ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬರ ನಿರ್ವಹಣೆಯಲ್ಲಿ ಕಾಂಗ್ರೆಸ್ ಸರ್ಕಾರ ವಿಫಲ: ರಘು ಕೌಟಿಲ್ಯ ಆರೋಪ

Published 25 ಡಿಸೆಂಬರ್ 2023, 13:36 IST
Last Updated 25 ಡಿಸೆಂಬರ್ 2023, 13:36 IST
ಅಕ್ಷರ ಗಾತ್ರ

ಮೈಸೂರು: ‘ರಾಜ್ಯ ಸರ್ಕಾರವು ಬರಗಾಲ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದ್ದು, ರೈತರ ವಿರೋಧಿಯಾಗಿದೆ’ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ರಘು ಕೌಟಿಲ್ಯ ದೂರಿದರು.

ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ‘ಕಾಂಗ್ರೆಸ್ ಸರ್ಕಾರ ಬಂದು ಆರು ತಿಂಗಳು ಕಳೆದಿದೆ. ಬರ ಪರಿಹಾರ ಸಿಗದಿರುವುದರಿಂದ ರೈತರ ಆತ್ಮಹತ್ಯೆ ಸರಣಿ ಮುಂದುವರಿದಿದೆ. ಮಳೆ ಕೊರತೆಯ ಮುನ್ಸೂಚನೆ ಇದ್ದರೂ ಸಮರ್ಪಕ ತಯಾರಿಗಳನ್ನು ಮಾಡಿಕೊಳ್ಳುವಲ್ಲಿ ಈ ಸರ್ಕಾರ ನಿರ್ಲಕ್ಷ್ಯ ವಹಿಸಿತು’ ಎಂದು ಆರೋಪಿಸಿದರು.

‘ತನ್ನ ವೈಫಲ್ಯವನ್ನು ಮುಚ್ಚಿಟ್ಟುಕೊಳ್ಳಲು ರಾಜ್ಯ ಸರ್ಕಾರವು ಕೇಂದ್ರದ ಕಡೆಗೆ ಕೈತೋರುತ್ತಿದೆ’ ಎಂದು ಆಕ್ರೋಶ ವ್ಯಕ್ತ‍ಪಡಿಸಿದರು.

‘ಈ ಸರ್ಕಾರದಲ್ಲಿ ಹಿಂದುಳಿದ ವರ್ಗಗಳಿಗೆ ಯಾವುದೇ ಸೌಲಭ್ಯಗಳನ್ನು ನೀಡಲಾಗಿಲ್ಲ. ಸಿದ್ದರಾಮಯ್ಯ ಅವರು ಹೆಸರಿಗೆ ಮಾತ್ರ ಅಹಿಂದ ನಾಯಕ ಎಂದು ಬಳಸಿಕೊಳ್ಳುತ್ತಾರೆ. ಹಿಂದುಳಿದ ವರ್ಗಗಳಿಗೆ ಶಕ್ತಿ ನೀಡಿದ್ದರೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಾತ್ರ’ ಎಂದರು.

‘ಪಕ್ಷವು ನನಗೆ ಹಿಂದುಳಿದ ವರ್ಗಗಳ ಮೋರ್ಚಾ ಮುನ್ನಡೆಸುವ ಜವಾಬ್ದಾರಿ ನೀಡಿದೆ. ಈ ಅವಕಾಶ ನೀಡಿದ ನಾಯಕರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳಲ್ಲೂ ಗೆಲ್ಲಲು ಶ್ರಮಿಸುತ್ತೇವೆ. ರಾಜ್ಯದಾದ್ಯಂತ ಸಂಚರಿಸಿ ಪಕ್ಷ ಸಂಘಟನೆಗೆ ಆದ್ಯತೆ ನೀಡುತ್ತೇನೆ’ ಎಂದು ತಿಳಿಸಿದರು.

ಪಕ್ಷದ ರಾಜ್ಯ ಘಟಕದ ಉಪಾಧ್ಯಕ್ಷ ಎಂ. ರಾಜೇಂದ್ರ ಮಾತನಾಡಿ, ‘ಕಾಂಗ್ರೆಸ್‌ನವರು ಶಕ್ತಿ ಯೋಜನೆಯ ಮೂಲಕ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿ ಮಹಿಳೆಯರ ಗೌರವವನ್ನು ಹಾಳು ಮಾಡಿದ್ದಾರೆ. ಮಹಿಳೆಯರು ಜುಟ್ಟು ಹಿಡಿದು ಜಗಳವಾಡುವ ಸ್ಥಿತಿಗೆ ತಂದು ನಿಲ್ಲಿಸಿದ್ದಾರೆ. ಅವರು ಸ್ವಾಭಿಮಾನದಿಂದಿರಲು ಸಾಧ್ಯವಾಗುತ್ತಿಲ್ಲ. ಬದಲಿಗೆ ನೋವು ಅನುಭವಿಸುತ್ತಿದ್ದಾರೆ’ ಎಂದು ಆರೋಪಿಸಿದರು.

‘ರಾಜ್ಯದಲ್ಲಿ ಶೀಘ್ರದಲ್ಲೇ ಚುನಾವಣೆ ನಡೆಯಲಿದೆ. ಲೋಕಸಭಾ ಚುನಾವಣೆ ಬಳಿಕ ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂಬ ವಿಚಾರದಲ್ಲಿ ಕಲಹ ಉಂಟಾಗಿ ಕಾಂಗ್ರೆಸ್ ಸರ್ಕಾರ ಪತನಗೊಳ್ಳಲಿದೆ. ನಾವು ಚುನಾವಣೆಗೆ ಸಿದ್ಧವಾಗುತ್ತಿದ್ದೇವೆ. ಐದು ವರ್ಷ ಕಾಯಬೇಕಾಗಿಲ್ಲ’ ಎಂದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT