ಸಾಲಿಗ್ರಾಮ (ಮೈಸೂರು): ತಾಲ್ಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 15 ಮಂದಿ ಅಸ್ವಸ್ಥಗೊಂಡಿದ್ದು, ಒಬ್ಬರು ಮೃತಪಟ್ಟಿದ್ದಾರೆ.
ಗ್ರಾಮದ ನಿವಾಸಿ ಗೋವಿಂದೇಗೌಡ (65) ಮೃತರು. ಅವರು ಮಂಗಳವಾರ ರಾತ್ರಿ ಊಟ ಸೇವಿಸಿ ಮಲಗಿದ್ದು, ತಡರಾತ್ರಿ ವಾಂತಿ, ಭೇದಿ ಕಾಣಿಸಿಕೊಂಡಿದೆ. ಬುಧವಾರ ಬೆಳಿಗ್ಗೆ ಅವರನ್ನು ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. 'ಅಸ್ತಮ ಹಾಗೂ ಹೃದಯ ಸಂಬಂಧಿ ಕಾಯಿಲೆಯಿಂದ ಮೃತಪಟ್ಟಿದ್ದಾರೆ' ಎಂದು ವೈದ್ಯರ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಅದೇ ದಿನ ಗ್ರಾಮದ ಇತರ ಜನರಿಗೂ ಆರೋಗ್ಯ ಸಮಸ್ಯೆ ಉಂಟಾಗಿದೆ. 'ಕಲುಷಿತ ನೀರು ಪೂರೈಕೆಯಾದ್ದರಿಂದ ವಾಂತಿ ಭೇದಿ ಕಾಣಿಸಿಕೊಂಡಿದೆ' ಎಂದು ಸಾರ್ವಜನಿಕರು ದೂರಿದ್ದಾರೆ.
'ಗ್ರಾಮದ ಸರ್ಕಾರಿ ಶಾಲೆಯಲ್ಲಿ ತುರ್ತು ಚಿಕಿತ್ಸಾ ಘಟಕ ತೆರೆಯಲಾಗಿದ್ದು, 25ಕ್ಕೂ ಹೆಚ್ಚು ಹಾಸಿಗೆಯ ವ್ಯವಸ್ಥೆ ಮಾಡಲಾಗಿದೆ. ಸಮುದಾಯ ಆರೋಗ್ಯ ಕೇಂದ್ರದಲ್ಲೂ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ' ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ನಟರಾಜ್ 'ಪ್ರಜಾವಾಣಿ'ಗೆ ತಿಳಿಸಿದರು.