ಶುಕ್ರವಾರ, ಅಕ್ಟೋಬರ್ 30, 2020
19 °C
ಕೆ.ಆರ್‌.ಆಸ್ಪತ್ರೆ ಶವಾಗಾರದ ಎದುರು ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ

ಮೈಸೂರು: ಮಹಿಳೆ ಸಾವಿಗೆ ವೈದ್ಯರ ನಿರ್ಲಕ್ಷ್ಯ ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ಆಶಾ ಕಾರ್ಯಕರ್ತೆಯಾಗಿ ಕೆಲಸ ನಿರ್ವಹಿಸುತ್ತಿದ್ದ ನಂಜನಗೂಡು ತಾಲ್ಲೂಕಿನ ದೇವೀರಮ್ಮಹಳ್ಳಿಯ ಪುಟ್ಟ ಮಣಿ (38) ಎಂಬವರ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಕುಟುಂಬದ ಸದಸ್ಯರು ಮತ್ತು ದಲಿತ ಸಂಘರ್ಷ ಸಮಿತಿ ಸದಸ್ಯರು ಸೋಮವಾರ ಪ್ರತಿಭಟನೆ ನಡೆಸಿದರು.

ಕೆ.ಆರ್‌.ಆಸ್ಪತ್ರೆಯ ಶವಾಗಾರದ ಮುಂದೆ ಸೇರಿದ ಪ್ರತಿಭಟನಕಾರರು, ಮಹಿಳೆಯ ಸಾವಿಗೆ ಕಾರಣರಾದ ವೈದ್ಯರನ್ನು ಸೇವೆಯಿಂದ ಅಮಾನತು ಮಾಡುವಂತೆ ಒತ್ತಾಯಿಸಿದರು.

‘ಮಹಿಳೆ ಪೈಲ್ಸ್‌ ಚಿಕಿತ್ಸೆಗಾಗಿ ಅ.1 ರಂದುಕೆ.ಆರ್‌.ಆಸ್ಪತ್ರೆಗೆ ಬಂದಿದ್ದರು. ಆದರೆ ಹೊರರೋಗಿಗಳ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ವೈದ್ಯರೊಬ್ಬರು ಕೆ.ಆರ್‌.ಆಸ್ಪತ್ರೆಯಲ್ಲಿ ದಾಖಲಿಸಿಕೊಳ್ಳದೆ ಶಸ್ತ್ರಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಅ.2 ರಂದು ಶಸ್ತ್ರಚಿಕಿತ್ಸೆ ನಡೆದಿದೆ. ಮನೆಗೆ ಮರಳಿದ ಬಳಿಕ ತೀವ್ರ ರಕ್ತಸ್ರಾವದಿಂದ ಅ.4 ರಂದು ಕೆ.ಆರ್‌.ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಹಣ ಮಾಡುವ ಆಸೆಯಿಂದ ಮಹಿಳೆಯನ್ನು ಖಾಸಗಿ ಆಸ್ಪತ್ರೆಗೆ ಕಳುಹಿಸಿದ ವೈದ್ಯರಿಂದಾಗಿಯೇ ಸಾವು ಸಂಭವಿಸಿದೆ’ ಎಂದು ಆರೋಪಿಸಿದರು.

ವೈದ್ಯರನ್ನು ಅಮಾನತು ಮಾಡಿ ಘಟನೆ ಬಗ್ಗೆ ತನಿಖೆ ಮಾಡಬೇಕು. ಪುಟ್ಟಮಣಿ ಕುಟುಂಬಕ್ಕೆ ಪರಿಹಾರ ಒದಗಿಸಬೇಕು ಎಂದು ಕೆ.ಆರ್‌.ಆಸ್ಪತ್ರೆಯ ಡೀನ್‌ ಅವರಿಗೆ ಮನವಿ ಮಾಡಿದ್ದಾರೆ.

ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಚೋರನಹಳ್ಳಿ ಶಿವಣ್ಣ, ಜಿಲ್ಲಾ ಸಂಘಟನಾ ಸಂಚಾಲಕ ಕೆ.ವಿ.ದೇವೇಂದ್ರ, ಆಲತ್ತೂರು ಶಿವರಾಜ್, ಶಿವಮೂರ್ತಿ ಶಂಕರಪುರ, ಮಹೇಶ್‌ ವರುಣ ಪಾಲ್ಗೊಂಡಿದ್ದರು.

ಘಟನೆ ಬಗ್ಗೆ ಮಾಹಿತಿ ಕಲೆಹಾಕಿ ಕ್ರಮ: ಆರೋಪಗಳಿಗೆ ಪ್ರತಿಕ್ರಿಯಿಸಿದ ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಡೀನ್‌ ಡಾ.ಸಿ.ಪಿ.ನಂಜರಾಜ್, ‘ಘಟನೆಯ ಬಗ್ಗೆ ಸಮಗ್ರ ಮಾಹಿತಿ ಕಲೆಹಾಕಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ’ ಎಂದು ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.