ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಾರ್ಚ್‌ 15ಕ್ಕೆ ಮೈಸೂರಲ್ಲಿ ‘ಗ್ಯಾರಂಟಿ’ ಯೋಜನೆ ಸಮಾವೇಶ

Published 11 ಮಾರ್ಚ್ 2024, 13:01 IST
Last Updated 11 ಮಾರ್ಚ್ 2024, 13:01 IST
ಅಕ್ಷರ ಗಾತ್ರ

ಮೈಸೂರು: ‘ರಾಜ್ಯ ಸರ್ಕಾರದಿಂದ ಜಾರಿಗೊಳಿಸಲಾಗಿರುವ ‘ಪಂಚ ಗ್ಯಾರಂಟಿ’ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಮಾರ್ಚ್ 15ರಂದು ಮಧ್ಯಾಹ್ನ 12ಕ್ಕೆ ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದೆ’ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ತಿಳಿಸಿದರು.

ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಗ್ಯಾರಂಟಿ ಯೋಜನೆಗಳ ಸಮಾವೇಶದ ಸಿದ್ಧತೆ ಮತ್ತು ಬರ ನಿರ್ವಹಣೆ ಪರಿಶೀಲನಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

‘ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದು, ಜಿಲ್ಲೆಯ ಜನಪ್ರತಿನಿಧಿಗಳು ಪಾಲ್ಗೊಳ್ಳುವರು. ನಾವು ವಾಗ್ದಾನ ನೀಡಿದಂತೆ ಐದು ಗ್ಯಾರಂಟಿಗಳನ್ನೂ ಜಾರಿಗೊಳಿಸಿದ್ದು ಕೋಟ್ಯಂತರ ಮಂದಿ ಫಲಾನುಭವಿಗಳಾಗಿದ್ದಾರೆ. ಸಮಾವೇಶದಲ್ಲಿ 50 ಸಾವಿರ ಫಲಾನುಭವಿಗಳು ಭಾಗಿಯಾಗಲಿದ್ದು, ಅವರಿಗೆ ಕುಡಿಯುವ ನೀರು, ಊಟ ಮೊದಲಾದ ವ್ಯವಸ್ಥೆಯನ್ನು ಸಮರ್ಪಕವಾಗಿ ಮಾಡಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

‘ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯಲ್ಲಿ 6.73 ಲಕ್ಷ, ಗೃಹ ಜ್ಯೋತಿಯಡಿ 9 ಲಕ್ಷ, ಯುವನಿಧಿಯಲ್ಲಿ 783, ಅನ್ನಭಾಗ್ಯ ಯೋಜನೆಯಲ್ಲಿ 22.76 ಲಕ್ಷ ಫಲಾನುಭವಿಗಳಿದ್ದಾರೆ. 7.10 ಲಕ್ಷ ಪಡಿತರ ಚೀಟಿಗಳಿವೆ’ ಎಂದರು.

ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಮಾತನಾಡಿ, ‘256 ಗ್ರಾಮ ಪಂಚಾಯಿತಿಗಳು ಹಾಗೂ 16 ಸ್ಥಳೀಯ ಸಂಸ್ಥೆಗಳಿಂದ 50 ಸಾವಿರ ಫಲಾನುಭವಿಗಳು ಸಮಾವೇಶಕ್ಕೆ ಆಗಮಿಸುತಿದ್ದು, 500 ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ವಾಹನಗಳಿಗೆ ಸೂಕ್ತ ಪಾರ್ಕಿಂಗ್ ವ್ಯವಸ್ಥೆ, ವೇದಿಕೆ, ಆಹಾರದ ವ್ಯವಸ್ಥೆಯ ಜವಾಬ್ದಾರಿಯನ್ನು ಅಧಿಕಾರಿಗಳು ಸಮರ್ಪಕವಾಗಿ ನಿರ್ವಹಿಸಬೇಕು’ ಎಂದು ತಿಳಿಸಿದರು.

‘ತೊಂದರೆ ಆಗದಂತೆ ನೋಡಿಕೊಳ್ಳಿ‘

‘ಯಾವುದೇ ಜಲಮೂಲಗಳ ನೀರನ್ನು ಕುಡಿಯುವ ಉದ್ದೇಶಕ್ಕೆ ಹೊರತುಪಡಿಸಿ ಬೇರೆ ಉದ್ದೇಶಗಳಿಗೆ ಬಳಸಬಾರದು. ಕುಡಿಯುವ ನೀರಿನ ಸಮಸ್ಯಾತ್ಮಕ ಹಳ್ಳಿಗಳನ್ನು ಪಟ್ಟಿ ಮಾಡಿಕೊಂಡು ಪರಿಸ್ಥಿತಿ ನಿಭಾಯಿಸಲು ಜಿಲ್ಲಾ ಹಾಗೂ ತಾಲ್ಲೂಕು ಆಡಳಿತ ಸಜ್ಜಾಗಿರಬೇಕು’ ಎಂದು ಸಚಿವ ಮಹದೇವಪ್ಪ ಸೂಚಿಸಿದರು.

‘ಹೊಸದಾಗಿ ಕೊಳವೆಬಾವಿ ತೋಡಿಸುವುದಕ್ಕಿಂತ ಇರುವ ಕೊಳವೆ ಬಾವಿಗಳನ್ನು ದುರಸ್ತಿಪಡಿಸಿ ಮೋಟಾರ್, ಪಂಪ್ ಅಳವಡಿಸಬೇಕು. ಈ ಸಂದರ್ಭದಲ್ಲಿ ನೀರು ಪೋಲಾಗದಂತೆ ನೋಡಿಕೊಳ್ಳಬೇಕು. ಅವಶ್ಯ ಬಿದ್ದರೆ ಖಾಸಗಿಯವರ ಕೊಳವೆಬಾವಿಗಳನ್ನು ಬಾಡಿಗೆಗೆ ಪಡೆದುಕೊಂಡು ಜನರಿಗೆ ನೀರು ಪೂರೈಕೆಗೆ ಆದ್ಯತೆ ನೀಡಬೇಕು’ ಎಂದು ತಾಕೀತು ಮಾಡಿದರು.

‘ನದಿ ಪಾತ್ರದಲ್ಲಿ ಪಂಪ್‌ಸೆಟ್‌ಗಳನ್ನು ತೆರವುಗೊಳಿಸಲಾಗಿದೆ. ಕುಡಿಯುವ ನೀರನ್ನು ಕೃಷಿಗೆ ಬಳಸದಂತೆ ಜಾಗೃತಿ ಮೂಡಿಸಲಾಗಿದೆ. ಅಗತ್ಯಬಿದ್ದರೆ ಹಾರಂಗಿ ಹಾಗೂ ಹೇಮಾವತಿ ಜಲಾಶಯದಿಂದಲೂ ನೀರು ಬಳಸಿಕೊಳ್ಳಲಾಗುವುದು’ ಎಂದು ಜಿಲ್ಲಾಧಿಕಾರಿ ರಾಜೇಂದ್ರ ತಿಳಿಸಿದರು.

'2 ಗ್ರಾಮದಲ್ಲಿ ಖಾಸಗಿ ಕೊಳವೆಬಾವಿ ಬಳಕೆ"

ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್‌ ರಂಜಿತ್ ಮಾತನಾಡಿ, ‘ಪ್ರಸ್ತುತ 2 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಇದ್ದು, ಖಾಸಗಿ ಕೊಳವೆಬಾವಿಗಳ ಮೂಲಕ ಒದಗಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ 134 ಗ್ರಾಮಗಳಲ್ಲಿ ನೀರಿನ ಅಭಾವ ಉಂಟಾಗುವ ಸಂಭವವಿದೆ. ಈ ಪೈಕಿ 36 ಗ್ರಾಮಗಳಿಗೆ ಈಗ ಪ್ರತಿನಿತ್ಯವೂ ನೀರು ಪೂರೈಸಲಾಗುತ್ತಿದೆ’ ಎಂದು ಮಾಹಿತಿ ನೀಡಿದರು.

ಪಶುಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಮ.ಪು. ಪೂರ್ಣಾನಂದ ಮಾತನಾಡಿ, ‘ಜಿಲ್ಲೆಯಲ್ಲಿ 34 ವಾರಗಳಿಗೆ ಆಗುವಷ್ಟು ಮೇವು ಲಭ್ಯವಿದೆ. ರೈತರಿಗೆ ಮೇವಿನ ಪೊಟ್ಟಣಗಳನ್ನೂ ಕೊಡಲಾಗುವುದು. ಈಗಾಗಲೇ 68 ಸಾವಿರ ಮೇವಿನ ಬೀಜಗಳ ಕಿಟ್‌ಗಳನ್ನು ವಿತರಿಸಲಾಗಿದೆ. ಗೋಶಾಲೆ ತೆರೆಯುವ ಅವಶ್ಯಕತೆ ಸದ್ಯಕ್ಕೆ ಇಲ್ಲ. ಈಗಾಗಲೇ ಅಂತರರಾಜ್ಯ ಮೇವು ಸಾಗಣೆ ನಿರ್ಬಂಧ ಜಾರಿಯಲ್ಲಿದೆ. ಇದರಿಂದಾಗಿ ಮೇವಿನ ಕೊರತೆ ಆಗದಂತೆ ನೋಡಿಕೊಳ್ಳಲಾಗಿದೆ’ ಎಂದು ತಿಳಿಸಿದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕ ಬಿ.ಎಸ್. ಚಂದ್ರಶೇಖರ್ ಮಾತನಾಡಿ, ‘ಪೂರ್ವ ಮುಂಗಾರಿನಲ್ಲಿ ಹತ್ತಿ ಬೀಜಗಳ ಕೊರತೆ ಉಂಟಾಗಿದೆ. ಸದ್ಯ ರೈತ ಸಂಪರ್ಕ ಕೇಂದ್ರಗಳಲ್ಲಿ 1.20 ಲಕ್ಷ ಪಾಕೆಟ್ ಹತ್ತಿ ಬೀಜ ದೊರೆಯಲಿದೆ. ಬರ ಪರಿಹಾರದಡಿ ತಲಾ ₹ 2 ಸಾವಿರದಂತೆ ಜಿಲ್ಲೆಯ 88,620 ರೈತರಿಗೆ ₹ 15.83 ಕೋಟಿಯನ್ನು ಅವರವರ ಖಾತೆಗಳಿಗೆ ನೇರವಾಗಿ ಜಮಾ ಮಾಡಲಾಗಿದೆ’ ಎಂದು ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಂ.ಗಾಯಿತ್ರಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT