ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

’ಸ್ತ್ರೀ ಸ್ವಾವಲಂಬನೆಗೆ ಮೋದಿ ಆದ್ಯತೆ‘

ಬಿಜೆಪಿ ಮಹಿಳಾ ಮೋರ್ಚಾ ಸಭೆಯಲ್ಲಿ ಮಾಳವಿಕಾ
Published 7 ಮಾರ್ಚ್ 2024, 5:45 IST
Last Updated 7 ಮಾರ್ಚ್ 2024, 5:45 IST
ಅಕ್ಷರ ಗಾತ್ರ

ಮೈಸೂರು: ‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಹಲವು ಯೋಜನೆಗಳು ದೇಶದ ಮಹಿಳೆಯರು ಸ್ವಾವಲಂಬಿಯಾಗಿ ಸ್ವಾಭಿಮಾನದಿಂದ ಬದುಕು ಕಟ್ಟಿಕೊಳ್ಳಲು ಸಹಕಾರಿಯಾಗಿವೆ’ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆ, ಚಿತ್ರ ನಟಿ ಮಾಳವಿಕಾ ಅವಿನಾಶ್ ತಿಳಿಸಿದರು.

ಬಿಜೆಪಿ ಮಹಿಳಾ ಮೋರ್ಚಾದಿಂದ ಇಲ್ಲಿನ ಸತ್ಯಪ್ರಮೋದ ಕಲ್ಯಾಣಮಂಟಪದಲ್ಲಿ ಬುಧವಾರ ಆಯೋಜಿಸಿದ್ದ ‘ನಾರಿ ಶಕ್ತಿ ವಂದನಾ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ದೇಶಕ್ಕೆ ಸ್ವಾತಂತ್ರ್ಯ ಬಂದು ದಶಕಗಳು ಉರುಳಿದ ಬಳಿಕವೂ ಮಹಿಳೆಯರು ಶೌಚಕ್ಕಾಗಿ ಕತ್ತಲಾಗುವುದನ್ನು ಕಾಯಬೇಕಾದ ಪರಿಸ್ಥಿತಿ ಇತ್ತು. ಮನೆಗಳಲ್ಲಿ ಶೌಚಾಲಯವಿಲ್ಲದೆ ಅವರು ಪರದಾಡುತ್ತಿದ್ದರು. ಮುಜುಗರವನ್ನು ಅನುಭವಿಸುತ್ತಿದ್ದರು. ಆದರೆ, ಮೋದಿ ಸರ್ಕಾರ ಪ್ರತಿ ಮನೆಗೂ ಶೌಚಾಲಯ ನಿರ್ಮಿಸಿಕೊಟ್ಟಿದೆ. ಮಹಿಳೆಯರು ಸೌದೆಯಿಂದ ಅಡುಗೆ ಮಾಡುವುದು ತಪ್ಪಿದೆ. ಅಡುಗೆ ಅನಿಲ ಸಿಲಿಂಡರ್‌ ದೊರೆಯುವಂತೆ ನಮ್ಮ ಸರ್ಕಾರ ಮಾಡಿದೆ. ಇದರಿಂದ ಮಹಿಳೆಯರು ಆರೋಗ್ಯ ಕಾಪಾಡಿಕೊಳ್ಳುವುದು ಸಾಧ್ಯವಾಗಿದೆ’ ಎಂದರು.

‘ದೇಶದ ಪ್ರತಿಯೊಬ್ಬರಿಗೂ ಆರೋಗ್ಯ ಸೇವೆ ಸಿಗಲೆಂಬ ಕಾರಣದಿಂದ ಆಯುಷ್ಮಾನ್‌ ಆರೋಗ್ಯ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿದೆ. ಇಡೀ ವಿಶ್ವದಲ್ಲಿಯೇ ಅತಿ ದೊಡ್ಡ ಆರೋಗ್ಯ ವಿಮೆ ಸೌಲಭ್ಯವನ್ನು ಹೊಂದಿದ ದೇಶ ನಮ್ಮದಾಗಿದೆ. ಈ ಯೋಜನೆಯಡಿ ₹ 5 ಲಕ್ಷದವರೆಗೆ ಚಿಕಿತ್ಸೆಯನ್ನು ಪಡೆಯಬಹುದಾಗಿದೆ’ ಎಂದು ಹೇಳಿದರು.

‘ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ತಾಲಿಬಾನ್ ಸಂಸ್ಕೃತಿಯನ್ನು ಕಾಣುತ್ತಿದ್ದೇವೆ. ಈ ಸರ್ಕಾರದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲವಾಗಿದೆ’ ಎಂದು ದೂರಿದರು.

ಬಿಜೆಪಿ ನಗರ ಘಟಕದ ಅಧ್ಯಕ್ಷ ಎಲ್.ನಾಗೇಂದ್ರ, ಚಾಮರಾಜ ಕ್ಷೇತ್ರದ ಅಧ್ಯಕ್ಷ ದಿನೇಶ್ ಗೌಡ, ನಗರ ಘಟಕದ ಪ್ರಧಾನ ಕಾರ್ಯದರ್ಶಿ ಕೇಬಲ್ ಮಹೇಶ್, ಮಾಧ್ಯಮ ಸಂಚಾಲಕ ಮಹೇಶ್ ರಾಜೇ ಅರಸ್, ಮಹಿಳಾ ಮೋರ್ಚಾದ ಅಧ್ಯಕ್ಷೆ ರೇಣುಕಾ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT