ಶುಕ್ರವಾರ, 13 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ: 19ರಂದು ಮೈಸೂರು ಬಂದ್‌ಗೆ ನಿರ್ಧಾರ

ಅಹಿಂದ ಮುಖಂಡರು, ಸಿದ್ದರಾಮಯ್ಯ ಅಭಿಮಾನಿಗಳ ಸಭೆಯಲ್ಲಿ ಚರ್ಚೆ
Published 17 ಆಗಸ್ಟ್ 2024, 14:32 IST
Last Updated 17 ಆಗಸ್ಟ್ 2024, 14:32 IST
ಅಕ್ಷರ ಗಾತ್ರ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಖಂಡಿಸಿ ಆ.19ರಂದು ‘ಮೈಸೂರು ಬಂದ್’ ನಡೆಸಲು ಶೋಷಿತ ಸಮುದಾಯದ ನಾಯಕರು, ಅಹಿಂದ ಮುಖಂಡರು ಮತ್ತು ಸಿದ್ದರಾಮಯ್ಯ ಅಭಿಮಾನಿಗಳ ಸಭೆಯಲ್ಲಿ ನಿರ್ಧರಿಸಲಾಯಿತು.

ಇಲ್ಲಿನ ಸಿದ್ಧಾರ್ಥ ನಗರದ ಕನಕ ಭವನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ರಾಜ್ಯಪಾಲರ ವಿರುದ್ಧ ಆಕ್ರೋಶ ವ್ಯಕ್ತವಾಯಿತು. ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ಅಧ್ಯಕ್ಷ ಬಿ.ಸುಬ್ರಹ್ಮಣ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ವಿವಿಧ ಸಮಾಜದ ಮುಖಂಡರು ಪಾಲ್ಗೊಂಡಿದ್ದರು.

ಬಂದ್‌ಗೆ ಇತರ ಸಂಘ–ಸಂಸ್ಥೆಗಳ ಬೆಂಬಲ ಪಡೆದು ಯಶಸ್ವಿಗೊಳಿಸುವ ತೀರ್ಮಾನ ಮಾಡಲಾಯಿತು.

ಕಾಂಗ್ರೆಸ್‌ ನಗರ ಜಿಲ್ಲಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಎಂ.ಶಿವಣ್ಣ, ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷ ಕೆ.ಎಸ್.ಶಿವರಾಮು, ಭೋವಿ ಸಮಾಜದ ಮುಖಂಡ ಜಿ.ವಿ.ಸೀತಾರಾಂ ಮೊದಲಾದವರು ಪಾಲ್ಗೊಂಡಿದ್ದರು.

ನೈತಿಕ ಬೆಂಬಲ ನೀಡಿ: ‘ರಾಜ್ಯಪಾಲರ ವಿರುದ್ಧ ಅಹಿಂದ ನಾಯಕರು, ಶೋಷಿತ ಸಮುಯದಾಯದವರು, ಸಿದ್ದರಾಮಯ್ಯ ಅಭಿಮಾನಿಗಳು ರಾಜ್ಯದಾದ್ಯಂತ ಪ್ರತಿಭಟನೆ ಕೈಗೊಳ್ಳಬೇಕು. ಈ ಮೂಲಕ ಸಿದ್ದರಾಮಯ್ಯ ಅವರಿಗೆ ನೈತಿಕ ಬೆಂಬಲ ನೀಡಬೇಕು’ ಎಂದು ಬಿ.ಸುಬ್ರಹ್ಮಣ್ಯ ಕೋರಿದರು.

‘ಬಿಜೆಪಿ–ಜೆಡಿಎಸ್‌ನವರು ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸುವ ಹುನ್ನಾರ ಮಾಡಿದ್ದಾರೆ. ಅದಕ್ಕೆ ರಾಜ್ಯಪಾಲರು ಸಹಕರಿಸಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಸಿದ್ದರಾಮಯ್ಯ ಕುಟುಂಬದ ಜಮೀನು ಪಡೆದುಕೊಂಡಿದ್ದಕ್ಕೆ ಪರಿಹಾರವಾಗಿ ಮುಡಾ ನಿವೇಶನ ಹಂಚಿಕೆ ಮಾಡಿದೆ. ಇದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಯು ಸೂಕ್ತ ದಾಖಲೆ ಬಿಡುಗಡೆ ಮಾಡಿ ಸ್ಪಷ್ಟನೆಯನ್ನೂ ನೀಡಿದ್ದಾರೆ. ಇಷ್ಟಕ್ಕೂ ಅವರಿಗೆ ನಿವೇಶನ ಹಂಚಿಕೆ ಮಾಡಿದ್ದು, ಬಿಜೆಪಿ ಸರ್ಕಾರವೇ. ಆದರೂ ಅದನ್ನು ಹಗರಣವೆಂದು ಬಿಂಬಿಸುತ್ತಿರುವುದು ಸರಿಯಲ್ಲ. ರಾಜ್ಯಪಾಲರು ತಮ್ಮ ನಿರ್ಧಾರದಿಂದ ಹಿಂದೆ ಸರಿಯಬೇಕು’ ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT