ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದತ್ತು ಯೋಜನೆ: ಪರಿಣಾಮಕಾರಿ ಜಾರಿಗೆ ಸೂಚನೆ

ಸಭೆ ನಡೆಸಿದ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ
Last Updated 6 ಫೆಬ್ರುವರಿ 2023, 11:04 IST
ಅಕ್ಷರ ಗಾತ್ರ

ಮೈಸೂರು: ‘ದತ್ತು ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿ ಅನಾಥ ಮಕ್ಕಳಿಗೆ ಶಾಶ್ವತ ನೆಲೆ ಕಲ್ಪಿಸಬೇಕು’ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿ ಸೋಮವಾರ ನಡೆದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವಿವಿಧ ಸಮಿತಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಜಿಲ್ಲೆಯಲ್ಲಿ ಅನಾಥ ಮಕ್ಕಳಿದ್ದಾರೆ, ಅಂತಹ ಮಕ್ಕಳನ್ನು ದತ್ತು ತೆಗೆದುಕೊಳ್ಳಲು ಪೋಷಕರೂ ಇರುತ್ತಾರೆ. ಇದನ್ನು ಬಳಸಿಕೊಂಡು ಮಕ್ಕಳಿಗೆ ಅನುಕೂಲ ಕಲ್ಪಿಸಬೇಕು’ ಎಂದರು.

‘ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಸೂಕ್ಷ್ಮವಾದುದು. ಮಕ್ಕಳ ಹಕ್ಕುಗಳನ್ನು ರಕ್ಷಿಸುವ ಗುರುತರವಾದ ಜವಾಬ್ದಾರಿ ಹೊಂದಿದೆ. ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು’ ಎಂದು ತಿಳಿಸಿದರು.

‘ಎಚ್‌ಐವಿ ಪೀಡಿತ ತಂದೆ–ತಾಯಿಯಿಂದ ಸೋಂಕು ಮಕ್ಕಳಿಗೆ ಬರುವ ಸಾಧ್ಯತೆ ಇದ್ದು, ಅಂತಹ ಮಕ್ಕಳನ್ನು ಗುರುತಿಸಿ ಚಿಕಿತ್ಸೆ ನೀಡುವ ಜೊತೆಗೆ ಪ್ರತಿ ತಿಂಗಳು ₹ 1,000 ಪ್ರೋತ್ಸಾಹ ಧನ ನೀಡಬೇಕು. ಯಾರಾದರೂ ಮರಣ ಹೊಂದಿದ್ದರೆ ಅವರನ್ನು ಪಟ್ಟಿಯಿಂದ ಕೈಬಿಡಬೇಕು’ ಎಂದು ನಿರ್ದೇಶನ ನೀಡಿದರು.

‘ಬಾಲ್ಯ ವಿವಾಹಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಬೇಕು. ಗ್ರಾಮೀಣ ಭಾಗಗಳಲ್ಲಿ ಹೆಚ್ಚು ಬಾಲ್ಯ ವಿವಾಹಗಳು ನಡೆಯುತ್ತವೆ. ಶಾಲೆ–ಕಾಲೇಜು ಬಿಟ್ಟವರ ಬಗ್ಗೆ ಅಧ್ಯಯನ ಮಾಡಿದರೆ ಇನ್ನೂ ಪರಿಣಾಮಕಾರಿಯಾಗಿ ಬಾಲ್ಯ ವಿವಾಹಗಳನ್ನು ತಡೆಯಬಹುದು. ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರ ಗಮನಕ್ಕೆ ಬಾರದೇ ಯಾವುದೇ ಬಾಲ್ಯವಿವಾಹಗಳೂ ನಡೆಯುವುದಿಲ್ಲ. ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮಾಹಿತಿ ಪಡೆದುಕೊಳ್ಳಬೇಕು, ಮಕ್ಕಳ ಮದುವೆ ಮಾಡುವುದನ್ನು ತಪ್ಪಿಸಬೇಕು. ಕಾನೂನು ಉಲ್ಲಂಘಿಸಿದವರಿಗೆ ಶಿಕ್ಷೆ ಆಗುವಂತೆ ನೋಡಿಕೊಳ್ಳಬೇಕು’ ಎಂದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದೇವರಾಜ ಭೂತೆ, ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಂ.‌ಗಾಯತ್ರಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಬಸವರಾಜು, ಡಿಎಚ್‌ಒ ಡಾ.ಕೆ.ಎಚ್.ಪ್ರಸಾದ್ ಇದ್ದರು.

699 ಮಕ್ಕಳು ಶಾಲೆಯಿಂದ ಹೊರಗೆ!

‘ಜಿಲ್ಲೆಯಲ್ಲಿ 699 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ. ಶಾಲೆ ಬಿಟ್ಟ ಮಕ್ಕಳ ಪೋಷಕರನ್ನು ಮನವೊಲಿಸಿ ಅಂತಹ ಮಕ್ಕಳನ್ನು ಮರಳಿ ಶಾಲೆಗೆ ಕರೆದುಕೊಂಡು ಬರಬೇಕು. ಶಿಕ್ಷಣದ ಜೊತೆಗೆ ಬಾಲ್ಯದ ಜೀವನದ ಕ್ಷಣಗಳನ್ನು ಅನುಭವಿಸಲು ಅವಕಾಶ ಕಲ್ಪಿಸಬೇಕು. ಮಕ್ಕಳ ಹಕ್ಕುಗಳನ್ನು ರಕ್ಷಣೆ ಮಾಡಬೇಕು’ ಎಂದು ಜಿಲ್ಲಾಧಿಕಾರಿ ರಾಜೇಂದ್ರ ಸೂಚಿಸಿದರು.

‘2023ರಲ್ಲಿ ಮೈಸೂರನ್ನು ಬಾಲ ಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿ ಘೋಷಣೆ ಮಾಡುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು. ಮುಂದಿನ 3 ತಿಂಗಳಲ್ಲಿ 150 ಬಾಲಕಾರ್ಮಿಕರನ್ನು ಗುರುತಿಸಿ ಬಾಲ ಕಾರ್ಮಿಕ ಪದ್ಧತಿಯಿಂದ ಮುಕ್ತಗೊಳಿಸಬೇಕು’ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿಗೆ ಗಡುವು ನೀಡಿದರು.

ಭಿಕ್ಷಾಟನೆ ಬಿಡಿಸಬೇಕು

ಮೈಸೂರು ಪ್ರವಾಸಿ ತಾಣವಾಗಿದ್ದು, ಇಲ್ಲಿ ಭಿಕ್ಷಾಟನೆ ಹೆಚ್ಚಿದೆ. ಅಂತಹ ಮಕ್ಕಳನ್ನು ಗುರುತಿಸಿ ಕೌನ್ಸೆಲಿಂಗ್‌ ಮಾಡಿ ಭಿಕ್ಷಾಟನೆ ಬಿಡಿಸಬೇಕು.

–ಡಾ.ಕೆ.ವಿ.ರಾಜೇಂದ್ರ, ಜಿಲ್ಲಾಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT