ಮೈಸೂರು: ‘ವಿದ್ಯಾರ್ಥಿಗಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಭಾಗವಹಿಸಿ ಸಮಗ್ರ ವ್ಯಕ್ತಿತ್ವ ಬೆಳೆಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು’ ಎಂದು ಜಾನಪದ ಗಾಯಕ ಪಿಚ್ಚಳ್ಳಿ ಶ್ರೀನಿವಾಸ್ ಸಲಹೆ ನೀಡಿದರು.
ಇಲ್ಲಿನ ಮಹಿಳಾ ಕಲಾ ಕಾಲೇಜಿನಲ್ಲಿ ಸಾಂಸ್ಕೃತಿಕ ವೇದಿಕೆ, ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್ ಕ್ರಾಸ್, ಸ್ಕೌಟ್ಸ್ ಅಂಡ್ ಗೈಡ್ಸ್ ಸಹಯೋಗದಲ್ಲಿ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.
‘ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆ ಸೂಕ್ತ ವೇದಿಕೆಗಳಲ್ಲಿ ಪ್ರದರ್ಶನವಾಗಬೇಕು’ ಎಂದರು.
ಕ್ರೀಡಾ ಚಟುವಟಿಕೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದ ನಿರೂಪಕ ನಿರಂಜನ್ ದೇಶಪಾಂಡೆ, ‘ಮಹಿಳೆಯರು ಹಾಗೂ ಮಕ್ಕಳ ಮೇಲೆ ನಡೆಯುತ್ತಿರುವ ಅತ್ಯಾಚಾರ ಮತ್ತು ದೌರ್ಜನ್ಯ ಸಮಾಜಕ್ಕೆ ಮಾರಕವಾಗಿದೆ. ಇದರ ತಡೆಗೆ ಪ್ರತಿಯೊಬ್ಬರೂ ಮುಂದಾಗಬೇಕು’ ಎಂದು ಹೇಳಿದರು.
ಎಪಿಎಂಸಿ ಮಾಜಿ ಅಧ್ಯಕ್ಷ ಅಹಿಂದ ಜವರಪ್ಪ, ಕಾಲೇಜಿನ ಪ್ರಾಂಶುಪಾಲ ಎಚ್.ಎಂ. ಬಸವರಾಜು, ಸಾಂಸ್ಕೃತಿಕ ವೇದಿಕೆ ಕಾರ್ಯದರ್ಶಿ ಜಿ.ಬಿ. ದೊರೆಸ್ವಾಮಿ, ಸಹ ಕಾರ್ಯದರ್ಶಿ ಡಿ. ಸುಂದರಿ, ಖಜಾಂಚಿ ಅಶ್ವಿನಿ ಪಾಲ್ಗೊಂಡಿದ್ದರು.