ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಡಿಪಿ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ

ಹಳ್ಳಿಗೆ ಭೇಟಿ: ಅಧಿಕಾರಿಗಳಿಗೆ ಸೂಚನೆ
Published 31 ಅಕ್ಟೋಬರ್ 2023, 13:59 IST
Last Updated 31 ಅಕ್ಟೋಬರ್ 2023, 13:59 IST
ಅಕ್ಷರ ಗಾತ್ರ

ಮೈಸೂರು: ‘ಬರಗಾಲದ ಈ ಸಂದರ್ಭದಲ್ಲಿ ಅಧಿಕಾರಿಗಳು ಹಳ್ಳಿ ಹಾಗೂ ಕ್ಷೇತ್ರಗಳಿಗೆ ಭೇಟಿ ನೀಡಿ ತಳಮಟ್ಟದಿಂದ ಕೆಲಸ ಮಾಡಬೇಕು’ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್. ಸೆಲ್ವಕುಮಾರ್ ಸೂಚಿಸಿದರು.

ಇಲ್ಲಿನ ನಗರಪಾಲಿಕೆ ಸಭಾಂಗಣದಲ್ಲಿ ಮಂಗಳವಾರ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ (ಕೆಡಿಪಿ)ಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಇಲಾಖೆಗಳು ಅಭಿವೃದ್ಧಿ ಕಾರ್ಯಗಳು ಕುಂಠಿತವಾಗದಂತೆ ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು. ಕುಡಿಯುವ ನೀರು ಪೂರೈಕೆಯಲ್ಲಿ ಎಚ್ಚರ ವಹಿಸಬೇಕು. ಕುಡಿಯುವ ನೀರಿನ ಟೆಂಡರ್ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು’ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಮಾತನಾಡಿ, ‘2019-20ನೇ ಸಾಲಿನಲ್ಲಿ ಮಳೆಯಿಂದ ಹಾನಿಯಾಗಿರುವ ಪ್ರದೇಶಗಳಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಮೇವಿನ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಬೇಕು’ ಎಂದು ಸೂಚಿಸಿದರು.‌

ಸಮರ್ಪಕವಾಗಿ ನಿರ್ವಹಿಸಿ:

‘ಗ್ರಾಮೀಣ ಜನರಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ಉದ್ಯೋಗ ನೀಡಬೇಕು. ಕಾವೇರಿ ಮತ್ತು ಕಬಿನಿ ಜಲಾಶಯದಿಂದ ಪೂರೈಕೆಯಾಗುತ್ತಿರುವ ನೀರನ್ನು ಸೂಕ್ತವಾಗಿ ನಿರ್ವಹಿಸಿ, ಸಮಸ್ಯೆ ಆಗದಂತೆ ಕಾರ್ಯ ನಿರ್ವಹಿಸಬೇಕು’ ಎಂದು ನಿರ್ದೇಶನ ನೀಡಿದರು.

‘ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಶೇ 70ರಷ್ಟು ಫಲಾನುಭವಿಗಳಿಗೆ ಡಿಬಿಟಿ ಮೂಲಕ ಹಣ ವರ್ಗಾವಣೆಯಾಗಿದೆ. ಇನ್ನುಳಿದವರಿಗೆ ಖಾತೆಗಳಲ್ಲಿನ ಇ–ಕೆವೈಸಿ ಸಂಬಂಧಿಸಿದ ಸಮಸ್ಯೆಗಳಿಂದ ಹಣ ವರ್ಗಾವಣೆಯಲ್ಲಿ ಸಮಸ್ಯೆಯಾಗಿದೆ. ಮಾಹಿತಿ ಪಡೆದು, ಖಾತೆಗೆ ಹಣ ಜಮಾ ಮಾಡಲಾಗುವುದು’ ಎಂದು ತಿಳಿಸಿದರು.

ಸೆಪ್ಟೆಂಬರ್‌ ಹಣ ಬಾಕಿ:

‘ಅನ್ನಭಾಗ್ಯ ಯೋಜನೆಯಡಿ ಎಲ್ಲ ತಾಲ್ಲೂಕುಗಳಲ್ಲೂ ಪಡಿತರ ವಿತರಿಸಲಾಗುತ್ತಿದೆ. ಸರ್ಕಾರದ ಆದೇಶದಂತೆ 5 ಕೆ.ಜಿ.ಗೆ ಪಡಿತರದ ಬದಲು ಹಣ ನೀಡಲಾಗುತ್ತಿದೆ. ಸೆಪ್ಟೆಂಬರ್ ನೇರ ನಗದು ವರ್ಗಾವಣೆಯು ಬಾಕಿ ಇದ್ದು, ಹಣ ಬಿಡುಗಡೆಯಾದ ತಕ್ಷಣ ವರ್ಗಾಯಿಸಲಾಗುವುದು’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

‘ಗೃಹ ಜ್ಯೋತಿ ಯೋಜನೆಯಲ್ಲಿ ಜಿಲ್ಲೆಯಲ್ಲಿ 9.8 ಲಕ್ಷ ಜನರು ಅರ್ಜಿ ಸಲ್ಲಿಸಿದ್ದು, ಅರ್ಹ ಫಲಾನುಭವಿಗಳಿಗೆ ಸೌಲಭ್ಯ ದೊರೆಯುತ್ತಿದೆ. 200 ಯೂನಿಟ್‌ಗಿಂತ ಹೆಚ್ಚಿನ ವಿದ್ಯುತ್ ಬಳಕೆ ಮಾಡುತ್ತಿರುವ ಗ್ರಾಹಕರಿಗೆ ಮಾತ್ರ ಬಿಲ್ ನೀಡಲಾಗುತ್ತಿದೆ’ ಎಂದರು.

‘ಶಿಕ್ಷಕರ ನೇಮಕಾತಿಗೆ ಸಂಬಂಧಿಸಿ ಪ್ರಕ್ರಿಯೆಗಳು ಪೂರ್ಣಗೊಂಡಿದ್ದು, ದಾಖಲೆಗಳ ಕೊರತೆಯಿಂದಾಗಿ ಕೆಲ ಅಭ್ಯರ್ಥಿಗಳ (ಹೊರ ಜಿಲ್ಲೆಯ) ನೇಮಕಾತಿಯು ತಡವಾಗುತ್ತಿದೆ. ಅಲ್ಲಿನ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿ ಆದಷ್ಟು ಬೇಗ ಸಿಂಧುತ್ವ ಪ್ರಮಾಣಪತ್ರವನ್ನು ನೀಡುವಂತೆ ತಿಳಿಸಲಾಗುವುದು’ ಎಂದು ಸೆಲ್ವಕುಮಾರ್ ಹೇಳಿದರು.

‘ಸಮಾಜ ಕಲ್ಯಾಣ ಇಲಾಖೆಯಿಂದ ಹಾಸ್ಟೆಲ್‌ಗಳ ಕಾರ್ಯವು ಪೂರ್ಣಗೊಳ್ಳುತ್ತಿದೆ. ಹೆಬ್ಬಾಳದಲ್ಲಿ ನಿರ್ಮಾಣ ನಡೆಯುತ್ತಿದ್ದು, ಇನ್ನೂ ಎರಡು ವಿದ್ಯಾರ್ಥಿನಿಲಯಗಳ ಕಾಮಗಾರಿ ಪ್ರಾರಂಭವಾಗಬೇಕಿದೆ. ಮೊರಾರ್ಜಿ ದೇಸಾಯಿ ಶಾಲಾ ಕಟ್ಟಡಗಳ ನಿರ್ಮಾಣವೂ ಪ್ರಗತಿಯಲ್ಲಿದೆ. ಜಿಲ್ಲೆಯಲ್ಲಿ ಹಾಸ್ಟೆಲ್‌ಗಳ ಕೊರತೆ ಇದ್ದು, ಹೊಸ ಕಟ್ಟಡಗಳು ನಿರ್ಮಾಣವಾಗುವವರೆಗೆ ಬಾಡಿಗೆ ಕಟ್ಟಡಗಳನ್ನು ಪಡೆದು ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆ ಆಗದಂತೆ ಕಾರ್ಯ ನಿರ್ವಹಿಸಲಾಗುತ್ತಿದೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಜಿ.ಪಂ. ಸಿಇಒ ಕೆ.ಎಂ. ಗಾಯಿತ್ರಿ, ಮುಡಾ ಆಯುಕ್ತ ಜಿ.ಟಿ. ದಿನೇಶ್‌ಕುಮಾರ್‌, ಮಹಾನಗರ ಪಾಲಿಕೆಯ ಆಯುಕ್ತ ಆಶಾದ್ ಉರ್ ರೆಹಮಾನ್ ಶರೀಫ್ ಇದ್ದರು.

ಸೆಲ್ವಕುಮಾರ್‌ ಸೂಚನೆ

* ಎಸ್ಸೆಸ್ಸೆಲ್ಸಿ ಫಲಿತಾಂಶ ವೃದ್ಧಿಗೆ ಕ್ರಮ ಕೈಗೊಳ್ಳಬೇಕು.

* ಬುಡಕಟ್ಟು ಜನರಿಗೆ ಬಿಪಿಎಲ್ ಕಾರ್ಡ್, ಆಧಾರ್ ಕಾರ್ಡ್ ಹಾಗೂ ಜಾಬ್ ಕಾರ್ಡ್ ವಿತರಣೆಗೆ ಕ್ರಮ ಕೈಗೊಳ್ಳಬೇಕು.

* ಗ್ರಾಮ ಒನ್ ಕೇಂದ್ರದ ಸೌಲಭ್ಯ ಬಳಕೆ ಹಾಗೂ ಬ್ಯಾಂಕ್ ಅಕೌಂಟ್ ತೆರೆಯುವಂತೆ ಜಾಗೃತಿ ಕಾರ್ಯಕ್ರಮ ನಡೆಸಿ.

* ದೀಪಾವಳಿ ಸಮೀಪಿಸುತ್ತಿದ್ದು, ಬೆಂಕಿ ಹಾಗೂ ವಿದ್ಯುತ್ ಅವಗಡಗಳು ಸಂಭವಿಸದಂತೆ ಎಚ್ಚರ ವಹಿಸಿ.

* ಪಟಾಕಿ ಮಾರುವವರನ್ನು ಗುರುತಿಸಿ ಹಸಿರು ಪಟಾಕಿಗಳನ್ನು ಬಳಸುವಂತೆ ಸೂಚಿಸಬೇಕು.

* ಹಳೆ ಜಿಲ್ಲಾಧಿಕಾರಿ ಕಟ್ಟಡ ಸೇರಿದಂತೆ ಸರ್ಕಾರಿ ಇಲಾಖೆಗಳ ಕಟ್ಟಡಗಳು ಸ್ವಚ್ಛ ಹಾಗೂ ವ್ಯವಸ್ಥಿತವಾಗಿರುವಂತೆ ನೋಡಿಕೊಳ್ಳಬೇಕು.

ಮನೆ ಕಟ್ಟಿಕೊಳ್ಳದಿದ್ದರೆ ಹಣ ವಾಪಸ್’

‘ನೆರೆಯಿಂದ ಮನೆಗಳನ್ನು ಕಳೆದುಕೊಂಡಿದ್ದವರಿಗೆ ಸರ್ಕಾರದಿಂದ ಪರಿಹಾರ ದೊರೆತಿದೆ. ಎರಡು ತಿಂಗಳಲ್ಲಿ ನಿರ್ಮಾಣ ಮಾಡಿಕೊಳ್ಳುವಂತೆ ಫಲಾನುಭವಿಗಳಿಗೆ ಸೂಚಿಸಬೇಕು. ಇಲ್ಲವಾದಲ್ಲಿ ಸರ್ಕಾರದಿಂದ ಮಂಜೂರಾಗಿರುವ ಹಣ ಹಿಂಪಡೆಯಲಾಗುವುದು’ ಎಂದು ಜಿಲ್ಲಾಧಿಕಾರಿ ರಾಜೇಂದ್ರ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT