ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.1ರಿಂದ ಮೂರು ದಿನಗಳವರೆಗೆ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಲೋಕಸಭೆ ಚುನಾವಣೆ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ಮುಖಂಡರ ಸಭೆಗಳನ್ನು ನಡೆಸಿ, ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ ಹಾಗೂ ಚಾಮರಾಜನಗರ ಕ್ಷೇತ್ರದ ಅಭ್ಯರ್ಥಿ ಸುನೀಲ್ ಬೋಸ್ ಗೆಲುವಿಗೆ ರಣತಂತ್ರ ರೂಪಿಸಲಿದ್ದಾರೆ.
ಏ.1ರಂದು ಬೆಳಿಗ್ಗೆ 10.45ಕ್ಕೆ ವಿಶೇಷ ವಿಮಾನದಲ್ಲಿ ಮಂಡಕಳ್ಳಿಗೆ ಬಂದಿಳಿಯುವ ಅವರು, ಬೆಳಿಗ್ಗೆ 11.30ಕ್ಕೆ ಮೈಸೂರು ತಾಲ್ಲೂಕಿನ ಬಿಳಿಗೆರೆಯಲ್ಲಿ ಹಾಗೂ ಮಧ್ಯಾಹ್ನ 3ಕ್ಕೆ ತಿ.ನರಸೀಪುರದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 6ಕ್ಕೆ ನಗರದಲ್ಲಿ ಬಿಷಪ್ ಹೌಸ್ಗೆ ಭೇಟಿ ನೀಡಿದ ಬಳಿಕ ವಾಸ್ತವ್ಯ ಹೂಡಲಿದ್ದಾರೆ.
ಏ.2ರಂದು ಬೆಳಿಗ್ಗೆ 10ಕ್ಕೆ ನಗರದ ಶಂಕರಮಠಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 11ಕ್ಕೆ ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಂಜೆ 4ಕ್ಕೆ ನಜರ್ಬಾದ್ನ ಜೆ.ಪಿ. ಫಾರ್ಚೂನ್ ಹೋಟೆಲ್ನಲ್ಲಿ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರ ಸಭೆ ನಡೆಸಲಿದ್ದಾರೆ.
ಏ.3ರಂದು ಬೆಳಿಗ್ಗೆ 9ಕ್ಕೆ ಸುತ್ತೂರು ಮಠಕ್ಕೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 11ಕ್ಕೆ ಚಾಮರಾಜನಗರದಲ್ಲಿ ಸುನೀಲ್ ಬೋಸ್ ಜೊತೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 1ರ ಸುಮಾರಿಗೆ ಮೈಸೂರಿಗೆ ಆಗಮಿಸಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ ಅವರ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 6ಕ್ಕೆ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.