ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ ಚುನಾವಣೆ | ಮೈಸೂರಿನಲ್ಲಿ ಮೂರು ದಿನ ಮುಖ್ಯಮಂತ್ರಿ ಪ್ರವಾಸ

Published 31 ಮಾರ್ಚ್ 2024, 15:33 IST
Last Updated 31 ಮಾರ್ಚ್ 2024, 15:33 IST
ಅಕ್ಷರ ಗಾತ್ರ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.1ರಿಂದ ಮೂರು ದಿನಗಳವರೆಗೆ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಲೋಕಸಭೆ ಚುನಾವಣೆ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ಮುಖಂಡರ ಸಭೆಗಳನ್ನು ನಡೆಸಿ, ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ ಹಾಗೂ ಚಾಮರಾಜನಗರ ಕ್ಷೇತ್ರದ ಅಭ್ಯರ್ಥಿ ಸುನೀಲ್ ಬೋಸ್ ಗೆಲುವಿಗೆ ರಣತಂತ್ರ ರೂಪಿಸಲಿದ್ದಾರೆ.

ಏ.1ರಂದು ಬೆಳಿಗ್ಗೆ 10.45ಕ್ಕೆ ವಿಶೇಷ ವಿಮಾನದಲ್ಲಿ ಮಂಡಕಳ್ಳಿಗೆ ಬಂದಿಳಿಯುವ ಅವರು, ಬೆಳಿಗ್ಗೆ 11.30ಕ್ಕೆ ಮೈಸೂರು ತಾಲ್ಲೂಕಿನ ಬಿಳಿಗೆರೆಯಲ್ಲಿ ಹಾಗೂ ಮಧ್ಯಾಹ್ನ 3ಕ್ಕೆ ತಿ.ನರಸೀಪುರದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 6ಕ್ಕೆ ನಗರದಲ್ಲಿ ಬಿಷಪ್ ಹೌಸ್‌ಗೆ ಭೇಟಿ ನೀಡಿದ ಬಳಿಕ ವಾಸ್ತವ್ಯ ಹೂಡಲಿದ್ದಾರೆ.

ಏ.2ರಂದು ಬೆಳಿಗ್ಗೆ 10ಕ್ಕೆ ನಗರದ ಶಂಕರಮಠಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 11ಕ್ಕೆ ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಂಜೆ 4ಕ್ಕೆ ನಜರ್‌ಬಾದ್‌ನ ಜೆ.ಪಿ. ಫಾರ್ಚೂನ್ ಹೋಟೆಲ್‌ನಲ್ಲಿ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರ ಸಭೆ ನಡೆಸಲಿದ್ದಾರೆ.

ಏ.3ರಂದು ಬೆಳಿಗ್ಗೆ 9ಕ್ಕೆ ಸುತ್ತೂರು ಮಠಕ್ಕೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 11ಕ್ಕೆ ಚಾಮರಾಜನಗರದಲ್ಲಿ ಸುನೀಲ್‌ ಬೋಸ್ ಜೊತೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 1ರ ಸುಮಾರಿಗೆ ಮೈಸೂರಿಗೆ ಆಗಮಿಸಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ ಅವರ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅವರೊಂದಿಗೆ ಸಚಿವರಾದ ಡಾ.ಎಚ್‌.ಸಿ. ಮಹದೇವಪ್ಪ, ಕೆ. ವೆಂಕಟೇಶ್, ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿರುವ ಶಾಸಕ ತನ್ವೀರ್ ಸೇಠ್ ಭಾಗವಹಿಸಲಿದ್ದಾರೆ.

ಮುಖ್ಯಮಂತ್ರಿಯು ಅಂದು ಸಂಜೆ 6ಕ್ಕೆ ಇಲ್ಲಿಂದ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಯದುವೀರ್
ಯದುವೀರ್

ಯದುವೀರ್ ನಾಮಪತ್ರ ಸಲ್ಲಿಕೆ 3ಕ್ಕೆ ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಕೂಡ ಏ.3ರಂದೇ ನಾಮಪತ್ರ ಸಲ್ಲಿಸಲಿದ್ದಾರೆ. ಅಂದು ಬೆಳಿಗ್ಗೆ 10ಕ್ಕೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಿಂದ ಮೆರವಣಿಗೆ ನಡೆಸಿ ಶಕ್ತಿ ಪ್ರದರ್ಶನಕ್ಕೆ ಯೋಜಿಸಲಾಗಿದೆ. ಅವರೊಂದಿಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಸಂಸದ ಪ್ರತಾಪ ಸಿಂಹ ಶಾಸಕ ಟಿ.ಎಸ್. ಶ್ರೀವತ್ಸ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT