ಬುಧವಾರ, ಜೂನ್ 3, 2020
27 °C

ಕ್ವಾರಂಟೈನ್ ಕಡ್ಡಾಯ, ಚೆಕ್‌ಪೋಸ್ಟ್‌ ಬಿಗಿ: ಎಸ್‌.ಟಿ.ಸೋಮಶೇಖರ್ ಹೇಳಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ‘ಹೊರ ರಾಜ್ಯದಿಂದ ಮೈಸೂರು ಜಿಲ್ಲೆ ಪ್ರವೇಶಿಸುವ ಪ್ರತಿಯೊಬ್ಬರನ್ನು ಕಡ್ಡಾಯವಾಗಿ ಕ್ವಾರಂಟೈನ್‌ಗೊಳಪಡಿಸಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಶುಕ್ರವಾರ ಇಲ್ಲಿ ತಿಳಿಸಿದರು.

ಚಾಮರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೆಬ್ಬಾಳದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಕೈಗೊಂಡಿರುವ ₹ 5 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ‘ಜಿಲ್ಲೆಗೆ ಬರುವ ಪ್ರತಿಯೊಬ್ಬರ ಮಾಹಿತಿ ಪಡೆದು ಕಡ್ಡಾಯವಾಗಿ ನಿಗಾ ವಹಿಸಲಾಗುವುದು’ ಎಂದು ಹೇಳಿದರು.

‘ಮೈಸೂರಿನೊಂದಿಗೆ ಗಡಿ ಹಂಚಿಕೊಂಡಿರುವ ಮಂಡ್ಯ ಜಿಲ್ಲೆಯಲ್ಲಿ ಕೋವಿಡ್–19 ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ರಾಜ್ಯ ಸರ್ಕಾರದ ಪ್ರಸಕ್ತ ಆದೇಶದಂತೆ ಅಂತರ ಜಿಲ್ಲಾ ಸಂಚಾರಕ್ಕೆ ಯಾವುದೇ ಅಡ್ಡಿಯಿಲ್ಲ. ಆದ್ದರಿಂದ ಮಂಡ್ಯ ಗಡಿಭಾಗದಲ್ಲಿನ ಚೆಕ್‌ಪೋಸ್ಟ್‌ ಸಕ್ರಿಯಗೊಳಿಸಿ, ಎಲ್ಲರ ತಪಾಸಣೆ ಅಧಿಕಾರವನ್ನು ನೀಡುವಂತೆ ಮುಖ್ಯಮಂತ್ರಿಗೆ ಮನವಿ ಮಾಡಿಕೊಳ್ಳುವೆ’ ಎಂದು ಸೋಮಶೇಖರ್ ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

₹ 14 ಸಾವಿರ ಕೋಟಿ ಸಾಲ: ‘ರೈತರಿಗೆ ಅನುಕೂಲವಾಗುವಂತೆ ಏ.1ರಿಂದಲೇ ಕೃಷಿ ಸಾಲ ವಿತರಿಸಲಾಗುತ್ತಿದೆ. ಇಲ್ಲಿಯವರೆಗೂ 1.35 ಲಕ್ಷ ಜನರಿಗೆ ಸಾಲ ನೀಡಲಾಗಿದೆ. ಈ ಮಳೆಗಾಲದ ಅವಧಿಯಲ್ಲೇ ರಾಜ್ಯದ ಎಲ್ಲ ಭಾಗದ ರೈತರಿಗೆ ₹ 14 ಸಾವಿರ ಕೋಟಿ ಸಾಲ ನೀಡುವ ಗುರಿ ಹೊಂದಲಾಗಿದೆ’ ಎಂದು ಸಚಿವರು ತಿಳಿಸಿದರು.

ಶಾಸಕ ಎಲ್.ನಾಗೇಂದ್ರ ಮಾತನಾಡಿ, ‘ಅನೇಕ ದಿನಗಳಿಂದ ನನೆಗುದಿಗೆ ಬಿದ್ದಿದ್ದ ಹೆಬ್ಬಾಳು ಮುಖ್ಯ ರಸ್ತೆಯನ್ನು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ₹ 5 ಕೋಟಿ ವೆಚ್ಚದಲ್ಲಿ ಸರ್ಕಾರದ ಅನುಮತಿ ಪಡೆದು ಕಾಮಗಾರಿಗೆ ಗುದ್ದಲಿ ಪೂಜೆ ಮಾಡಲಾಗಿದೆ. ಅನೇಕ ಜನರಿಗೆ ಸಮಸ್ಯೆ ಸೃಷ್ಟಿಸಿದ್ದ ಈ ರಸ್ತೆಯನ್ನು ಅಚ್ಚುಕಟ್ಟಾಗಿ ನಿರ್ಮಿಸಲಾಗುವುದು’ ಎಂದು ಹೇಳಿದರು.

ಮುಡಾ ಆಯುಕ್ತ ನಟೇಶ್, ಮಹಾನಗರ ಪಾಲಿಕೆ ಆಯುಕ್ತ ಗುರುದತ್ ಹೆಗಡೆ ಹಾಜರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು