ಮೈಸೂರು: ‘ಕಾವೇರಿ ನದಿ ನೀರಿನ ವಿಚಾರದಲ್ಲಿ ಬಿಜೆಪಿಯವರು ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ’ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ದೂರಿದರು.
ಇಲ್ಲಿ ಪತ್ರಕರ್ತರೊಂದಿಗೆ ಸೋಮವಾರ ಮಾತನಾಡಿದ ಅವರು, ‘ಬಿಜೆಪಿ ಅಧಿಕಾರದಲ್ಲಿದ್ದಾಗಲೂ ತಮಿಳುನಾಡಿಗೆ ಕಾವೇರಿ ನದಿಯಿಂದ ನೀರು ಹರಿಸಲಾಗಿದೆ. ಈಗ ಅವರು ವಿರೋಧ ವ್ಯಕ್ತಪಡಿಸುತ್ತಿರುವುದು ಸರಿಯಲ್ಲ’ ಎಂದು ತಿರುಗೇಟು ನೀಡಿದರು.
‘ಕಾವೇರಿ ನೀರು ನಿರ್ವಹಣಾ ಮಂಡಳಿ ಹಾಗೂ ನ್ಯಾಯಾಲಯದ ನಿರ್ದೇಶನದಂತೆ ರಾಜ್ಯ ಸರ್ಕಾರ ನಡೆದುಕೊಳ್ಳುತ್ತಿದೆ. ಮಳೆಯಾಗದ ಸಂದರ್ಭದಲ್ಲಿ ಸಂಕಷ್ಟ ಸೂತ್ರದಡಿ ನೀರು ಹಂಚಿಕೆ ಮಾಡಿಕೊಳ್ಳಬೇಕಿದೆ. ಸಂಕಷ್ಟ ಸೂತ್ರದಂತೆ ನಮ್ಮ ಸರ್ಕಾರ ನಡೆದುಕೊಳ್ಳುತ್ತಿದೆ. ಆ.23ರಂದು ಸರ್ವ ಪಕ್ಷಗಳ ಸಭೆ ಕರೆದಿದ್ದು, ಅಲ್ಲಿ ಈ ಬಗ್ಗೆ ಒಮ್ಮತದ ನಿರ್ಧಾರ ಕೈಗೊಳ್ಳಲಾಗುತ್ತದೆ’ ಎಂದರು.
‘ಕಾವೇರಿ ಕರ್ನಾಟಕದ ಉಸಿರು. ಹಿಂದಿನಿಂದಲೂ ನಮಗೂ ತಮಿಳುನಾಡಿಗೂ ವ್ಯಾಜ್ಯ ನಡೆಯುತ್ತಲೇ ಇದೆ. ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ರಚನೆಯಾಗಿದೆ. ಯಾರ‍್ಯಾರಿಗೆ ಎಷ್ಟೆಷ್ಟು ನೀರು ಎನ್ನುವುದನ್ನು ಹಂಚಿಕೆ ಮಾಡಲಾಗಿದೆ. ನ್ಯಾಯಾಲಯದ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿದ್ದೇವೆ. ಬರದ ಪರಿಸ್ಥಿತಿಯಲ್ಲಿ ಎಲ್ಲರೂ ಸಂಕಷ್ಟವನ್ನು ಹಂಚಿಕೊಳ್ಳಬೇಕಿದೆ. ಈ ಬಾರಿ ಕಡಿಮೆ ಮಳೆ ಬಿದ್ದಿದೆ. ನಮ್ಮ ಜಲಾಶಯಗಳಲ್ಲಿ ನೀರಿನ ಸಂಗ್ರಹವೂ ಕಡಿಮೆ ಇದೆ. ಕಟ್ಟು ಪದ್ಧತಿಯಲ್ಲಿ ನಾಲೆಗಳಿಗೆ ನೀರು ಹರಿಸಲು ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನಿಸಿದೆ. ಯಾವುದೇ ಸರ್ಕಾರವೂ ವೈಯುಕ್ತಿಕ ಹಿತಾಸಕ್ತಿಯಿಂದ ಕೆಲಸ ಮಾಡುವುದಿಲ್ಲ. ಇದರಲ್ಲಿ ರಾಜಕೀಯ ಬೆರೆಸುವ ಅಗತ್ಯವಿಲ್ಲ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.