ಮಂಗಳವಾರ, 8 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ದಸರೆಗೆ ಭರದ ಸಿದ್ಧತೆ: ಮಹದೇವಪ್ಪ

ಪರಿಶೀಲನಾ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ
Published : 21 ಸೆಪ್ಟೆಂಬರ್ 2024, 6:08 IST
Last Updated : 21 ಸೆಪ್ಟೆಂಬರ್ 2024, 6:08 IST
ಫಾಲೋ ಮಾಡಿ
Comments

ಮೈಸೂರು: ‘ದಸರಾ ಮಹೋತ್ಸವಕ್ಕೆ ಭರದಿಂದ ಸಿದ್ಧತೆ ನಡೆಸಲಾಗುತ್ತಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದರು.

ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

‘ರಾಜ್ಯದಲ್ಲಿನ ಬರಗಾಲದ ಪರಿಸ್ಥಿತಿಯಿಂದಾಗಿ ಕಳೆದ ವರ್ಷ ದಸರಾ ಹಬ್ಬವನ್ನು ಸರಳವಾಗಿ, ಸಾಂಪ್ರದಾಯಿಕ ಆಚರಿಸಲಾಗಿತ್ತು. ಆದರೆ, ಈ ವರ್ಷ ಉತ್ತಮ ಮುಂಗಾರು ಮಳೆ ಆಗಿರುವುದರಿಂದ ಅದ್ದೂರಿಯಾಗಿ ಆಚರಿಸಲಾಗುವುದು. ಇದಕ್ಕಾಗಿ ರಚಿಸಲಾಗಿರುವ 19 ಉಪಸಮಿತಿಗಳೂ ಎಲ್ಲ ರೀತಿಯ ಸಿದ್ಧತೆಯನ್ನು ಮಾಡಿಕೊಳ್ಳಬೇಕು. ದಸರಾದಲ್ಲಿ ಪ್ರಜಾಪ್ರಭುತ್ವ ಹಾಗೂ ಸಂವಿಧಾನವನ್ನು ಬಿಂಬಿಸುವ ಕಲಾಕೃತಿಗಳು, ಸರ್ಕಾರದ ಅಭಿವೃದ್ಧಿ ಯೋಜನೆಗಳು ಹಾಗೂ ಗ್ಯಾರಂಟಿ ಯೋಜನೆಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಸ್ತಬ್ಧಚಿತ್ರಗಳನ್ನು ಸಿದ್ಧಪಡಿಸಬೇಕು’ ಎಂದು ಸೂಚಿಸಿದರು.

ಅಧ್ಯಕ್ಷತೆ ವಹಿಸಿದ್ದ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್‌ ತಂಗಡಗಿ, ‘ಕಳೆದ ಬಾರಿ ಆಗಿರುವ ನ್ಯೂನತೆಗಳು ಮರುಕಳಿಸದಂತೆ ನೋಡಿಕೊಳ್ಳಬೇಕು. ಯಾವುದೇ ಅಡಚಣೆ ಹಾಗೂ ತೊಂದರೆ ಉಂಟಾಗದಂತೆ ಅಚ್ಚುಕಟ್ಟಾಗಿ ದಸರಾ ಆಚರಣೆ ಮಾಡಬೇಕು. ಕರ್ನಾಟಕ ಸಂಭ್ರಮ: 50, ಪ್ರಜಾಪ್ರಭುತ್ವ ಹಾಗೂ ಸಂವಿಧಾನವನ್ನು ಬಿಂಬಿಸುವ ಕಲಾಕೃತಿಗಳು ಮೆರವಣಿಗೆಯಲ್ಲಿ ಇರುವಂತೆ ನೋಡಿಕೊಳ್ಳಬೇಕು. ಹೊಸತನಕ್ಕೆ ಆದ್ಯತೆ ಕೊಡಬೇಕು’ ಎಂದು ನಿರ್ದೇಶನ ನೀಡಿದರು.

‘ಪ್ರತಿ ಕಾರ್ಯಕ್ರಮದ ಬಗ್ಗೆಯೂ ಎಚ್ಚರ ವಹಿಸಬೇಕು. ವೀಕ್ಷಿಸಲು ಬರುವ ಸಾರ್ವಜನಿಕರು ಹಾಗೂ ಪ್ರವಾಸಿಗರಿಗೆ ಯಾವುದೇ ರೀತಿಯ ನಿರಾಸೆ ಆಗದಂತೆ ಅದ್ದೂರಿಯಾಗಿರುವಂತೆ ನೋಡಿಕೊಳ್ಳಬೇಕು. ಅಧಿಕಾರಿಗಳು ಆಸಕ್ತಿಯಿಂದ ಕೆಲಸ ನಿರ್ವಹಿಸಿ ಮಹೋತ್ಸವವನ್ನು ಯಶಸ್ವಿಗೊಳಿಸಬೇಕು’ ಎಂದರು.

ಸಂಸದ ಸುನೀಲ್‌ ಬೋಸ್, ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಂ. ಗಾಯಿತ್ರಿ, ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವರಾಜು, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಎಸ್ಪಿ ಎನ್. ವಿಷ್ಣುವರ್ಧನ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT