ಮೈಸೂರು: ‘ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ–ಜೆಡಿಎಸ್ ಮೈತ್ರಿಪಕ್ಷಗಳ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುವುದು. ಈ ವಿಷಯದಲ್ಲಿ ಯಾವುದೇ ಗೊಂದಲವಿಲ್ಲ’ ಎಂದು ಜೆಡಿಎಸ್ ಕಾರ್ಯಾಧ್ಯಕ್ಷ ಸಾ.ರಾ.ಮಹೇಶ್ ಹೇಳಿದರು.
ಇಲ್ಲಿ ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿದ ಅವರು, ‘ಆ ಕ್ಷೇತ್ರದ ಉಪ ಚುನಾವಣೆ ಸಂಬಂಧ ಅಭ್ಯರ್ಥಿ ಆಯ್ಕೆ ಇನ್ನೂ ಆಗಿಲ್ಲ. ಕ್ಷೇತ್ರವನ್ನು ಎಚ್.ಡಿ. ಕುಮಾರಸ್ವಾಮಿ ಪ್ರತಿನಿಧಿಸುತ್ತಿದ್ದರು. ಈಗ ಅವರು ಸಂಸದರಾಗಿ ಗೆದ್ದು ಕೇಂದ್ರದಲ್ಲಿ ಸಚಿವರಾಗಿದ್ದಾರೆ. ಅಲ್ಲಿಂದ ಅವರ ಪುತ್ರ, ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುವಾರಸ್ವಾಮಿ ಕಣಕ್ಕಿಳಿಸಬೇಕು ಎಂಬ ಒತ್ತಾಯವಿದೆ’ ಎಂದರು.
‘ಇಂದಿನ ಆರ್ಥಿಕ ಪರಿಸ್ಥಿತಿಯನ್ನು ನೋಡಿದರೆ ರಾಜ್ಯ ಸರ್ಕಾರವು ಪಂಚ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸುವುದು ಅನುಮಾನವಾಗಿದೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿರುವವರೆಗಷ್ಟೆ ಅವು ಮುಂದುವರಿಯಬಹುದು’ ಎಂದು ಮಾರ್ಮಿಕವಾಗಿ ಹೇಳಿದರು.