ಮೈಸೂರು: ಮೈತ್ರಿ ಸರ್ಕಾರ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರ ವಿರುದ್ಧ ಅಕ್ರಮ ಭೂ ಒತ್ತುವರಿ, ಸರ್ಕಾರಿ ಅಧಿಕಾರ ದುರ್ಬಳಕೆ ಆರೋಪದಡಿ ಮೈಸೂರಿನ ನ್ಯಾಯಾಲಯದಲ್ಲಿ ದಾಖಲಾಗಿದ್ದ ಪ್ರಕರಣ ಇದೀಗ, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆಯಾಗಿದೆ.
ಪ್ರಕರಣವನ್ನು ವರ್ಗಾವಣೆ ಮಾಡಿ ಮೈಸೂರಿನ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ಯಶವಂತ ಕುಮಾರ್ ಆದೇಶ ಹೊರಡಿಸಿದ್ದಾರೆ.
ಈ ಪ್ರಕರಣದ ಸಂಬಂಧ ನಗರದ ಲಕ್ಷ್ಮಿಪುರಂ ಪೊಲೀಸ್ ಠಾಣೆಯು 2018ರ ನ.3ರಂದು ನ್ಯಾಯಾಲಯಕ್ಕೆ ‘ಬಿ’ ರಿಪೋರ್ಟ್ ಸಲ್ಲಿಸಿತ್ತು. ಆದರೆ, ದೂರುದಾರ, ಆರ್‌ಟಿಐ ಕಾರ್ಯಕರ್ತ ಗಂಗರಾಜು ಅವರು ಮೇಲ್ಮನವಿ ಸಲ್ಲಿದ್ದರು. ನ್ಯಾಯಾಧೀಶರು ಅಗತ್ಯ ದಾಖಲೆಗಳ ಪರಿಶೀಲನೆಯೊಂದಿಗೆ ವಿಚಾರಣೆ ನಡೆಸಿದ್ದರು. ಸಿದ್ದರಾಮಯ್ಯ ಅವರು, ಹಾಲಿ ಶಾಸಕರಾಗಿರುವ ಹಿನ್ನೆಲೆಯಲ್ಲಿ ಮೇ 10ರಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ ಆದೇಶ ಮಾಡಿದ್ದಾರೆ. ಪ್ರಕರಣದ ವಿಚಾರಣೆ ಜೂನ್ 10ರಂದು ನಡೆಯಲಿದೆ.
ಏನಿದು ಪ್ರಕರಣ?: 1981ರಲ್ಲಿ ನಗರಾಭಿವೃದ್ಧಿ ವಿಶ್ವಸ್ಥ ಮಂಡಳಿ (ಸಿಐಟಿಬಿ) ವತಿಯಿಂದ ವಿಜಯನಗರ 2ನೇ ಹಂತದ ಬಡಾವಣೆ ನಿರ್ಮಾಣಕ್ಕೆ ಹಿನಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ 535 ಎಕರೆ ಪ್ರದೇಶವನ್ನು ವಶಪಡಿಸಿಕೊಳ್ಳಲಾಗಿತ್ತು. ಬಡಾವಣೆ ರಚಿಸಿ ನಿವೇಶನ ಹಂಚಿಕೆ ಬಳಿಕ ಆಗ ಹಿನಕಲ್ ಗ್ರಾ.ಪಂ ಅಧ್ಯಕ್ಷರಾಗಿದ್ದ ಪಾಪಣ್ಣ ಅವರು 30 ಗುಂಟೆ ಜಮೀನನ್ನು ಕೈ ಬಿಡುವಂತೆ ಕೋರಿ ಸಿದ್ದರಾಮಯ್ಯ ಅವರು ಉಪ ಮುಖ್ಯಮಂತ್ರಿಯಾಗಿದ್ದಾಗ ‘ಸಿಐಟಿಬಿ’ಗೆ ಅರ್ಜಿ ಸಲ್ಲಿಸಿದ್ದರು. ಅಧಿಕಾರಿಗಳು 30 ಗುಂಟೆ ಜಾಗವನ್ನು ಡಿ ನೋಟಿಫೈ ಮಾಡಿ ನಿರಾಕ್ಷೇಪಣಾ ಪತ್ರ ನೀಡಿದ್ದರು.
ನಂತರ ಈ ಜಮೀನನ್ನು ಕುಟುಂಬದವರು ಹಂಚಿಕೆ ಮಾಡಿಕೊಂಡಿದ್ದರು. ಪಾಪಣ್ಣ ಅವರ ಜಮೀನನ್ನು ಕೊಂಡುಕೊಂಡಿದ್ದ ಸಿದ್ದರಾಮಯ್ಯ ಮನೆ ನಿರ್ಮಿಸಿದ್ದರು. ಪಾಪಣ್ಣ ಅವರ ಚಿಕ್ಕಮ್ಮ ಸಾಕಮ್ಮ ಅವರ ಪಾಲಿಗೆ ಬಂದಿದ್ದ ಜಮೀನನ್ನೂ ಸೇರಿಸಿ ಸಿದ್ದರಾಮಯ್ಯ ಮನೆ ನಿರ್ಮಿಸಿಕೊಂಡಿದ್ದಾರೆ ಎಂದು ಸಾಕಮ್ಮ ಆರೋಪಿಸಿ ದೂರು ಸಲ್ಲಿಸಿದ್ದರು. ಇದು ವಿವಾದ ಪಡೆದುಕೊಳ್ಳುತ್ತಿದ್ದಂತೆ 2003ರಲ್ಲಿ ಸಿದ್ದರಾಮಯ್ಯ ಮನೆ ಮಾರಾಟ ಮಾಡಿದ್ದರು.
2017ರ ಡಿಸೆಂಬರ್‌ನಲ್ಲಿ ನಿವೇಶನ ನೀಡುವಂತೆ ಸಾಕಮ್ಮ ಅವರ ಪರವಾಗಿ ಕುಟುಂಬದವರು ಅರ್ಜಿ ಸಲ್ಲಿಸಿದ್ದರು. ಅರ್ಜಿ ಪುರಸ್ಕರಿಸಿದ್ದ ‘ಮುಡಾ’ ಅಂದಿನ ಅಧ್ಯಕ್ಷ ಡಿ.ಧ್ರುವಕುಮಾರ್, ಸಾಮಾನ್ಯ ಸಭೆಯಲ್ಲಿ ಅರ್ಜಿ ಮಂಡಿಸಿ, ಮತ್ತೊಂದು ನಿವೇಶನ ನೀಡಲು ಅನುಮೋದನೆ ಪಡೆದಿದ್ದರು. ಆದರೆ, ಇದುವರೆಗೆ ನಿವೇಶನ ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ಆರ್‌ಟಿಐ ಕಾರ್ಯಕರ್ತ ಗಂಗರಾಜು ಅವರು, ಸಿದ್ದರಾಮಯ್ಯ ಸೇರಿದಂತೆ ಸಿಐಟಿಬಿ ಅಧ್ಯಕ್ಷ ಸಿ.ಬಸವೇಗೌಡ, ‘ಮುಡಾ’ ಮಾಜಿ ಅಧ್ಯಕ್ಷ ಧ್ರುವಕುಮಾರ್, ಹಾಲಿ ಆಯುಕ್ತ ಪಿ.ಎಸ್.ಕಾಂತರಾಜು ಅವರ ವಿರುದ್ಧ ನ್ಯಾಯಾಲಯದಲ್ಲಿ ದೂರು ನೀಡಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.