ಮೈಸೂರು: ‘ಪಕ್ಷದ ನಿಧಿ ಸಂಗ್ರಹದ ಹೆಸರಿನಲ್ಲಿ ಚುನಾವಣಾ ಬಾಂಡ್‌ಗಳ ಮೂಲಕ ರಾಷ್ಟ್ರೀಯ, ಬಹುರಾಷ್ಟ್ರೀಯ, ಒಂದಕ್ಕಿಂತ ಹೆಚ್ಚು ದೇಶಗಳಲ್ಲಿ ಕಾರ್ಯನಿರ್ವಹಿಸುವ ಕಂಪನಿಗಳಿಂದ ಹಣ ವಸೂಲಿ ಮಾಡಲಾಗುತ್ತಿದೆ’ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್ ದಾಖಲಿಸಲು ನ್ಯಾಯಾಲಯ ಆದೇಶಿಸಿದೆ. ಅವರು ರಾಜೀನಾಮೆ ಕೊಡುತ್ತಾರೆಯೇ?’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಳಿದರು.
ಇಲ್ಲಿ ಶುಕ್ರವಾರ ರಾತ್ರಿ ಕೆಡಿಪಿ ಸಭೆಯ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಚುನಾವಣಾ ಬಾಂಡ್ ಮೂಲಕ ಅವರು ಸುಲಿಗೆ ಮಾಡುತ್ತಿದ್ದರು. ಎಫ್‌ಐಆರ್ ಆದ ಮೇಲೆ ಅವರು ರಾಜೀನಾಮೆ ಕೊಡ್ತಾರಾ?’ ಎಂದರು.
‘ನನ್ನ ಪ್ರಕರಣವನ್ನು 17ಎ ಪ್ರಕಾರ ತನಿಖೆ ನಡೆಸಿ, ವರದಿ ಕೊಡಿ ಎಂದು ನ್ಯಾಯಾಲಯ ಹೇಳಿದೆ. ಅದರ ಪ್ರಕಾರ ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಎಚ್.ಡಿ. ಕುಮಾರಸ್ವಾಮಿ ಅವರು ಮೊದಲು ನಿರ್ಮಲಾ ಸೀತಾರಾಮನ್ ಅವರನ್ನು ಇಳಿಸಲಿ. ಆ ಮೇಲೆ ಅವರು ನನ್ನನ್ನು ಕೇಳಲಿ. ಚುನಾವಣಾ ಬಾಂಡ್ ದುರುಪಯೋಗ ಮಾಡಿರರುವುದರಿಂದಾಗಿ ಪ್ರಧಾನಿ ನರೇಂದ್ರ ಮೋದಿ ಅವರೂ ರಾಜೀನಾಮೆ ನೀಡಬೇಕು’ ಎಂದು ಒತ್ತಾಯಿಸಿದರು.
ಸಚಿವರಾದ ಡಾ.ಎಚ್.ಸಿ. ಮಹದೇವಪ್ಪ, ಕೆ.ವೆಂಕಟೇಶ್, ವಿಧಾನಪರಿಷತ್ ಸದಸ್ಯ ಡಾ.ಡಿ. ತಿಮ್ಮಯ್ಯ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್ ಇದ್ದರು.