ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು | ಪರಿಶಿಷ್ಟರ ಅನುದಾನ ಸಂಪೂರ್ಣ ಬಳಸಿ

ವ್ಯರ್ಥವಾಗದಂತೆ ನೋಡಿಕೊಳ್ಳಲು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಸೂಚನೆ
Published 8 ಸೆಪ್ಟೆಂಬರ್ 2023, 5:21 IST
Last Updated 8 ಸೆಪ್ಟೆಂಬರ್ 2023, 5:21 IST
ಅಕ್ಷರ ಗಾತ್ರ

ಮೈಸೂರು: ‘ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಎಸ್.ಸಿ.ಪಿ., ಟಿ.ಎಸ್.ಪಿ ಯೋಜನೆಯಡಿ ನೀಡಿರುವ ಅನುದಾನವನ್ನು ಆರ್ಥಿಕ ವರ್ಷದಲ್ಲಿ ಸಂಪೂರ್ಣ ಬಳಕೆ ಮಾಡಬೇಕು. ಯಾವುದೇ ಕಾರಣಕ್ಕೂ ಬಳಕೆಯಾಗದೇ ವ್ಯರ್ಥವಾಗಬಾರದು’ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಬಾಬು ಜಗಜೀವನ್‌ರಾಂ ಭವನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕರ್ನಾಟಕ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಸರ್ಕಾರದಿಂದ ಅನುದಾನ ಬಿಡುಗಡೆ ಆಗುವವರೆಗೂ ಕಾಯಬಾರದು. ಫಲಾನುಭವಿಗಳ ಪಟ್ಟಿಯನ್ನು ಸಿದ್ಧವಾಗಿಟ್ಟುಕೊಂಡಿರಬೇಕು. ಅನುದಾನ ಬಿಡುಗಡೆಯಾದ ತಕ್ಷಣ ಸೌಲಭ್ಯ ಕಲ್ಪಿಸಲು ಅನುಕೂಲವಾಗುತ್ತದೆ. ಇದರಿಂದ ಅನುದಾನ ವ್ಯರ್ಥವಾಗುವುದನ್ನೂ ತಡೆಯಬಹುದು’ ಎಂದು ತಿಳಿಸಿದರು.

‘ಪರಿಶಿಷ್ಟ ಜಾತಿ ಮತ್ತು ಪಂಗಡದ ಫಲಾನುಭವಿಗಳು ಅರ್ಜಿ ಸಲ್ಲಿಸುವಾಗ ಸಣ್ಣ ಪುಟ್ಟ ದಾಖಲಾತಿಗಳನ್ನು ಸಲ್ಲಿಸದಿದ್ದರೆ, ನೀವೇ ಮುತುವರ್ಜಿ ವಹಿಸಿ ಅವರಿಂದ ದಾಖಲೆಗಳನ್ನು ಪಡೆದುಕೊಳ್ಳಬೇಕು. ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಿಸಬೇಕು’ ಎಂದು ಸೂಚಿಸಿದರು.

‘ಜಿಲ್ಲಾ ಉಸ್ತುವಾರಿ ಹಾಗೂ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರು ಸಂವಿಧಾನ ಓದು ಕಾರ್ಯಕ್ರಮವನ್ನು ಜಾರಿಗೆ ತಂದಿದ್ದಾರೆ. ಸೆ.15ರಂದು ತಮ್ಮ ಕಚೇರಿಗಳಲ್ಲಿ ಸಂವಿಧಾನ ಓದು ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಇದಕ್ಕಾಗಿ ನೋಂದಾಯಿಸಿಕೊಳ್ಳಬೇಕು’ ಎಂದು ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ ಮಾತನಾಡಿ, ‘ವಿವಿಧ ಇಲಾಖೆಗಳು ಹಾಗೂ ನಿಗಮಗಳಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ನೀಡುವ ಸೌಲಭ್ಯಗಳ ಕುರಿತು ಅರಿವು ಮೂಡಿಸಬೇಕು. ಸೌಲಭ್ಯಗಳನ್ನು ಜನರಿಗೆ ತಲುಪಿಸುವಲ್ಲಿ ಅಧಿಕಾರಿಗಳು ಬದ್ಧತೆಯಿಂದ ಕಾರ್ಯ ನಿರ್ವಹಿಸಬೇಕು’ ಎಂದರು.

ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಂ. ಗಾಯತ್ರಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ರಂಗೇಗೌಡ ಇದ್ದರು.

ಹಾಡಿಗಳಲ್ಲಿ ವಾಸಿಸುವ ಕೆಲವರ ಬಳಿ ಪಡಿತರ ಚೀಟಿ ಆಧಾರ್ ಕಾರ್ಡ್ ಉದ್ಯೋಗ ಚೀಟಿಗಳು ಬ್ಯಾಂಕ್ ಖಾತೆ ಇಲ್ಲ. ಅಧಿಕಾರಿಗಳು ಶಿಬಿರ ಆಯೋಜಿಸಿ ದಾಖಲೆ ಒದಗಿಸಬೇಕು
ಡಾ.ಕೆ.ವಿ.ರಾಜೇಂದ್ರ ಜಿಲ್ಲಾಧಿಕಾರಿ

ಹಾಡಿಗಳಲ್ಲಿ ವಾಸಿಸುವ ಕೆಲವರ ಬಳಿ ಪಡಿತರ ಚೀಟಿ ಆಧಾರ್ ಕಾರ್ಡ್ ಉದ್ಯೋಗ ಚೀಟಿಗಳು ಬ್ಯಾಂಕ್ ಖಾತೆ ಇಲ್ಲ. ಅಧಿಕಾರಿಗಳು ಶಿಬಿರ ಆಯೋಜಿಸಿ ದಾಖಲೆ ಒದಗಿಸಬೇಕು ಡಾ.ಕೆ.ವಿ.ರಾಜೇಂದ್ರ ಜಿಲ್ಲಾಧಿಕಾರಿ

ಸಾಮಾಜಿಕ ಅರಣ್ಯದ ಜಾಗ ನೀಡಬಹುದು

‘ಹಾಸ್ಟೆಲ್‌ಗಳಿಗೆ ಅಗತ್ಯ ಜಾಗವನ್ನು ಗುರುತಿಸಬೇಕು’ ಎಂದು ತಹಶೀಲ್ದಾರ್‌ಗೆ ಸೂಚಿಸಿದ ಜಿಲ್ಲಾಧಿಕಾರಿ ‘ಸಾಮಾಜಿಕ ಅರಣ್ಯ ಪ್ರದೇಶವನ್ನು ಹಾಸ್ಟೆಲ್ ನಿರ್ಮಾಣಕ್ಕೆ ನೀಡಲು ಯಾವುದೇ ಕಾಯ್ದೆಗಳು ಅಡ್ಡಿ ಬರುವುದಿಲ್ಲ. ಪರಿಶಿಷ್ಟ ಪಂಗಡದ ಹಾಸ್ಟೆಲ್‌ಗಳನ್ನು ಬುಡಕಟ್ಟು ಜನರು ಹೆಚ್ಚು ಇರುವ ಪ್ರದೇಶದಲ್ಲಿ ನಿರ್ಮಾಣ ಮಾಡಬೇಕು. ಹಾಸ್ಟೆಲ್ ನಿರ್ಮಾಣಕ್ಕೆ ಗುರುತಿಸಿರುವ ಜಾಗಗಳನ್ನು ಸರ್ವೆ ಮಾಡಿ ಸಣ್ಣಪುಟ್ಟ ತೊಡಕುಗಳನ್ನು ನಿವಾರಿಸಬೇಕು’ ಎಂದು ತಾಕೀತು ಮಾಡಿದರು.

ಭೂರಹಿತರ ಪಟ್ಟಿ ಮಾಡಿ

‘ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಇಲಾಖೆಯ ಅಧಿಕಾರಿಗಳು ಜಿಲ್ಲೆಯಲ್ಲಿ ಭೂಮಿ ಇಲ್ಲದಿರುವ ಎಸ್‌ಸಿ ಎಸ್‌ಟಿ ಕುಟುಂಬಗಳನ್ನು ಗುರುತಿಸಿ ಪಟ್ಟಿ ಮಾಡಬೇಕು. ಅವರಿಗೆ ಸರ್ಕಾರದಿಂದ ಭೂಮಿ ಒದಗಿಸಲು ಕ್ರಮ ವಹಿಸಲಾಗುವುದು’ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT