ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀರು ಪೂರೈಕೆ: ವಿಳಂಬ ಧೋರಣೆ ಸಲ್ಲ

ಅಧಿಕಾರಿಗಳಿಗೆ ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ ಎಚ್ಚರಿಕೆ
Last Updated 20 ಜೂನ್ 2019, 19:25 IST
ಅಕ್ಷರ ಗಾತ್ರ

ಮೈಸೂರು: ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರಿಗೆ ಕೊರತೆಯಾಗದಂತೆ ಎಚ್ಚರವಹಿಸಬೇಕು. ಈ ವಿಷಯದಲ್ಲಿ ನಿರ್ಲಕ್ಷ್ಯ ವಹಿಸಿದರೆ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ ಅವರು ಅಧಿಕಾರಿಗಳಿಗೆ ಎಚ್ಚರಿಸಿದರು.

ಪ್ರಕೃತಿ ವಿಕೋಪ ಪರಿಹಾರ ಕ್ರಮ ಹಾಗೂ ಕಂದಾಯ ಇಲಾಖೆ ವಿಷಯಗಳ ಕುರಿತು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಮೈಸೂರು ನಗರ ಹಾಗೂ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕೆಲವೆಡೆ ಕುಡಿಯುವ ನೀರಿಗೆ ಸಮಸ್ಯೆಯಿದೆ ಎಂಬುದನ್ನು ಅರಿತ ಸಚಿವರು ತಕ್ಷಣವೇ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಅವರು ಹಿನಕಲ್‌, ಹೂಟಗಳ್ಳಿ ಮತ್ತು ಚಾಮುಂಡಿಬೆಟ್ಟದಲ್ಲಿರುವ ಮನೆಗಳಿಗೆ ಕುಡಿಯುವ ನೀರು ಸಮರ್ಪಕವಾಗಿ ಪೂರೈಕೆಯಾಗುತ್ತಿಲ್ಲ ಎಂದು ಸಭೆಯಲ್ಲಿ ಹೇಳಿದರು.‌

ಇದಕ್ಕೆ ಪ್ರತಿಕ್ರಿಯಿಸಿದ ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾದ ಶಿಲ್ಪಾ ನಾಗ್‌, ಅಮೃತ್‌ ಯೋಜನೆಯಡಿ ಕೈಗೊಂಡಿರುವ ಕುಡಿಯುವ ನೀರು ಕಾಮಗಾರಿ ನಿಧಾನಗತಿಯಲ್ಲಿ ನಡೆಯುತ್ತಿದೆ. ಕಾಮಗಾರಿ ಪೂರ್ಣಗೊಂಡ ಬಳಿಕ ನೀರಿನ ಸಮಸ್ಯೆ ಬಗೆಹರಿಯಲಿದೆ. ಅಲ್ಲಿಯವರೆಗೆ ಟ್ಯಾಂಕರ್‌ಗಳಲ್ಲಿ ನೀರು ಪೂರೈಸಲಾಗುತ್ತದೆ ಎಂದರು.

ಚಾಮುಂಡಿಬೆಟ್ಟದಲ್ಲಿ ನೀರಿನ ಸಮಸ್ಯೆ ಬಗೆಹರಿಸಲು ಎರಡು ವರ್ಷಗಳಿಂದ ಕಾಮಗಾರಿ ನಡೆಯುತ್ತಿದೆ. ಇನ್ನೂ ಪೂರ್ಣಗೊಂಡಿಲ್ಲ ಎಂದು ಉಸ್ತುವಾರಿ ಸಚಿವರು ದೇಶಪಾಂಡೆ ಅವರ ಗಮನಕ್ಕೆ ತಂದರು.

ಚಾಮುಂಡಿಬೆಟ್ಟಕ್ಕೆ ಪೈಪ್‌ಲೈನ್‌ ಅಳವಡಿಸಲು ಅರಣ್ಯ ಇಲಾಖೆಯ ಅನುಮತಿ ದೊರೆತಿಲ್ಲ. ಅನುಮತಿ ಕೋರಿ ಆರು ತಿಂಗಳ ಹಿಂದೆಯೇ ಪತ್ರ ಬರೆಯಲಾಗಿತ್ತು. ಇದರಿಂದ ಕಾಮಗಾರಿ ವಿಳಂಬವಾಗಿದೆ ಎಂದು ಜಲಮಂಡಳಿ ಎಂಜಿನಿಯರ್‌ ತಿಳಿಸಿದರು.

ಡಿಸಿಎಫ್‌ಗೆ ಎಚ್ಚರಿಕೆ: ನೀರಾವರಿ ಪೈಪ್‌ಲೈನ್‌ ಅಳವಡಿಸಲು ಅರಣ್ಯ ಇಲಾಖೆ ವಿಳಂಬ ಮಾಡಿರುವುದಕ್ಕೆ ಸಚಿವ ದೇಶಪಾಂಡೆ ಅವರು ಡಿಸಿಎಫ್‌ ಅವರನ್ನು ತರಾಟೆಗೆ ತೆಗೆದುಕೊಂಡರು. ‘ಚಾಮುಂಡಿಬೆಟ್ಟದಲ್ಲಿ ನಿನ್ನ ಮನೆ ಇದ್ದಿದ್ದರೆ ಏನು ಮಾಡ್ತಾ ಇದ್ದಿ. ಅನುಮತಿ ಕೊಡಲು ಆರು ತಿಂಗಳು ಬೇಕೇ’ ಎಂದು ಪ್ರಶ್ನಿಸಿದರು.

ನೀರಾವರಿ ಪೈಪ್‌ಲೈನ್‌ ಅಳವಡಿಸುವ ಕಾಮಗಾರಿಗಳಿಗೆ ಅನುಮತಿ ನೀಡಲು ವಿಳಂಬ ಮಾಡಿದರೆ ಮುಂದಿನ ದಿನಗಳಲ್ಲಿ ಅರಣ್ಯ ಇಲಾಖೆಯವರನ್ನು ಕಂದಾಯ ಇಲಾಖೆಗೆ ಸೇರಿದ ಭೂಮಿಯಲ್ಲಿ ನಡೆದಾಡದಂತೆ ನೋಡಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ಚಾಮುಂಡಿಬೆಟ್ಟದಲ್ಲಿ ನೀರಿನ ಸಮಸ್ಯೆ ಬಗೆಹರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು. ಅಲ್ಲಿಯವರೆಗೆ ಟ್ಯಾಂಕರ್‌ಗಳಲ್ಲಿ ನೀರು ಪೂರೈಸಬೇಕು ಎಂದು ಅಧಿಕಾರಿಗಳಿಗೆ ಹೇಳಿದರು.

ರಾಷ್ಟ್ರೀಯ ವಿಪತ್ತು ನಿರ್ವಹಣೆ ನಿಧಿ (ಎನ್‌ಡಿಆರ್‌ಎಫ್‌) ಮತ್ತು ರಾಜ್ಯ ಪ್ರಕೃತಿ ವಿಕೋಪ ಪರಿಹಾರ ನಿಧಿ (ಎಸ್‌ಡಿಆರ್‌ಎಫ್‌) ಹಣವನ್ನು ಕಾಲುವೆ, ಚರಂಡಿಗಳ ಸ್ವಚ್ಛತೆ, ಕೆರೆ ಒತ್ತುವರಿ ತೆರವು ಕಾರ್ಯಾಚರಣೆಗಳಿಗೆ ಬಳಸುವಂತೆ ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ಮತ್ತು ಜಿಲ್ಲಾ ಪಂಚಾಯಿತಿ ಸಿಇಒ ಕೆ.ಜ್ಯೋತಿ ಅವರಿಗೆ ಸೂಚಿಸಿದರು.

‘ಹೆಚ್ಚು ನೀರು ಬರುವ ಖಾಸಗಿ ಬೋರ್‌ವೆಲ್‌ಗಳನ್ನು ಗುರುತಿಸಿ ಅವುಗಳ ಮಾಲೀಕರ ಜತೆ ನೀರು ಖರೀದಿಗೆ ಒಪ್ಪಂದ ಮಾಡಿಕೊಳ್ಳುವಂತೆ ಈ ಹಿಂದೆಯೇ ಸೂಚಿಸಿದ್ದೆ. ಆದರೆ ನಾನು ಹೇಳಿದ ಕೆಲಸವನ್ನು ಅಧಿಕಾರಿಗಳು ಮಾಡಿಲ್ಲ. ಬರ ಪರಿಸ್ಥಿತಿ ಎದುರಾದ ಬಳಿಕ ಪರದಾಡುವ ಬದಲು ಸಾಕಷ್ಟು ಮುನ್ನವೇ ಸಿದ್ಧತೆ ನಡೆಸಬೇಕು’ ಎಂದರು.

ಜಿ.ಟಿ.ದೇವೇಗೌಡ ಗರಂ: ಸಭೆಯಲ್ಲಿ ಜಿ.ಟಿ.ದೇವೇಗೌಡ ಅವರೂ ಅಧಿಕಾರಿಗಳ ವಿರುದ್ಧ ಹರಿಹಾಯ್ದರು. ‘ನಿಮ್ಮಂತವರಿಂದ ಚಾಮುಂಡೇಶ್ವರಿ ಕ್ಷೇತ್ರ ಉದ್ಧಾರವಾದ ಹಾಗೆ’ ಎಂದು ತರಾಟೆಗೆ ತೆಗೆದುಕೊಂಡರು.

ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸಿರುವ ಫಲಾನುಭವಿಗಳಿಗೆ ಅನುದಾನದ ಹಣ ನೀಡದಿದ್ದರೆ ಅಮಾನತು ಮಾಡಲಾಗುವುದು ಎಂದು ಎಚ್ಚರಿಕೆ ಕೊಟ್ಟರು.

ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್, ಶಾಸಕ ಹರ್ಷವರ್ಧನ್, ಮೇಯರ್‌ ಪುಷ್ಪಲತಾ ಜಗನ್ನಾಥ್‌, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಪರಿಮಳಾ ಶ್ಯಾಂ, ಮುಡಾ ಅಧ್ಯಕ್ಷ ಎಚ್‌.ಎನ್‌.ವಿಜಯ್ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT