ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಗೊಳ್ಳಿರಾಯಣ್ಣ ಪ್ರತಿಮೆ ಸ್ಥಾಪನೆಗೆ ಒತ್ತಾಯ

ಬೇಡಿಕೆ ಈಡೇರದೇ ಹೋದರೆ ಮತ್ತಷ್ಟು ಉಗ್ರಹ ಹೋರಾಟದ ಎಚ್ಚರಿಕೆ
Last Updated 26 ಆಗಸ್ಟ್ 2020, 9:30 IST
ಅಕ್ಷರ ಗಾತ್ರ

ಮೈಸೂರು: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಯನ್ನು ಬೆಳಗಾವಿಯ ಪೀರನವಾಡಿಯಲ್ಲಿ ಮತ್ತೆ ಸ್ಥಾಪಿಸಬೇಕು ಎಂದು ಆಗ್ರಹಿಸಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಕಾರ್ಯಕರ್ತರು ಬುಧವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಕರ್ನಾಟಕ ಪ್ರದೇಶ ಕುರುಬರ ಸಂಘ, ದಲಿತ ಸಂಘಟನೆಗಳ ಒಕ್ಕೂಟ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ, ಕನ್ನಡಪರ ಸಂಘಟನೆಗಳ ಒಕ್ಕೂಟ, ಕರ್ನಾಟಕ ಪ್ರಾಂತ್ಯ ರೈತ ಹಾಗೂ ಕಾರ್ಮಿಕರ ರಕ್ಷಣಾ ವೇದಿಕೆಯ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾದರು.

ಬೆಳಗಾವಿಯ ಪೀರನವಾಡಿಯಲ್ಲಿ ಸಂಗೊಳ್ಳಿರಾಯಣ್ಣ ಅವರ ಪ್ರತಿಮೆಗೆ ಸಂಬಂಧಿಸಿದಂತೆ ಪೊಲೀಸರು ಕನ್ನಡಪರ ಹೋರಾಟಗಾರರ ಮೇಲೆ ದೌರ್ಜನ್ಯ ಎಸಗಿದ್ದಾರೆ. ಇದು ಸರಿಯಲ್ಲ ಎಂದು ಅವರು ಖಂಡಿಸಿದರು.

ರಾಯಣ್ಣ ಅವರ ಪ್ರತಿಮೆಯನ್ನು ಬೆಳಗಾವಿ ಜಿಲ್ಲಾಡಳಿತ ಅಪಮಾನಗೊಳಿಸಿದೆ. ಇನ್ನು ಮುಂದೆ ಇಂತಹ ಘಟನೆಗಳು ನಡೆದರೆ ಅದಕ್ಕೆ ಜಿಲ್ಲಾಡಳಿತವನ್ನೇ ಹೊಣೆ ಮಾಡಬೇಕು ಎಂದು ಅವರು ಒತ್ತಾಯಿಸಿದರು.

ಸರ್ಕಾರ ಕೂಡಲೇ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಯನ್ನು ಅದೇ ಸ್ಥಳದಲ್ಲಿ ಮರು ಸ್ಥಾಪನೆಗೊಳಿಸಬೇಕು. ಇಲ್ಲದೇ ಹೋದಲ್ಲಿ ಉಗ್ರ ಪ್ರತಿಭಟನೆ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ಕರ್ನಾಟಕ ಪ್ರದೇಶ ಕುರುಬರ ಸಂಘದ ಕಾರ್ಯಾಧ್ಯಕ್ಷ ಬಿ.ಸುಬ್ರಹ್ಮಣ್ಯ, ಪಾಲಿಕೆಯ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಜೆ.ಗೋಪಿ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್.ಶಿವರಾಮು, ದಲಿತ ಸಂಘಟನೆಗಳ ಒಕ್ಕೂಟದ ಸಂಚಾಲಕ ಪಿ.ರಾಜು, ಕಾಂಗ್ರೆಸ್ ಮುಖಂಡರಾದ ವಾಸು, ಎಂ.ಕೆ.ಸೋಮಶೇಖರ್, ಕನ್ನಡ ಕಲಾಕೂಟದ ಅಧ್ಯಕ್ಷ ಎಂ.ಚಂದ್ರಶೇಖರ್, ಕನ್ನಡಪರ ಹೋರಾಟಗಾರ ಮೂಗೂರು ನಂಜುಂಡಸ್ವಾಮಿ ಸೇರಿದಂತೆ ಹಲವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT