ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮೈಸೂರು | ‘ಸ್ವಚ್ಛ ಭಾರತ್ ಮಿಷನ್-2’ ಸೇರ್ಪಡೆಗೆ ಪ್ರಸ್ತಾವ

ಅಧಿಕಾರಿಗಳಿಗೆ ಶಾಸಕ ಜಿ.ಟಿ.ದೇವೇಗೌಡ ಸೂಚನೆ
Published 22 ಜೂನ್ 2024, 7:33 IST
Last Updated 22 ಜೂನ್ 2024, 7:33 IST
ಅಕ್ಷರ ಗಾತ್ರ

ಮೈಸೂರು: ‘ನಗರಕ್ಕೆ ಹೊಂದಿಕೊಂಡಿರುವ ಹಾಗೂ ಗ್ರಾಮ ಪಂಚಾಯಿತಿಯಿಂದ ಮೇಲ್ದರ್ಜೇಗೇರಿಸಿದ್ದರಿಂದ ಸೌಕರ್ಯಗಳ ಕೊರತೆ ಎದುರಿಸುತ್ತಿರುವ ಬೋಗಾದಿ, ಶ್ರೀರಾಂಪುರ, ಕಡಕೊಳ, ರಮ್ಮನಹಳ್ಳಿ ಪಟ್ಟಣ ಪಂಚಾಯಿತಿಗಳನ್ನು ಕೇಂದ್ರ ಸರ್ಕಾರದ ಸ್ವಚ್ಛ ಭಾರತ್ ಮಿಷನ್-2ಗೆ ಸೇರಿಸಲು ಪ್ರಸ್ತಾವ ಸಲ್ಲಿಸಬೇಕು’ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಸೂಚಿಸಿದರು.

ಇಲ್ಲಿನ ಜಲದರ್ಶಿನಿ ಅತಿಥಿ ಗೃಹದಲ್ಲಿರುವ ಶಾಸಕರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಗರಸಭೆ, ಪಟ್ಟಣ ಪಂಚಾಯಿತಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು’ ಎಂದು ನಿರ್ದೇಶನ ನೀಡಿದರು.

ಅನುದಾನದ ಕೊರತೆ: ಒಳಚರಂಡಿ ನಿರ್ಮಾಣ, ಕುಡಿಯುವ ನೀರಿನ ಸಮಸ್ಯೆ ನಿವಾರಣೆ ಹಾಗೂ ಸ್ವಚ್ಛತಾ ಕಾರ್ಯಕ್ಕೆ ಅನುದಾನ ಕೊರತೆ ಇದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಗ್ರಾಮ ಪಂಚಾಯಿತಿಯಿಂದ ಪಟ್ಟಣ ಪಂಚಾಯಿತಿಗೆ ಹಾಗೂ ನಗರಸಭೆಗೆ ಮೇಲ್ದರ್ಜೆಗೇರಿಸಿದ ಬಳಿಕ ಸಾರ್ವಜನಿಕರಿಂದ ಸಂಗ್ರಹವಾಗುತ್ತಿರುವ ತೆರಿಗೆಯಿಂದ ನಿರ್ವಹಣೆ ಮಾಡಲಾಗುತ್ತಿದೆ. ಪ್ರಮುಖ ಯೋಜನೆ ಕೈಗೆತ್ತಿಕೊಳ್ಳಲು ಅನುದಾನದ ಕೊರತೆ ಇದೆ ಎಂದು ತಿಳಿಸಿದರು.

ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕಾರ್ಯಪಾಲಕ ಎಂಜಿನಿಯರ್‌ ಆಸಿಫ್ ಮಾತನಾಡಿ, ‘ಸ್ವಚ್ಛಭಾರತ್ ಮಿಷನ್ ಯೋಜನೆ-2ಗೆ ಹೂಟಗಳ್ಳಿ ನಗರಸಭೆ ಸೇರಿದೆ. ಉಳಿದ ನಾಲ್ಕು ಪಟ್ಟಣ ಪಂಚಾಯಿತಿಗಳನ್ನು ಸೇರಿಸಿದರೆ ಯುಜಿಡಿ ಸಂಪರ್ಕ ಕಲ್ಪಿಸಲು ಅನುದಾನ ದೊರೆಯಲಿದೆ’ ಎಂದರು.

‘ಅಜ್ಜಯನಕೆರೆಗೆ ಕಲುಷಿತ ನೀರು ಸೇರದಂತೆ ರೂಪಾ ನಗರದಿಂದ ರಾಯನಕೆರೆವರೆಗೆ ಯುಜಿಡಿ ಸಂಪರ್ಕ ಕಲ್ಪಿಸಲು ₹ 25 ಕೋಟಿ ಕ್ರಿಯಾಯೋಜನೆ ಸಲ್ಲಿಸಲಾಗಿದೆ. ಸರ್ಕಾರದಿಂದ ಅನುಮೋದನೆ ಆಗಬೇಕಿದೆ’ ಎಂದು ತಿಳಿಸಿದರು.

‘ನಂಜನಗೂಡು, ಹುಣಸೂರು  ಕೂಡ ಎಸ್‌ಬಿಎಂ–2ಗೆ ಸೇರಿದೆ’ ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಶುಭಾ ತಿಳಿಸಿದರು.

ಹಣ ದೊರೆಯದಿದ್ದರೆ ಕಷ್ಟ: ಈ ಮಾಹಿತಿ ಪಡೆದ ಶಾಸಕರು, ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕ ಜಿ.ಲಕ್ಷ್ಮೀಕಾಂತ್ ರೆಡ್ಡಿ ಅವರಿಗೆ ಮೊಬೈಲ್‌ ಫೋನ್‌ ಮೂಲಕ ಮಾತನಾಡಿದರು. ನಗರಕ್ಕೆ ಹೊಂದಿಕೊಂಡಿರುವ 4 ಪಟ್ಟಣ ಪಂಚಾಯಿತಿಗಳನ್ನು ಸ್ವಚ್ಛ ಭಾರತ್ ಮಿಷನ್ -2ಗೆ ಸೇರಿಸಲು ಕ್ರಮ ಕೈಗೊಳ್ಳಬೇಕು. ಇದಕ್ಕಾಗಿ ಅಧಿಕಾರಿಗಳ ಮೂಲಕ ಪ್ರಸ್ತಾವ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಹೂಟಗಳ್ಳಿ ನಗರಸಭೆ ಆಯುಕ್ತ ಚಂದ್ರಶೇಖರ್ ಮಾತನಾಡಿ, ‘ಮುಡಾದಿಂದ ಅನುಮೋದನೆಗೊಂಡು ರಚಿಸಿರುವ 31 ಖಾಸಗಿ ಬಡಾವಣೆಗಳಿಗೆ ಮೂಲ ಸೌಕರ್ಯ ಕಲ್ಪಿಸಲು ಅನುದಾನದ ಕೊರತೆ ಇದೆ. ಮುಡಾದಿಂದ ಹಣ ಬಿಡುಗಡೆ  ಮಾಡದಿದ್ದರೆ ಕಷ್ಟವಾಗಲಿದೆ. ಸದ್ಯಕ್ಕೆ ₹ 10 ಕೋಟಿ ಕೊಡಿಸಿದರೆ ಆದ್ಯತೆ ಮೇಲೆ ಅಭಿವೃದ್ಧಿಗೆ ಕ್ರಮ ವಹಿಸಲಾಗುವುದು’ ಎಂದು ಹೇಳಿದರು.

ಬೋಗಾದಿ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ಕಸವನ್ನು ವಿದ್ಯಾರಣ್ಯಪುರಂ ಘನತ್ಯಾಜ್ಯ ನಿರ್ವಹಣಾ ಘಟಕಕ್ಕೆ ಸರಬರಾಜು ಮಾಡಲು ಹಣ ಪಾವತಿಸಲಾಗಿದೆ. ಆದರೂ ಪಾಲಿಕೆಯವರು ಸ್ವೀಕರಿಸುತ್ತಿಲ್ಲ ಎಂದು ಮುಖ್ಯಾಧಿಕಾರಿ ತಿಳಿಸಿದರು.

ಪಾಲಿಕೆ ಆಯುಕ್ತ ಆಶಾದ್ ಉರ್ ರೆಹಮಾನ್ ಷರೀಫ್ ಜೊತೆ ಶಾಸಕರು ಚರ್ಚಿಸಿ, ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

ಶ್ರೀರಾಂಪುರ, ಬೋಗಾದಿ ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಕಸ ಸಂಗ್ರಹಣೆ– ಸಾಗಣೆಗೆ 15 ವಾಹನಗಳ ವ್ಯವಸ್ಥೆ ಮಾಡುವಂತೆ ಶಾಸಕರು ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT