ಭಾನುವಾರ, ಸೆಪ್ಟೆಂಬರ್ 19, 2021
23 °C

ರಸ್ತೆ ದುರಸ್ತಿಗೆ ಆಗ್ರಹಿಸಿ ರೈತರ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ಇಲ್ಲಿನ ಕೆಆರ್‌ಎಸ್‌ ಸಾಗರಕಟ್ಟೆ ರಸ್ತೆಯನ್ನು ದುರಸ್ತಿ ಮಾಡಬೇಕು ಎಂದು ಆಗ್ರಹಿಸಿ ರೈತರು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ನೇತೃತ್ವದಲ್ಲಿ ಸೋಮವಾರ ಇಲ್ಲಿನ ತಾಲ್ಲೂಕು ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಿದರು.‌

ಕಳೆದ ವರ್ಷ ನವೆಂಬರ್ 14ರಂದು ಇದೇ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸಲಾಗಿತ್ತು. ಆದರೆ, ಇದುವರೆಗೂ ರಸ್ತೆ ಅಭಿವೃದ್ಧಿಯಾಗಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.‌

ಕೃಷ್ಣರಾಜಸಾಗರದ ರೈಲು ನಿಲ್ದಾಣದಿಂದ ಸಾಗರಕಟ್ಟೆಯವರೆಗೆ ಇರುವ ಟರ್ಕಿ ಟ್ರಾವೆಲ್ಸ್ ರಸ್ತೆ ತೀರಾ ಹದಗೆಟ್ಟಿದೆ. ಲಾರಿ, ಬಸ್‌ಗಳು ಇರಲಿ ದ್ವಿಚಕ್ರ ವಾಹನಗಳೂ ಸಂಚರಿಸದಂತಹ ಸ್ಥಿತಿ ಇದೆ. ಈ ರಸ್ತೆಯನ್ನು ಅಗಲೀಕರಣ ಮಾಡಬೇಕು ಮತ್ತು ದುರಸ್ತಿಗೊಳಿಸಬೇಕು ಎಂದು ಅವರು ಆಗ್ರಹಿಸಿದರು.

ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿ, ‘ಕಳೆದ ವರ್ಷ ಜನವರಿಯಲ್ಲಿಯೇ ಈ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸೇರಿಸಲಾಯಿತು. ಅಲ್ಲಿಂದ ಇಲ್ಲಿಯವರೆಗೂ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿಲ್ಲ’ ಎಂದು ಕಿಡಿಕಾರಿದರು.

ಈ ರಸ್ತೆಯ ಹಳ್ಳ ಗುಂಡಿಗಳಿಂದಾಗಿ ಬಸ್‌ಗಳು ಬರುತ್ತಿಲ್ಲ. ವಾಹನ ಸವಾರರು ಬಿದ್ದು ಗಾಯಗೊಂಡಿದ್ದಾರೆ. ಸುತ್ತಮುತ್ತಲ ಗ್ರಾಮಸ್ಥರಿಗೆ ಇದರಿಂದ ಅನಾನುಕೂಲವಾಗಿದೆ ಎಂದರು.

ಇನ್ನು ಒಂದು ತಿಂಗಳಿನ ಒಳಗೆ ಕಾಮಗಾರಿ ಆರಂಭವಾಗದೇ ಹೋದರೆ ರಾಷ್ಟ್ರೀಯ ಹೆದ್ದಾರಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅವರ ಕಚೇರಿಗೆ ಬೀಗ ಹಾಕುವುದಾಗಿ ಎಚ್ಚರಿಕೆ ನೀಡಿದರು.

ಬಳಿಕ ಸ್ಥಳಕ್ಕೆ ಬಂದ ರಾಷ್ಟ್ರೀಯ ಹೆದ್ದಾರಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಜಗದೀಶ್, ‘ನಾಳೆಯೇ ರಸ್ತೆ ಅಭಿವೃದ್ಧಿಗೆ ಬೇಕಾದ ಪರಿಕರಗಳನ್ನು ಸ್ಥಳಕ್ಕೆ ಸಾಗಿಸಲಾಗುವುದು. ಮೇ 27ರ ಬಳಿಕ ಕಾಮಗಾರಿ ಆರಂಭಿಸಲಾಗುವುದು’ ಎಂದು ಭರವಸೆ ನೀಡಿದ ಬಳಿಕ ರೈತರು ಪ್ರತಿಭಟನೆಯಲ್ಲಿ ವಾಪಸ್ ಪಡೆದರು.

ರಾಜ್ಯ ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಜಿಲ್ಲಾ ಘಟಕದ ಅಧ್ಯಕ್ಷ ಹೊಸೂರು ಕುಮಾರ್, ಮೈಸೂರು ತಾಲ್ಲೂಕು ಅಧ್ಯಕ್ಷ ಪಿ.ಮರಂಕಯ್ಯ, ಪ್ರಧಾನ ಕಾರ್ಯದರ್ಶಿ ಆನಂದೂರು ಪ್ರಭಾಕರ್, ಮುಖಂಡರಾದ ನಾಗನಹಳ್ಳಿ ವಿಜಯೇಂದ್ರ, ಮಂಡಕಳ್ಳಿ ಮಹೇಶ್, ದಿನೇಶ್, ಚಂದ್ರಶೇಖರ್ ಮೊದಲಾದವರು ಪ್ರತಿಭಟನೆಯಲ್ಲಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.