ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು | ಹಾಸನದ ಪೆನ್‌ಡ್ರೈವ್ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲು ಆಗ್ರಹ

ಜಿಲ್ಲಾಧಿಕಾರಿ ಕಚೇರಿ ಮುಂದೆ ರಸ್ತೆ ತಡೆ ನಡೆಸಿದ ಜೆಡಿಎಸ್‌ ಮುಖಂಡರು
Published 8 ಮೇ 2024, 13:20 IST
Last Updated 8 ಮೇ 2024, 13:20 IST
ಅಕ್ಷರ ಗಾತ್ರ

ಮೈಸೂರು: ‘ಹಾಸನದ ಪೆನ್‌ಡ್ರೈವ್ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು’ ಎಂದು ಒತ್ತಾಯಿಸಿ ಜೆಡಿಎಸ್‌ ನಗರ (ಜಿಲ್ಲಾ) ಘಟಕದ ಮುಖಂಡರು ಹಾಗೂ ಸದಸ್ಯರು ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಬುಧವಾರ ರಸ್ತೆ ತಡೆ ನಡೆಸಿದರು.

ಜೆಡಿಎಸ್‌ ಕಾರ್ಯಾಧ್ಯಕ್ಷ ಸಾ.ರಾ. ಮಹೇಶ್‌ ಮಾತನಾಡಿ, ‘ಎಸ್‌ಐಟಿಯ ಕೆಲ ಅಧಿಕಾರಿಗಳು ಕಾನೂನಿನಡಿ ಕೆಲಸ ಮಾಡುತ್ತಿಲ್ಲ. ಬದಲಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮಾರ್ಗದರ್ಶನದಲ್ಲಿ ಕೆಲಸ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.

‘ಸಂತ್ರಸ್ತೆಯರು ಎಂದು ವಿಚಾರಣೆಗೆ ಕರೆದೊಯ್ದವರನ್ನು ಇಲ್ಲಿಯವರೆಗೆ ನ್ಯಾಯಾಧೀಶರ ಮುಂದೆ ಹಾಜರುಪಡಿಸದೆ, ಮಹಜರು ನಡೆಸದೆ, ಸೆಕ್ಷನ್‌ 164 ವಿಧಿಸಿಲ್ಲ ಯಾಕೆ? ಇವು ಅಧಿಕಾರಿಗಳ ಬಗೆಗಿನ ಅನುಮಾನಕ್ಕೆ ಕಾರಣವಾಗಿದೆ. ತಪ್ಪು ಮಾಡಿದವರ ವಿರುದ್ಧ ಕ್ರಮಕ್ಕೆ ನಮ್ಮ ಆಕ್ಷೇಪವಿಲ್ಲ. ಆದರೆ, ನಮ್ಮ ಪ್ರಾದೇಶಿಕ ಪಕ್ಷವನ್ನು ಪೊಲೀಸರ ಮೂಲಕ ಮುಗಿಸುವ ಹುನ್ನಾರವನ್ನು ಕಾಂಗ್ರೆಸ್‌ನ ಕೆಲ ನಾಯಕರು ಮಾಡುತ್ತಿದ್ದಾರೆ. ಈ ಸಂಚಿನ ಬಗ್ಗೆ ತನಿಖೆಯಾಗಬೇಕು’ ಎಂದು ಒತ್ತಾಯಿಸಿದರು.

‘ನಿಷ್ಪಕ್ಷಪಾತವಾಗಿ ತನಿಖೆ ನಡೆಸುವುದೇ ಆದರೆ ವಿಡಿಯೊ ಮಾಡಿ, ರಾಜಕೀಯ ಲಾಭಕ್ಕಾಗಿ ಪೆನ್‌ಡ್ರೈವ್‌ ಹಂಚಿದವರನ್ನು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳಿ. ಅವರ ವಿಚಾರಣೆ ನಡೆಸಿ ಪ್ರಕರಣದ ಸತ್ಯಾಸತ್ಯತೆ ರಾಜ್ಯದ ಜನರಿಗೆ ತಿಳಿಯಲಿ’ ಎಂದು ಆಗ್ರಹಿಸಿದರು.

ಶಾಸಕ ಜಿ.ಟಿ.ದೇವೇಗೌಡ ಮಾತನಾಡಿ, ‘ಪೆನ್‌ಡ್ರೈವ್‌ ಪ್ರಕರಣದಲ್ಲಿ ಅಂತರರಾಷ್ಟ್ರೀಯ ಮಟ್ಟದ ಜಾಲ ಹೊಂದಿದೆ. ಚೆನ್ನೈ, ಮಲೇಷ್ಯಾಕ್ಕೆ ತೆರಳಿ ಪೆನ್‌ಡ್ರೈವ್‌ ಸಿದ್ಧಪಡಿಸಿದ ಕುರಿತು, ಕಾರು ಚಾಲಕ ಕಾರ್ತಿಕ್‌ ಹಾಗೂ ಹಾಸನ ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್‌ ಗೌಡ ಅವರ ನಡುವಿನ ಸಂಬಂಧದ ಕುರಿತು ಕೂಲಂಕಷವಾಗಿ ತನಿಖೆ ನಡೆಸಲು ಎಸ್‌ಐಟಿಗೆ ಸಾಧ್ಯವಿಲ್ಲ. ಹೀಗಾಗಿ ಪ್ರಕರಣವನ್ನು ರಾಜ್ಯ ಸರ್ಕಾರವು ಸಿಬಿಐಗೆ ಒಪ್ಪಿಸಲಿ’ ಎಂದು ಒತ್ತಾಯಿಸಿದರು.

ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ‘ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ಪಕ್ಷದಿಂದ ವಜಾಗೊಳಿಸಬೇಕು’ ಎಂದು ಒತ್ತಾಯಿಸಿದರು. ಪ್ರತಿಭಟನಾ ಬರಹವುಳ್ಳ ಫಲಕ ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು. ಮುಖಂಡರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರಿಗೆ ಮನವಿ ಸಲ್ಲಿಸಿದರು.

ಶಾಸಕ ಜಿ.ಡಿ.ಹರೀಶ್‌ ಗೌಡ, ಪಾಲಿಕೆ ಮಾಜಿ ಸದಸ್ಯೆ ಪ್ರೇಮಾ ಶಂಕರೇಗೌಡ ಹಾಗೂ ಮುಖಂಡರು ಭಾಗವಹಿಸಿದ್ದರು.

ಮೈಸೂರಿನ ಸಿದ್ಧಾರ್ಥನಗರದ ಹಳೆಯ ಹಾಲಿನ ಡೇರಿ ಮುಂಭಾಗದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಜೆಡಿಎಸ್‌ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು –ಪ್ರಜಾವಾಣಿ ಚಿತ್ರ
ಮೈಸೂರಿನ ಸಿದ್ಧಾರ್ಥನಗರದ ಹಳೆಯ ಹಾಲಿನ ಡೇರಿ ಮುಂಭಾಗದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಜೆಡಿಎಸ್‌ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು –ಪ್ರಜಾವಾಣಿ ಚಿತ್ರ
ಜೆಡಿಎಸ್‌ ಮುಖಂಡರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರಿಗೆ ಮನವಿ ಸಲ್ಲಿಸಿದರು –ಪ್ರಜಾವಾಣಿ ಚಿತ್ರ
ಜೆಡಿಎಸ್‌ ಮುಖಂಡರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರಿಗೆ ಮನವಿ ಸಲ್ಲಿಸಿದರು –ಪ್ರಜಾವಾಣಿ ಚಿತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT