ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟದಲ್ಲಿ ಸಿದ್ಧತೆಗೆ ಸೂಚನೆ

Published 21 ಜೂನ್ 2024, 12:51 IST
Last Updated 21 ಜೂನ್ 2024, 12:51 IST
ಅಕ್ಷರ ಗಾತ್ರ

ಮೈಸೂರು: ‘ಇಲ್ಲಿನ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇವಸ್ಥಾನದಲ್ಲಿ 2024ನೇ ಸಾಲಿನ ಆಷಾಢ ಶುಕ್ರವಾರ ಮತ್ತು ದೇವಿಯ ಜನ್ಮೋತ್ಸವ (ವರ್ಧಂತಿ) ಮೊದಲಾದ ಧಾರ್ಮಿಕ ಕಾರ್ಯಕ್ರಮಗಳಿಗೆ ಆಗಮಿಸುವ ಭಕ್ತರಿಗೆ ಯಾವುದೇ ತೊಂದರೆ ಆಗದಂತೆ ಅಗತ್ಯ ಕ್ರಮ ವಹಿಸಬೇಕು’ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಸೂಚಿಸಿದರು.

ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಜುಲೈ 12, ಜುಲೈ 19, ಜುಲೈ 26ರಂದು ಕ್ರಮವಾಗಿ ಮೊದಲನೇ, ಎರಡನೇ ಹಾಗೂ ಮೂರನೇ ಆಷಾಢ ಶುಕ್ರವಾರ ಬರಲಿದೆ. ಜುಲೈ 27ರಂದು (ಶನಿವಾರ) ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ ನಡೆಯಲಿದೆ. ಆ.2ರಂದು ಕೊನೆಯ ಆಷಾಢ ಶುಕ್ರವಾರಕ್ಕೆ ಹೆಚ್ಚಿನ ಭಕ್ತರು ಬರುವ ನಿರೀಕ್ಷೆ ಇದೆ. ಇದಕ್ಕಾಗಿ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಬೇಕು’ ಎಂದು ನಿರ್ದೇಶನ ನೀಡಿದರು.

‘ಜುಲೈ ಮೊದಲ ವಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜನಪ್ರತಿನಿಧಿಗಳ ಜೊತೆ ಪೂರ್ವ ಸಿದ್ಧತೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಲಾಗುವುದು’ ಎಂದು ತಿಳಿಸಿದರು.

ನಿಗಾ ವಹಿಸಬೇಕು: ‘ಚಾಮುಂಡಿ ಬೆಟ್ಟದಲ್ಲಿ ದಾಸೋಹ ಭವನದಲ್ಲಿ ನಡೆಯುವ ಪ್ರಸಾದ ವಿತರಣಾ ಕಾರ್ಯಕ್ರಮದ ಜೊತೆಗೆ ಭಕ್ತರು ಸಹ ಅಲ್ಲಲ್ಲಿ ಪ್ರಸಾದ ವಿತರಣೆ ಮಾಡುತ್ತಾರೆ. ಆಹಾರದ ಸುರಕ್ಷತೆಗೆ ಗಮನ ಕೊಡಬೇಕು. ಇತ್ತ ಆಹಾರ ಸುರಕ್ಷತಾ ಅಧಿಕಾರಿಗಳು ನಿಗಾ ವಹಿಸಬೇಕು’ ಎಂದು ಹೇಳಿದರು.

‘ಭಕ್ತರಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ವಾಹನಗಳ ಪಾರ್ಕಿಂಗ್ ಅನ್ನು ಕ್ರಮಬದ್ಧವಾಗಿ ಮಾಡಿಸಬೇಕು. ಚಾಮುಂಡಿ ಬೆಟ್ಟದಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗಿದ್ದು, ಇದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಬೆಟ್ಟಕ್ಕೆ ಬರುವವರು ಪ್ಲಾಸ್ಟಿಕ್‌ಗಳನ್ನು ತರುವಂತಿಲ್ಲ’ ಎಂದು ತಿಳಿಸಿದರು.

‘ದೇವಸ್ಥಾನದ ಆವರಣದಲ್ಲಿ ಸ್ವಚ್ಛತೆ ಕಾಪಾಡಬೇಕು. ಮೊಬೈಲ್ ಶೌಚಾಲಯ ವ್ಯವಸ್ಥೆ ಮಾಡಬೇಕು. ಚಾಮುಂಡಿ ಬೆಟ್ಟದಲ್ಲಿ ಬರುವ ಅಂಗಡಿಗಲ್ಲಿಯೂ ಪ್ಲಾಸ್ಟಿಕ್ ಬಳಕೆ ಮಾಡುವಂತಿಲ್ಲ. ಸಿಸಿಟಿವಿ ಕ್ಯಾಮೆರಾಗಳ ವ್ಯವಸ್ಥೆ ಸಮರ್ಪಕವಾಗಿ ಕಲ್ಪಿಸಬೇಕು. ಬೆಟ್ಟದಲ್ಲಿ ಕುಡಿಯುವ ನೀರಿನ ಆರ್‌ಒ ಪ್ಲಾಂಟ್ ವ್ಯವಸ್ಥೆ ಮಾಡಬೇಕು. ಇದರಿಂದಾಗಿ, ಪ್ಲಾಸ್ಟಿಕ್‌ ಬಾಟಲಿಗಳಲ್ಲಿ ನೀರು ತರುವುದನ್ನು ತಡೆಯಬಹುದಾಗಿದೆ’ ಎಂದರು.

‘ಬೆಟ್ಟದಲ್ಲಿ ಯಾವುದೇ ಪ್ಲೆಕ್ಸ್ ಅಥವಾ ಬ್ಯಾನರ್‌ಗಳನ್ನು ಅಳವಡಿಸುವಂತಿಲ್ಲ. ಪಾಸ್ ವ್ಯವಸ್ಥೆ ಇರುವುದಿಲ್ಲ. ಎಲ್ಲರಿಗೂ ದೇವಿಯ ದರ್ಶನ ಸುಗಮವಾಗಿ ಆಗುವಂತೆ ಕ್ರಮ ವಹಿಸಬೇಕು. ಪೊಲೀಸ್ ಇಲಾಖೆಯವರು ಭದ್ರತೆಗೆ ತಯಾರಿ ಮಾಡಿಕೊಳ್ಳಬೇಕು’ ಎಂದು ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಂ. ಗಾಯಿತ್ರಿ, ಡಿಸಿಪಿಗಳಾದ ಮುತ್ತುರಾಜ್, ಜಾಹ್ನವಿ, ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವರಾಜು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT