ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಟನ್‌ ಕಬ್ಬಿಗೆ ₹4 ಸಾವಿರ ನಿಗದಿಗೆ ಆಗ್ರಹ

ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ ಪ್ರತಿಭಟನೆ 16ರಂದು
Published 11 ಜುಲೈ 2024, 14:28 IST
Last Updated 11 ಜುಲೈ 2024, 14:28 IST
ಅಕ್ಷರ ಗಾತ್ರ

ಮೈಸೂರು: ‘ಟನ್‌ ಕಬ್ಬಿಗೆ ₹4 ಸಾವಿರ ನಿಗದಿಪಡಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದಲ್ಲಿ ಜುಲೈ 16ರಿಂದ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು’ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್‌ ತಿಳಿಸಿದರು.

ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ‘ಅಂದು ಬೆಳಿಗ್ಗೆ 11ಕ್ಕೆ ನಜರ್‌ಬಾದ್‌ ಮುಖ್ಯ ರಸ್ತೆಯಲ್ಲಿರುವ ಮಲೆ ಮಹದೇಶ್ವರ ದೇವಸ್ಥಾನದಿಂದ ಸಿದ್ಧಾರ್ಥನಗರದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು’ ಎಂದು ಹೇಳಿದರು.

‘ಸರ್ಕಾರದ ಆದೇಶದಂತೆ ಟನ್‌ ಕಬ್ಬಿಗೆ ಘೋಷಿಸಿದ್ದ ₹150 ಬಾಕಿಯನ್ನು ಸಕ್ಕರೆ ಕಾರ್ಖಾನೆಗಳಿಂದ ಕೊಡಿಸಬೇಕು. ಪ್ರತಿ ಸಕ್ಕರೆ ಕಾರ್ಖಾನೆಯ ಮುಂದೆ ಎಪಿಎಂಸಿ ಮುಖಾಂತರ ತೂಕದ ಯಂತ್ರದ ವ್ಯವಸ್ಥೆ ಮಾಡಬೇಕು. ಅಂತರ ಜಿಲ್ಲಾ ಕಬ್ಬು ಸಾಗಣೆಗೆ ನಿರ್ಬಂಧ ಹೇರಬಾರದು’ ಎಂದು ಒತ್ತಾಯಿಸಿದರು.

‘ಕೇಂದ್ರ ಸರ್ಕಾರವು ನ್ಯಾಯಸಮ್ಮತ ಹಾಗೂ ಮೌಲ್ಯಾಧಾರಿತ ದರವನ್ನು (ಎಫ್‌ಆರ್‌ಪಿ) ₹3,400 ನಿಗದಿಪಡಿಸಿರುವುದು ರೈತರಿಗೆ ಮಾಡಿದ ದ್ರೋಹವಾಗಿದೆ. ಇದನ್ನು ಕೂಡಲೇ ಮರುಪರಿಶೀಲಿಸಬೇಕು’ ಎಂದು ಆಗ್ರಹಿಸಿದರು.

‘ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ವ್ಯಾಪ್ತಿಯಲ್ಲಿ ಅಚ್ಚುಕಟ್ಟು ಪ್ರದೇಶದ ನಾಲೆಗಳಿಗೆ, ಕೆರೆ–ಕಟ್ಟೆಗಳಿಗೆ ಈ ಸಾಲಿನಲ್ಲಿ ಯಾವುದೇ ನಿರ್ಬಂಧ ಅಥವಾ ಷರತ್ತು ವಿಧಿಸದೇ ನೀರನ್ನು ಹರಿಸಿ ಕೃಷಿ ಚಟುವಟಿಕೆಗೆ ಅನುಕೂಲ ಮಾಡಿಕೊಡಬೇಕು. ಹೊಸ ಕೃಷಿ ಪಂಪ್‌ಸೆಟ್‌ಗಳಿಗೆ ಅಕ್ರಮ–ಸಕ್ರಮ ಯೋಜನೆಯನ್ನು ಮರು ಜಾರಿಗೊಳಿಸಬೇಕು’ ಎಂದು ಕೋರಿದರು.

ರಾಜ್ಯ ಘಟಕದ ಉಪಾಧ್ಯಕ್ಷ ಅಂಕನಹಳ್ಳಿ ತಿಮ್ಮಪ್ಪ, ನಗರ ಘಟಕದ ಅಧ್ಯಕ್ಷ ದೇವೇಂದ್ರಕುಮಾರ್, ಸರಗೂರು ತಾಲ್ಲೂಕು  ಘಟಕದ ಅಧ್ಯಕ್ಷ ಬಿದರಹಳ್ಳಿ ಮಾದಪ್ಪ, ಜಿಲ್ಲಾ ಘಟಕದ ಕಾರ್ಯದರ್ಶಿ ಬನ್ನಳ್ಳಿಹುಂಡಿ ರಾಜೇಂದ್ರ ಹಾಜರಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT