ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ಅಭಿವೃದ್ಧಿ: ಅಂಬೇಡ್ಕರ್‌ ದೃಷ್ಟಿಕೋನ’ ಅಂತರರಾಷ್ಟ್ರೀಯ ಸಮ್ಮೇಳನ ಮಾರ್ಚ್‌ 2ರಿಂದ

Published 29 ಫೆಬ್ರುವರಿ 2024, 10:15 IST
Last Updated 29 ಫೆಬ್ರುವರಿ 2024, 10:15 IST
ಅಕ್ಷರ ಗಾತ್ರ

ಮೈಸೂರು: ಇಲ್ಲಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ(ಕೆಎಸ್‌ಒಯು)ದ ಡಾ.ಬಿ.ಆರ್. ಅಂಬೇಡ್ಕರ್‌ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದಿಂದ ‘ಡಾ.ಬಿ.ಆರ್‌. ಅಂಬೇಡ್ಕರ್‌ರವರ ಅಭಿವೃದ್ಧಿ ದೃಷ್ಟಿಕೋನಗಳು ಹಾಗೂ ಸಮಕಾಲೀನ ಜಗತ್ತು’ ಎಂಬ ವಿಷಯದ ಕುರಿತು ಅಂತರರಾಷ್ಟ್ರೀಯ ಸಮ್ಮೇಳನವನ್ನು ಮಾರ್ಚ್‌ 2 ಹಾಗೂ 3ರಂದು ವಿವಿಯ ಘಟಿಕೋತ್ಸವ ಭವನದಲ್ಲಿ ಆಯೋಜಿಸಲಾಗಿದೆ.

‘ಮಾರ್ಚ್‌ 2ರಂದು ಬೆಳಿಗ್ಗೆ 10.30ಕ್ಕೆ ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸುವರು. ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ಹಾಗೂ ಸಮಾಜ ಕಲ್ಯಾಣ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಆಕ್ಸ್‌ಫರ್ಡ್‌ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಸಂಗ್ ವಾಂಖೇಡೆ ಆಶಯ ಭಾಷಣ ಮಾಡುವರು’ ಎಂದು ಕುಲಪತಿ ಪ್ರೊ.ಶರಣಪ್ಪ ವಿ.ಹಲಸೆ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ದೇಶ–ವಿದೇಶಗಳ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಸಂಪನ್ಮೂಲ ವ್ಯಕ್ತಿಗಳು ಹಾಗೂ ವಿದ್ವಾಂಸರು ಪಾಲ್ಗೊಳ್ಳಲಿದ್ದಾರೆ. ಅಂಬೇಡ್ಕರ್‌ ಅವರ ಚಿಂತನೆಗಳ ಕುರಿತು ಪ್ರಬಂಧ ಮಂಡಿಸಲಿದ್ದಾರೆ. ಸಂಶೋಧನಾರ್ಥಿಗಳು, ಪ್ರಗತಿಪರ ಚಿಂತಕರು, ವಿವಿಧ ಸಂಘಟನೆಗಳ ಮುಖಂಡರು ಮತ್ತು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ’ ಎಂದು ಮಾಹಿತಿ ನೀಡಿದರು.

‘ಮಾರ್ಚ್‌ 3ರಂದು ಸಂಜೆ 4ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ರಾಜ್ಯಪಾಲ ಥಾವರಚಂದ್ ಗೆಹಲೋತ್ ಅಧ್ಯಕ್ಷತೆ ವಹಿಸುವರು. ಸಣ್ಣ ಕೈಗಾರಿಕಾ ಸಚಿವ ಶರಣಬಸಪ್ಪ ದರ್ಶನಾಪುರ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು. ನವದೆಹಲಿಯ ಜವಾಹರಲಾಲ್‌ ನೆಹರೂ ವಿಶ್ವವಿದ್ಯಾಲಯದ ಸಾಮಾಜಿಕ ಹೊರಗಿಡುವಿಕೆ ಮತ್ತು ಅಂತರ್ಗತ ನೀತಿಯ ಅಧ್ಯಯನ ಕೇಂದ್ರದ ಅಧ್ಯಕ್ಷ ಪ್ರೊ.ಯಗತಿ ಚಿನ್ನರಾವ್ ಸಮಾರೋಪ ಭಾಷಣ ಮಾಡಲಿದ್ದಾರೆ’ ಎಂದು ತಿಳಿಸಿದರು.

‘ಹೋದ ವರ್ಷ 43ಸಾವಿರ ಅಭ್ಯರ್ಥಿಗಳು ವಿವಿಧ ಕೋರ್ಸ್‌ಗಳಿಗೆ ಪ್ರವೇಶ ಪಡೆದಿದ್ದರು. ಈ ವರ್ಷ ಪ್ರಕ್ರಿಯೆ ಆರಂಭವಾಗಿದ್ದು, ಈಗಾಗಲೇ ಐದು ಸಾವಿರಕ್ಕೂ ಹೆಚ್ಚು ಮಂದಿ ಪ್ರವೇಶ ತೆಗೆದುಕೊಂಡಿದ್ದಾರೆ. ಮಾರ್ಚ್‌ ಅಂತ್ಯದವರೆಗೂ ಅವಕಾಶವಿದೆ. ವಿವಿಧ 51 ಕಾರ್ಯಕ್ರಮಗಳಿಗೆ ಪ್ರವೇಶ ಪಡೆಯಬಹುದಾಗಿದೆ. ನಾನು ಬಂದ ಮೇಲೆ ಯಾವುದೇ ಗೊಂದಲಕ್ಕೆ ಆಸ್ಪದ ಇಲ್ಲದಂತೆ ಆಡಳಿತ ನಿರ್ವಹಣೆ ನಡೆಯುತ್ತಿದೆ’ ಎಂದು ಹೇಳಿದರು.

ಕುಲಸಚಿವರಾದ ಪ್ರೊ.ಕೆ.ಎಲ್.ಎನ್. ಮೂರ್ತಿ, ಪ್ರೊ.ಕೆ.ಬಿ. ಪ್ರವೀಣ, ಡಾ.ಬಿ.ಆರ್. ಅಂಬೇಡ್ಕರ್‌ ಅಧ್ಯಯನ ಪೀಠದ ನಿರ್ದೇಶಕ ಶಿವಕುಮಾರಸ್ವಾಮಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT