭಟನೆಯಲ್ಲಿದ್ದರು.

ಸೇವಾ ಭದ್ರತೆಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರ ಪ್ರತಿಭಟನೆ
ಸೇವಾ ಭದ್ರತೆ ಸೇರಿದಂತೆ ಇತರೆ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರಸಕ್ತ ತಿಂಗಳಿನ 3ನೇ ಮಂಗಳವಾರವೂ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿಯ ನೇತೃತ್ವದಲ್ಲಿ ಉಪನ್ಯಾಸಕರು ಪ್ರತಿಭಟನೆ ನಡೆಸಿದರು.

ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಅಧಿಸೂಚನೆ ರದ್ದುಗೊಳಿಸಿ ಅತಿಥಿ ಉಪನ್ಯಾಸಕರನ್ನು ಪರಿಗಣಿಸಬೇಕು, ಲಾಕ್‍ಡೌನ್ ಅವಧಿಯನ್ನು ಕರ್ತವ್ಯದ ಅವಧಿಯೆಂದು ಪರಿಗಣಿಸಿ ಪೂರ್ಣ ಪ್ರಮಾಣದ ವೇತನ ನೀಡಬೇಕು ಎಂದು ಆಗ್ರಹಿಸಿದರು.

‘ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅಧಿಸೂಚನೆ ಹೊರಡಿಸಿ ನಮಗೆ ಸಾಮೂಹಿಕ ನಿವೃತ್ತಿ ಘೋಷಿಸುತ್ತಿದೆ. ಇದರಿಂದ ನಮ್ಮ ಬದುಕು ಮೂರಾಬಟ್ಟೆಯಾಗುತ್ತದೆ’ ಎಂದು ಬೇಸರ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಮಹದೇವಯ್ಯ, ಉಪಾಧ್ಯಕ್ಷೆ ಡಾ.ಸುಮಿತ್ರಾ, ಡಾ.ಎನ್.ಮಹೇಶ್, ನಾಗಾರ್ಜುನ್, ಪ್ರಧಾನ ಕಾರ್ಯದರ್ಶಿ ಹನುಮಂತೇಶ್, ಡಾ.ಕೆ.ಪ್ರಕಾಶ್, ಡಾ.ಜೆ.ಮಹೇಶ್ ಸೇರಿದಂತೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT